SUDDIKSHANA KANNADA NEWS/ DAVANAGERE/ DATE:27-01-2025
ಬೆಂಗಳೂರು: ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಎಸ್ಪಿ ಹಾಗೂ ಡಿಸಿ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಶಿಷ್ಢ ಸಮುದಾಯದವರಿಗೆ ಅವಕಾಶ ತಪ್ಪಿಸಲು ಅಧಿಕಾರಿಗಳು ಕುಟಿಲ ನೀತಿ ಅನುಸರಿಸಿದರೆ ಸಹಿಸಲ್ಲ ಎಂದು ಖಡಕ್ ವಾರ್ನಿಂಗ್ ನೀಡಿದರು.
ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ, ಮೇಲ್ಮನವಿ ಹೋಗಿ ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ ? ಈ ಬಗ್ಗೆ ವಿವರ ಕೊಡಿ ಎಂದು ಅಧಿಕಾರಿಗಳಿಗೆ ಗರಂ ಆಗಿಯೇ ಪ್ರಶ್ನಿಸಿದರು.
ಪೊಲೀಸ್ ಇಲಾಖೆಯಲ್ಲಿ ಸೀನಿಯರಿಟಿ ಲೀಸ್ಟ್ ಉಲ್ಲಂಘನೆ ಆಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು ನಾವು ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ ? ಎಡಿಜಿಪಿ ಅಡ್ಮಿನ್ ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಂಸದ ಈ.ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಅವರು ಸಭೆಯ ಗಮನಕ್ಕೆ ತಂದರು. ಇದರಿಂದ ಅಸಮಾಧಾನಗೊಂಡ ಸಿಎಂ ಈ ವಿಚಾರವನ್ನು ಮುಂದಿನ ಕ್ಯಾಬಿನೆಟ್ ಗೆ ತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸಿಎಂ ಸೂಚಿಸಿದರು.
ಬ್ಯಾಕ್ ಲಾಗ್ ಮತ್ತು ಬಡ್ತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯಗಳನ್ನು ಸಬ್ ಕಮಿಟಿ ಪತ್ತೆ ಹಚ್ಚಿ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದೀರಿ. ಹಾಗಾದರೆ ಸಬ್ ಕಮಿಟಿ ಕೊಡುವ ವರದಿಗಳಿಗೆ ಬೆಲೆ ಇಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಸಭೆಯ ಗಮನಕ್ಕೆ ತಂದರು.
ಜಾತಿ ದೌರ್ಜನ್ಯ ದೂರು ಬಂದಾಗ ಪೊಲೀಸರೇ ಕೌಂಟರ್ ದೂರು ಪಡೆದು ಪ್ರಕರಣ ದುರ್ಬಲಗೊಳಿಸುವ ಬಗ್ಗೆ ದೂರುಗಳು ಬಂದರೆ ಅದನ್ನು ಸಹಿಸಲ್ಲ. ನಮ್ಮ ಗಮನಕ್ಕೆ ಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ತಗೊತೀವಿ. ಎಲ್ಲಾ ಇಲಾಖೆಗಳೂ ಬಡ್ತಿಯಲ್ಲಿ ಮೀಸಲಾತಿಯನ್ನು ಚಾಚೂ ತಪ್ಪದೆ ಪಾಲಿಸಬೇಕು. ಪರಿಶಿಷ್ಢ ಸಮುದಾಯದವರಿಗೆ ಅವಕಾಶ ತಪ್ಪಿಸಲು ಅಧಿಕಾರಿಗಳು ಕುಟಿಲ ನೀತಿ ಅನುಸರಿಸಿದರೆ ಸಹಿಸಲ್ಲ ಎಂದರು.
ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ ರಿವ್ಯೂ ಮೀಟಿಂಗ್ ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.
ಪ್ರತೀ ಆರು ತಿಂಗಳಿಗೊಮ್ಮೆ ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಕರೆಯುತ್ತೇವೆ. ಈ ಸಭೆಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಎಂ ಎಚ್ಚರಿಸಿದರು.