SUDDIKSHANA KANNADA NEWS/ DAVANAGERE/ DATE:19-08-2024
ದಾವಣಗೆರೆ: ಮೂಡಾ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದು ಹಾಗೂ ರಾಜ್ಯಪಾಲರ ಪ್ರಜಾಪ್ರಭುತ್ವ ಸಂವಿಧಾನ ವಿರೋಧಿ ನಡೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ರಾಜ್ಯಪಾಲರ ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ ನಡೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್. ಬಿ. ಮಂಜಪ್ಪನವರ ಅಧ್ಯಕ್ಷತೆಯಲ್ಲಿ ರಾಜ್ಯಪಾಲರ ವಿರುದ್ಧ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಅಂಬೇಡ್ಕರ್
ಸರ್ಕಲ್ ನಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನೆ ಮೆರವಣಿಗೆ ಆರಂಭಗೊಂಡಿತು. ಜಯದೇವ ವೃತ್ತ ನಂತರ ಮಹಾತ್ಮಗಾಂಧಿ ವೃತ್ತಕ್ಕೆ ತೆರಳಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ರಾಜ್ಯಪಾಲರ ಅಣಕು ಶವಯಾತ್ರೆ ನಡೆಸಿ ಪ್ರತಿಭಟನಾಕಾರರು ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿದರು.
ಈ ವೇಳೆ ಮಾತನಾಡಿದ ಶಾಸಕ ಶಾಮನೂರು ಶಿವಶಂಕರಪ್ಪ, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು, ಸಿಎಂ ಸಿದ್ದರಾಮಯ್ಯರ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಸಂವಿಧಾನಬಾಹಿರ. ಪ್ರಜಾಪ್ರಭುತ್ವದಲ್ಲಿ ಮಾರಕವಾಗಿದೆ. ಸಿದ್ದರಾಮಯ್ಯರ ಜನಪ್ರಿಯತೆ ಸಹಿಸದೇ ಸರ್ಕಾರ ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ನಡೆಸಿರುವ ಷಡ್ಯಂತ್ರ ಎಂದು ಆರೋಪಿಸಿದರು.
ಈ ಪ್ರತಿಭಟನೆಯಲ್ಲಿ ಶಾಸಕ ಕೆ. ಎಸ್.ಬಸವಂತಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಬಿ. ಮಂಜಪ್ಪ, ಪಾಲಿಕೆ ಸದಸ್ಯ ನಾಗರಾಜ್, ಕೆ. ಜಿ. ಶಿವಕುಮಾರ್, ಆನಂದಪ್ಪ ಮತ್ತಿತರರು ಪಾಲ್ಗೊಂಡಿದ್ದರು. ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ದಾವಣಗೆರೆ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಎಪಿಎಂಸಿ ಮಾಜಿ ಸದಸ್ಯರು, ಜಿಲ್ಲೆಯ ಗ್ರಾಮ ಪಂಚಾಯತ್ ಹಾಲಿ ಮತ್ತು ಮಾಜಿ ಸದಸ್ಯರು, ದಾವಣಗೆರೆ ಮಹಾನಗರ ಪಾಲಿಕೆಯ ಹಾಲಿ ಮತ್ತು ಮಾಜಿ ಸದಸ್ಯರು, ಡಿಸಿಸಿ ಬ್ಯಾಂಕ್ ಸದಸ್ಯರುಗಳು, ಕಾಂಗ್ರೆಸ್ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತರ, ಅಂಗವಿಕಲರ, ಕಿಸಾನ್ ಕಾಂಗ್ರೆಸ್, ಕಾರ್ಮಿಕರ, ವೈದ್ಯರ, ವಕೀಲರ ವಿಭಾಗಗಳು, ಎನ್.ಎಸ್.ಯು.ಐ., ಯುವ ಘಟಕ, ಮಹಿಳಾ ಘಟಕ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ದಾವಣಗೆರೆ ಜಿಲ್ಲೆಯ
ಅಹಿಂದ ವರ್ಗದವರು ಆಗಮಿಸಿದ್ದರು.