ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖಾ , ಸಂಸ್ಥೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಜನವರಿ 11ರಂದು ನಡೆಸಲಿದ್ದು, ಪರೀಕ್ಷಾ ಸಂಬಂಧ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆ ಏರ್ಪಡಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆ ನಡೆಸಲಾಗಿದೆ.
ನಗರದ 13 ಕಾಲೇಜುಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 4.30 ರವರೆಗೆ ನಡೆಯಲಿದೆ, ಪ್ರತಿ 24 ವಿದ್ಯಾರ್ಥಿಗಳಿಗೆ ಒಬ್ಬರು ಕೊಠಡಿ ಮೇಲ್ವಿಚಾರಕರನ್ನು ನೇಮಿಸಿ, ಅವರಿಗೆ ಅಗತ್ಯ ತರಬೇತಿಯನ್ನು ನೀಡಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ವಿವರಗಳ ಕ್ಯೂಆರ್ ಕೋಡ್ ಅನ್ನು ಸ್ನ್ಕ್ಯಾನ್ ಮೂಲಕ ಪಡೆಯುವುದು, ಪರೀಕ್ಷಾ ಕೇಂದ್ರಗಳಿಗೆ ಜಾಮರ್ ಅಳವಡಿಸುವಂತೆ ಸೂಚಿಸಲಾಗಿದೆ.
ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲು ಮುಂಜಾಗ್ರತೆ ಕ್ರಮವಾಗಿ 200 ಮೀಟರ್ ಪ್ರದೇಶವನ್ನು ನಿಷೇದಿತ ಸ್ಥಳವೆಂದು ಘೋಷಿಸಲಾಗಿದ್ದು ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಿಸುವುದು, ಅಭ್ಯರ್ಥಿಗಳ ತಪಾಸಣೆ ಮಾಡಲು ಅಗತ್ಯವಿರುವಷ್ಟು ಹೋಮ್ ಗಾರ್ಡ್ಗಳನ್ನು ನೇಮಿಸಿಕೊಳ್ಳಬೇಕು ಹಾಗೂ ಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಲ್ಲದೆ ವ್ಯವಸ್ಥಿತ ರೀತಿಯಲ್ಲಿ ನಡೆಸಲು ಎಲ್ಲಾ ಅಧಿಕಾರಿಗಳು ಕ್ರಮವಹಿಸುವಂತೆ ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ವಸ್ತ್ರಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಕಡ್ಡಾಯವಾಗಿ ಅಭ್ಯರ್ಥಿಗಳು ವಸ್ತ್ರಸಂಹಿತೆಯನ್ನು ಪಾಲಿಸಬೇಕು. ಅದರ ವಿವರಗಳನ್ನು ಪ್ರವೇಶ ಪತ್ರದಲ್ಲಿ ನಮೂದಿಸಲಾಗಿದೆ. ಹಾಗೂ ಇಲಾಖೆಯ ಅಂತರ್ಜಾಲ http://kea.kar.nic.in ದಲ್ಲಿ ಅಳವಡಿಸಿದೆ ಎಂದು ತಿಳಿಸಿದರು.
ಎಲೆಕ್ರ್ಟಾನಿಕ್ ವಸ್ತುಗಳು, ಮೊಬೈಲ್ ಫೋನ್ ಗಳು , ಪೆನ್ ಡ್ರೈವ್ ಗಳು, ಇಯರ್ ಫೋನ್‌ಗಳು, ಮೈಕ್ರೋಫೋನ್ ಗಳು, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳು, ತಿನ್ನಬಹುದಾದ ಪದಾರ್ಥಗಳು, ತಲೆಯ ಮೇಲೆ ಟೋಪಿ , ಮಾಸ್ಕ್ ಅಂತಹ ವಸ್ತುಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ತೆಗೆದುಕೊಂಡು ಹೋಗದಂತೆ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಪೆನ್, ಪ್ರವೇಶ ಪತ್ರ ಹಾಗೂ ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿ ಮಾತ್ರ ಪರೀಕ್ಷಾ ಕೇಂದ್ರಗಳಲ್ಲಿ ಅನುಮತಿಸಲಿದೆ ಎಂದು ತಿಳಿಸಿದರು.
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಒಂದು ಪ್ರಶ್ನೆಗೆ 5 ಆಯ್ಕೆಗಳಿದ್ದು, ಕಡ್ಡಾಯವಾಗಿ ಪ್ರತಿ ಪ್ರಶ್ನೆಗೆ ಉತ್ತರವನ್ನು ಆಯ್ಕೆ ಮಾಡಬೇಕಾಗಿರುತ್ತದೆ. ಒಂದು ವೇಳೆ ಉತ್ತರ ತಿಳಿದಿಲ್ಲವೆಂದರೆ ಪರೀಕ್ಷಾ ಅವಧಿ ನಂತರ ಹೆಚ್ಚುವರಿಯಾಗಿ 5 ನಿಮಿಷಗಳನ್ನು ನೀಡಿದ್ದು ಈ ಅವಧಿಯಲ್ಲಿ ಕೊನೆಯ ಆಯ್ಕೆ ಇ(ಇ) ಅನ್ನು ಕಡ್ಡಾಯವಾಗಿ ಮಾಡಬೇಕು, ಆಯ್ಕೆ ಮಾಡಿಲ್ಲವೆಂದರೆ ವಿದ್ಯಾರ್ಥಿ ಪಡೆದ ಒಟ್ಟು ಅಂಕಗಳಲ್ಲಿ ಒಂದನೇ ನಾಲ್ಕು ಭಾಗ ಕಡಿತಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಳನಿ ಹಾಗೂ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ಇತರರು ಉಪಸ್ಥಿತರಿದ್ದರು.
ನಿಷೇಧಾಜ್ಞೆ ಜಾರಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಜನವರಿ 11 ರಂದು ವಿವಿಧ ಹುದ್ದೆಗಳಿಗೆ ಜರಗುವ 13 ಪರೀಕ್ಷಾ ಕೇಂದ್ರಗಳಲ್ಲಿ ಸಾರ್ವಜನಿಕ ಪ್ರವೇಶ ನಿಷೇಧಿತ ಪ್ರದೇಶವೆಂದು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ 200 ಮೀಟರ್ ಪ್ರದೇಶವನ್ನು ನಿಷೇದಿತ ಪ್ರದೇಶವೆಂದು ಹಾಗೂ ಈ ಪರಿದಿಯಲ್ಲಿನ ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಕೆಫೆ ಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಬೇಕೆಂದು, ಈ ಆದೇಶವು ಪರೀಕ್ಷಾರ್ಥಿಗಳಿಗೆ ಹಾಗೂ ಸದರಿ ಪರೀಕ್ಷೆಯ ಕರ್ತವ್ಯ ನಿರ್ವಹಿಸಲು ನೇಮಕಾತಿ ಆದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅನ್ವಹಿಸುವುದಿಲ್ಲ.
ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲು ಮತ್ತು ಸದರಿ ಕೇಂದ್ರಗಳ ಸುತ್ತ ಮುತ್ತಲಿರುವ ಜೆರಾಕ್ಸ್ ಅಂಗಡಿಗಳು ಮತ್ತು ಸೈಬರ್ ಕೆಫೆಗಳನ್ನು ಮುಚ್ಚಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರು, ದಾವಣಗೆರೆ ಇವರು ಕ್ರಮ ಕೈಗೊಳ್ಳತಕ್ಕದ್ದು ಎಂದು ಈ ಆದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತ ಕಲಂ 163 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಾವಣಗೆರೆ ಜಿಲ್ಲೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಧಿಕಾರಿ ಜಿ. ಎಂ ಗಂಗಾಧರ ಸ್ವಾಮಿ, ಆದೇಶ ಹೊರಡಿಸಿರುತ್ತಾರೆ.





Leave a comment