SUDDIKSHANA KANNADA NEWS \ DAVANAGERE\ DATE:21-10-2023
ಬೆಂಗಳೂರು: ಸುಳ್ಳು, ದ್ವೇಷದ ಸುದ್ದಿಗಳು ಜಿಡಿಪಿಗೆ ಮಾರಕ. ಇಂಥ ಕೃತ್ಯ ಎಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
ಇಂದು ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸಲ್ಲಿಸಿ ಮಾತನಾಡಿದರು.
ಸುಳ್ಳು ಸುದ್ದಿಗಳು, ಅಶಾಂತಿ ಸೃಷ್ಟಿಸುವ ಸುಳ್ಳುಗಳನ್ನು, ದ್ವೇಷ ಹರಡುವ ಸುಳ್ಳುಗಳನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಮತ್ತು ಸಮಾನವಾಗಿ ನಡೆಸಿಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಮೇಲಿದೆ ಎಂದರು.
ಆದ್ದರಿಂದ ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ GDP ಗೆ ಮಾರಕ. ಅಶಾಂತಿಯ ಪರಿಣಾಮವಾಗಿ ಜನರ ತಲಾ ಆದಾಯಕ್ಕೂ ಧಕ್ಕೆಯಾಗುತ್ತದೆ. ಆದ್ದರಿಂದ ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
ಗೃಹ ಸಚಿವ ಡಾ. ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಮತ್ತು ಪೊಲೀಸ್ ಇಲಾಖೆಯ ನಾನಾ ವಿಭಾಗಗಳ ಮುಖ್ಯಸ್ಥರು ಪುಷ್ಪ ನಮನ ಸಲ್ಲಿಸಿದರು.