SUDDIKSHANA KANNADA NEWS\ DAVANAGERE\ 16-10-2023
ನನ್ನದು ಜಾತ್ಯಾತೀತ ರಾಜಕೀಯ: ಸಿಎಂ ಸಿದ್ದರಾಮಯ್ಯ ಈ ಮಾತು ಹೇಳಿದ್ಯಾಕೆ…?
ಬೆಂಗಳೂರು: ನಾನು ರಾಜಕೀಯಕ್ಕೆ ಬಂದು 50 ವರ್ಷಗಳಾಗಿದೆ. 2005 ರಲ್ಲಿಜೆಡಿಎಸ್ ನಿಂದ ನನ್ನನ್ನು ಉಚ್ಛಾಟನೆ ಮಾಡಿದ ನಂತರ ಅನಿವಾರ್ಯವಾಗಿ ಕಾಂಗ್ರೆಸ್ ಸೇರಬೇಕಾಗಿ ಬಂತು. ಅಹ್ಮದ್
ಪಟೇಲ್ ಸೇರಿದಂತೆ ಅಂದಿನ ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ತಿಳಿಸಿದರು. ಜನರ ಆಶೀರ್ವಾದದಿಂದ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುವ ಅವಕಾಶ ದೊರೆತಿದ್ದು, ಜಾತ್ಯಾತೀತ ರಾಜಕೀಯ ನೀತಿಯನ್ನು ಪಾಲಿಸುವುದಾಗಿ ತಿಳಿಸಿದರು. ಸಂವಿಧಾನದಲ್ಲಿ ತಿಳಿಸಿದಂತೆ ಎಲ್ಲ ಜಾತಿ ಮತ್ತು ಧರ್ಮದವರನ್ನು ಗೌರವಿಸಿ, ಜಾತ್ಯಾತೀತವಾಗಿರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಾ, ಸಾಮಾಜಿಕ ನ್ಯಾಯದಿಂದ ವಂಚಿತರಾಗಿರುವ ವರ್ಗಗಳ ಪರವಾಗಿ ನಿಲ್ಲುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನಲ್ಲಿ ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಸಿದ್ದಸಿಂಹಾಸನದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವಿಭಾಗೀಯ ಮಠ ಮೈಸೂರು ಇವರ ವತಿಯಿಂದ ಗುರುಪೀಠದ ಬಳಿ ಆಯೋಜಿಸಿದ್ದ ಸನ್ಮಾನ ಸಮಾರಂಭ”ದಲ್ಲಿ ಪಾಲ್ಗೊಂಡು ಮಾತನಾಡಿದರು.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು, ಇಂದಿರಾ ಕ್ಯಾಂಟೀನ್, ಕ್ಷೀರಭಾಗ್ಯ ಯೋಜನೆಗಳು ಎಲ್ಲ ಜಾತಿ ಧರ್ಮದ ಜನರಿಗೂ ತಲುಪುತ್ತಿದ್ದು, ಅವಕಾಶ ವಂಚಿತರಿಗೆ ನ್ಯಾಯ ಒದಗಿಸುವ ಯೋಜನೆಗಳಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹಿಂದುಳಿದ, ದಲಿತರು, ಅಲ್ಪಸಂಖ್ಯಾತರು ಮುಖ್ಯವಾಹಿನಿಗೆ ಬರಬೇಕು. ಶಕ್ತಿ ಯೋಜನೆಯಡಿ 70 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರಿಂದ ಪ್ರವಾಸೋದ್ಯಮ, ಆರ್ಥಿಕ ಚಟುವಟಿಕೆಗೆ ಚುರುಕುಗೊಂಡು, ರಾಜ್ಯದ ಜಿಡಿಪಿ ಹೆಚ್ಚಾಗುತ್ತಿದೆ. ರಾಜ್ಯದ ತಲಾವಾರು ಆದಾಯ ಹೆಚ್ಚಾಗಿದೆ. ಪ್ರತಿ ಅರ್ಹ ಫಲಾನುಭವಿ ಕುಟುಂಬಕ್ಕೆ ವಾರ್ಷಿಕವಾಗಿ 50 ರಿಂದ 60 ಸಾವಿರ ಸರ್ಕಾರ ಒದಗಿಸುತ್ತಿದ್ದು, ಕುಟುಂಬದ ಆರ್ಥಿಕ ಸಬಲೀಕರಣಕ್ಕೆ ಕಾರಣವಾಗಿದೆ ಎಂದು ವಿವರಿಸಿದರು.
ಆರೋಪಗಳು ಸತ್ಯವಲ್ಲ:
ಜನರ ಆಶೀರ್ವಾದದ ಫಲದಿಂದ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ. ಇತರೆ ರಾಜಕೀಯ ಪಕ್ಷಗಳು ರಾಜಕೀಯ ಪ್ರೇರಿತವಾಗಿ ಟೀಕೆ ಮಾಡುತ್ತದೆ. ವಿರೋಧಪಕ್ಷಗಳು ಮಾಡುವುದು ಕೇವಲ ಆರೋಪಗಳೇ ಹೊರತು, ಸತ್ಯವಲ್ಲ ಎಂದರು.