SUDDIKSHANA KANNADA NEWS/ DAVANAGERE/ DATE:17-02-2024
ದಾವಣಗೆರೆ: ವಸತಿ ಶಿಕ್ಷಣ ಸಂಸ್ಥೆಗಳಿಂದ ನಡೆಸಲಾಗುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ವಿವಿಧ ವಸತಿ ಶಾಲೆಗಳಲ್ಲಿ 2024-25 ನೇ ಸಾಲಿಗೆ 6 ನೇ ತರಗತಿ ಪ್ರವೇಶಕ್ಕೆ ಫೆಬ್ರವರಿ 18 ರಂದು ಜಿಲ್ಲೆಯ 10 ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ತಿಳಿಸಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 23 ವಸತಿ ಶಾಲೆಗಳಿದ್ದು ಇದರಲ್ಲಿ 1100 ಅಭ್ಯರ್ಥಿಗಳು ಆರನೇ ತರಗತಿಗೆ ಪ್ರವೇಶ ಪಡೆಯಬಹುದಾಗಿದೆ. 6 ನೇ ತರಗತಿ ಪ್ರವೇಶ ಪಡೆಯಲು ಪ್ರಸಕ್ತ ಸಾಲಿನಲ್ಲಿ 5 ನೇ ತರಗತಿ ಓದುತ್ತಿರುವ 4495 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು ಪ್ರವೇಶ ಪರೀಕ್ಷೆ ಬರೆಯಲಿದ್ದಾರೆ ಎಂದರು.
ಪ್ರವೇಶ ಪರೀಕ್ಷೆಯನ್ನು ಇದೇ ಮೊದಲ ಬಾರಿಗೆ ಪರೀಕ್ಷೆ ಬರೆಯುತ್ತಿದ್ದು ಆಸನದ ವ್ಯವಸ್ಥೆ, ಕುಡಿಯುವ ನೀರು, ಗಾಳಿ, ಬೆಳಕು ಇರುವಂತೆ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಫೆಬ್ರವರಿ 18 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆವರೆಗೆ 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.
ಕೋಚಿಂಗ್ ಸೆಂಟರ್ ಆಯ್ಕೆಗೆ ಪರೀಕ್ಷೆ;
ಸರ್ಕಾರದಿಂದ ಐಎಎಸ್, ಕೆ.ಎ.ಎಸ್, ಬ್ಯಾಂಕಿಂಗ್, ಸಿಬ್ಬಂದಿ ನೇಮಕಾತಿ ಆಯೋಗ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ ಮಾಡಿಕೊಳ್ಳಲು ಪ್ರತಿಷ್ಟಿತ ಕೋಚಿಂಗ್ ಸೆಂಟರ್ಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು
ಫೆಬ್ರವರಿ 18 ರಂದು ದಾವಣಗೆರೆಯ 4 ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ. ಪರೀಕ್ಷೆಯನ್ನು ಒಟ್ಟು 1936 ಅಭ್ಯರ್ಥಿಗಳು ಬೆಳಗಿನ ಪತ್ರಿಕೆ ಮತ್ತು ಮಧ್ಯಾಹ್ನ ಬ್ಯಾಂಕಿಂಗ್ ಪತ್ರಿಕೆ ಪರೀಕ್ಷೆಗೆ 1142 ಅಭ್ಯರ್ಥಿಗಳು
ಪರೀಕ್ಷೆ ಬರೆಯಲಿದ್ದಾರೆ.
ಸುಗಮ ಪರೀಕ್ಷೆಗಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ. ಪರೀಕ್ಷೆಯನ್ನು ಸುಗಮವಾಗಿ ಹಾಗೂ ಪಾರದರ್ಶನಕವಾಗಿ ನಡೆಸಬೇಕು ಎಂದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ನಾಗರಾಜ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಸಂವಿಧಾನ ಪೀಠಿಕೆ ಓದುವ ಮೂಲಕ ಪ್ರತಿಜ್ಞೆ ಸ್ವೀಕರಿಸಲಾಯಿತು.