SUDDIKSHANA KANNADA NEWS/ DAVANAGERE/ DATE:23_07_2025
ಬೆಂಗಳೂರು: ಯುಪಿಐ ವಹಿವಾಟು ಕೈಬಿಟ್ಟರೆ ವಹಿವಾಟಿನ ಮೇಲೆ ಪರಿಣಾಮ ಬೀರಲಿದೆ. ರಾಜ್ಯದಲ್ಲಿ ಕೇವಲ 9ಸಾವಿರ ವ್ಯಾಪಾರಿಗಳಿಗೆ ಕಳೆದ 2-3 ವರ್ಷಗಳ ಅವಧಿಗೆ ಸಂಬಂಧಿಸಿದಂತೆ 18ಸಾವಿರ ನೊಟೀಸ್ ಜಾರಿಗೊಳಿಸಲಾಗಿದೆ.
ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಮಾಹಿತಿ ನೀಡಲಾಗಿದೆ.
ವ್ಯಾಪಾರ ವಹಿವಾಟುಗಳನ್ನು ಕಾನೂನು ಬದ್ಧವಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುವುದು ಸರ್ಕಾರದ ಉದ್ದೇಶವಲ್ಲ. ಸರ್ಕಾರ ಸಣ್ಣ ವ್ಯಾಪಾರಿಗಳ ಪರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಜಿಎಸ್ಟಿ ತೆರಿಗೆಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಈ ತೆರಿಗೆ ಸಂಗ್ರಹದಲ್ಲಿ ಶೇ.50ರಷ್ಟನ್ನು ರಾಜ್ಯಕ್ಕೆ ನೀಡಲಾಗುತ್ತದೆ. ದೇಶದಲ್ಲೇ ಕರ್ನಾಟಕ ಜಿಎಸ್ಟಿ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ಸರ್ಕಾರ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದ್ದು, ಯಾರಿಗೂ ತೊಂದರೆಯಾಗದಂತೆ ಖಾತ್ರಿಪಡಿಸಲಾಗುವುದು. ವ್ಯಾಪಾರಿಗಳಿಗೆ ನೆರವು ನೀಡಲು ಈಗಲೇ ಸಹಾಯವಾಣಿ ಇದ್ದು, ಇದನ್ನು ಪರಿಣಾಮಕಾರಿಯಾಗಿಸಬೇಕು. ವ್ಯಾಪಾರ ವಹಿವಾಟು ಬಂದ್ಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. ಈ ಕುರಿತಾಗಿ ನಡೆಸಲು ನಿರ್ಧರಿಸಿದ್ದ ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಕೈಬಿಡಲಾಗುವುದು ಎಂದು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಿಳಿಸಿದರು.