SUDDIKSHANA KANNADA NEWS/ DAVANAGERE/ DATE:17-11-2023
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರ ವಿರುದ್ಧ ಮತ್ತೆ ಕಿಡಿಕಾರಿರುವ ಸಿಎಂ ಸಿದ್ದರಾಮಯ್ಯ ಅವರು ಹೆಚ್ ಡಿಕೆ ಅವರದ್ದು ದ್ವೇಷ ಹಾಗೂ ಅಸೂಯೆಗಳ ರಾಜಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕುಮಾರಸ್ವಾಮಿ ದ್ವೇಷದ ರಾಜಕಾರಣ ಮುಂದುವರಿಸಿದ್ದು, ಮಾಜಿ ಮುಖ್ಯಮಂತ್ರಿಯಾಗಿದ್ದ ಅವರಿಗೆ ಅಸೂಹೆ ಹೆಚ್ಚು ಎಂದು ಕಿಡಿಕಾರಿದರು.
ಜೆಡಿಎಸ್ ನಿಂದ ಮತ್ತಷ್ಟು ನಾಯಕರು ಕಾಂಗ್ರೆಸ್ ಗೆ ಬರಲಿದ್ದಾರೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಜೆಡಿಎಸ್ ಅಥವಾ ಬಿಜೆಪಿಯ ನಾಯಕರು , ಕಾಂಗ್ರೆಸ್ ನ ಸಿದ್ದಾಂತ ಹಾಗೂ ನಾಯಕತ್ವವನ್ನು ಒಪ್ಪಿ ಬಂದಲ್ಲಿ, ಅವರನ್ನು ಸ್ವಾಗತಿಸಲಾಗುವುದು. ರಾಜ್ಯದ ಒಟ್ಟು 224 ಸ್ಥಾನದಲ್ಲಿ 136 ನ್ನು ಕಾಂಗ್ರೆಸ್ ಪಡೆದಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್ ನ ಶಕ್ತಿಯನ್ನು ವಿಸ್ತರಿಸಬೇಕಿದೆ. ಕೋಮುವಾದಿ ಪಕ್ಷಗಳು ಮತ್ತೆ ಅಧಿಕಾರಕ್ಕೆ ಬರಬಾರದು ಎಂದರು.
ಜೆಡಿಎಸ್ ನ ಕುಮಾರಸ್ವಾಮಿಯವರು ಕೇವಲ ದ್ವೇಷ ಹಾಗೂ ಅಸೂಯೆಗಳ ರಾಜಕಾರಣ ಮಾಡುತ್ತಾರೆ. ನನ್ನ ಮಗ ಯತೀಂದ್ರ ಆಶ್ರಯ ಸಮಿತಿ ಅಧ್ಯಕ್ಷನಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದರೆ, ಅವರ ಮೇಲೆ ವೃಥಾ ಆರೋಪ ಮಾಡುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ಇದುವರೆಗೂ ದ್ವೇಷದ ರಾಜಕಾರಣವನ್ನು ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ. ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು ಎಂದು ವಾಗ್ದಾಳಿ ನಡೆಸಿದರು.
ಹಗರಣಗಳ ತನಿಖೆ:
ಹಿಂದಿನ ಸರ್ಕಾರದ ಹಗರಣಗಳ ತನಿಖೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 40% ಕಮಿಷನ್, ಕೋವಿಡ್, ಬಿಟ್ ಕಾಯಿನ್ ಸೇರಿದಂತೆ ಇತರೆ ಹಗರಣಗಳ ತನಿಖೆಗೆ ಆಯೋಗಗಳನ್ನು ರಚಿಸಲಾಗಿದ್ದು, ವರದಿಯನ್ನು ನಿರೀಕ್ಷಿಸಲಾಗಿದೆ ಎಂದರು.
ಪಂಚ ರಾಜ್ಯಗಳ ಚುನಾವಣೆಯಲ್ಲಿ ತೆಲಂಗಾಣ, ಛತ್ತಿಸ್‍ಗಡ, ಮಧ್ಯಪ್ರದೇಶ ಹಾಗೂ ರಾಜಾಸ್ಥಾನದಲ್ಲಿಯೂ ನಾವು ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.
ನನಗೆ ಬಂದಿರುವ ಮಾಹಿತಿಯ ಪ್ರಕಾರ ಮೂರು ರಾಜ್ಯಗಳಲ್ಲಿ ಗೆಲ್ಲುತ್ತೇವೆ ಎಂದ ಅವರು. ಕಾಂಗ್ರೆಸ್ ಪರವಾಗಿ ಜನಾದೇಶ ಬಂದರೆ ಲೋಕಸಭಾ ಚುನಾವಣೆ ಮುಂದೂಡಲಾಗುವುದೇ ಎಂಬ ಬಗ್ಗೆ ಉತ್ತರಿಸಿ ಮುಂದೂಡಲಾಗುವುದಿಲ್ಲ. ಏಕೆಂದರೆ ಈಗಾಗಲೇ ನವೆಂಬರ್ ಕೊನೆಯಲ್ಲಿದ್ದೇವೆ, ಚುನಾವಣಾ ನೀತಿ ಸಂಹಿತೆ ಮಾರ್ಚ್ ಅಂತ್ಯಕ್ಕೆ ಆಗಬಹುದು ಎಂಬ ನಿರೀಕ್ಷೆ ಇದೆ ಎಂದು ತಿಳಿಸಿದರು.