SUDDIKSHANA KANNADA NEWS/ DAVANAGERE/ DATE:22-10-2024
ಬೆಂಗಳೂರು: ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ. ಬಡವರ ವಿರೋಧಿ. ಮೂರು ಬಾರಿ ಪ್ರಧಾನಿ ಆಗಿರುವ ನರೇಂದ್ರ ಮೋದಿ ಕೊಟ್ಟ ಮಾತಿನಂತೆ ನಡೆದ ಉದಾಹರಣೆ ಇದೆಯಾ ಹೇಳಿ. ಇಷ್ಟು ವರ್ಷ ಪ್ರಧಾನಿಯಾಗಿ ಮೋದಿ ಬಡಪರ ಪರವಾಗಿ ಒಂದೇ ಒಂದು ಯೋಜನೆ ಜಾರಿ ಮಾಡಿದ್ದಾರಾ ಹೇಳಿ ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿ ಅವರು ಮಾತನಾಡಿದರು.
ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಕಟ್ಟುವವರು ನಾವು. ನಾವು ನಮ್ಮ ಪಾಲಿನ ತೆರಿಗೆ ಪಡೆಯಲು ಭಿಕ್ಷೆ ಬೇಡಬೇಕಾ? ಮೊನ್ನೆ ಉತ್ತರ ಪ್ರದೇಶ, ಬಿಹಾರ ರಾಜ್ಯಗಳಿಗೆ ಅತಿ ಹೆಚ್ಚು ತೆರಿಗೆ ಪಾಲು ಕೊಟ್ಟಿರುವ ಕೇಂದ್ರಕ್ಕೆ ರಾಜ್ಯಕ್ಕೆ ಮಾತ್ರ ಕೇವಲ ಆರು ಸಾವಿರ ಕೋಟಿ ಕೊಟ್ಟು ಭಯಾನಕ ಅನ್ಯಾಯ ಮಾಡಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಅನ್ಯಾಯದ ವಿರುದ್ದ ದೆಹಲಿಗೇ ಹೋಗಿ ನಾವು ಪ್ರತಿಭಟನೆ ಮಾಡಿದೆವು. ಬಿಜೆಪಿ-ಜೆಡಿಎಸ್ ಒಬ್ಬೇ ಒಬ್ಬ ಲೋಕಸಭಾ ಸದಸ್ಯ ರಾಜ್ಯದ ಪಾಲನ್ನು ಕೇಳುವ ಧೈರ್ಯ ಮಾಡಿಲ್ಲ. ಮಾಡುವುದೂ ಇಲ್ಲ. ಆದ್ದರಿಂದ ಕೇಂದ್ರದ ದ್ರೋಹದ ವಿರುದ್ಧ ರಾಜ್ಯದ ಜನತೆ ಮಾತನಾಡಬೇಕು ಎಂದು ಕರೆ ನೀಡಿದರು.
ರಾಜ್ಯಕ್ಕೆ ವಿಶೇಷ ಅನುದಾನದ ಜೊತೆಗೆ ನೀರಾವರಿ ಯೋಜನೆಗೆ 5495 ಕೋಟಿ ನೀಡಲು ಶಿಫಾರಸ್ಸು ಮಾಡಿದ್ದ ನಿರ್ಮಲಾ ಸೀತಾರಾಮನ್ ಈ ಹಣವನ್ನೂ ಕೊಡಲಿಲ್ಲ. ರಾಜ್ಯದ ಫೆರಿಫೆರಲ್ ರಸ್ತೆಗೆ, ಕೆರೆಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ಕೊಡ್ತೀವಿ ಅಂದು ಘೋಷಿಸಿದರು. ಆದರೆ ನಯಾಪೈಸೆ ಕೊಡಲಿಲ್ಲ. ಈ ಅನ್ಯಾಯಗಳ ವಿರುದ್ಧ ರಾಜ್ಯದ ಜನತೆ ಮಾತನಾಡಿದರೆ ತಪ್ಪಾ, ನಾವು ಪ್ರತಿಭಟಿಸಿದರೆ ತಪ್ಪಾ ಎಂದು ಗುಡುಗಿದರು.