SUDDIKSHANA KANNADA NEWS/ DAVANAGERE/ DATE:16-02-2024
ದಾವಣಗೆರೆ: ಆಡಳಿತ ಸುಧಾರಣೆ ಒಂದು ನಿರಂತರ ಪ್ರಕ್ರಿಯೆಯಾಗಿದೆ. ಆಡಳಿತ ಸುಧಾರಣಾ ಆಯೋಗ-2 ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಕೈಗೊಳ್ಳಬಹುದಾದ ಸುಧಾರಣಾ ಕ್ರಮಗಳ ಬಗ್ಗೆ ಸಲ್ಲಿಸಿರುವ ವರದಿಗಳನ್ನು ಪರಿಶೀಲಿಸಿ, ಅವುಗಳ ಅನುಷ್ಠಾನದ ಕುರಿತು ಪರಿಶೀಲಿಸಲು ಸರ್ಕಾರ ಆಡಳಿತ ಸುಧಾರಣಾ ಆಯೋಗವನ್ನು ರಚಿಸಿದೆ. ಈ ಆಯೋಗವು ಆಡಳಿತ ಸುಧಾರಣಾ ಕ್ರಮಗಳ ಅನುಷ್ಠಾನದ ಮೇಲ್ವಿಚಾರಣೆ ಮಾಡಲಿದೆ ಎಂದು
ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಏಳನೇ ವೇತನ ಆಯೋಗವನ್ನು ರಚಿಸಲಾಗಿದ್ದು, ಆಯೋಗದ ವರದಿ ಸ್ವೀಕರಿಸಿದ ನಂತರ ಪರಿಶೀಲಿಸಿ ಕ್ರಮವಹಿಸಲಾಗುವುದು. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು
ಲೆಕ್ಕಪತ್ರ ಇಲಾಖೆಯು ವಿವಿಧ ಕಾನೂನಿನಡಿಯಲ್ಲಿ 7,214 ಸಂಸ್ಥೆಗಳ ಶಾಸನಬದ್ಧ ಲೆಕ್ಕ ಪರಿಶೋಧಕರಾಗಿರುತ್ತದೆ. ಈ ಸಂಸ್ಥೆಗಳ ಲೆಕ್ಕಪರಿಶೋಧನೆಯಲ್ಲಿ ಏಕರೂಪತೆಯನ್ನು ತರಲು ಲೆಕ್ಕಪರಿಶೋಧನಾ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದರು.
ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳಿಗೆ ನೇರ ಪರಿಹಾರ ಒದಗಿಸುವ ದೃಷ್ಟಿಯಿಂದ ಜನಸ್ಪಂದನ ಕಾರ್ಯಕ್ರಮವನ್ನು ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ನಿಯಮಿತವಾಗಿ
ಆಯೋಜಿಸಲಾಗುತ್ತಿದೆ. ಈವರೆಗೆ ರಾಜ್ಯಮಟ್ಟದ ಎರಡು ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಒಟ್ಟಾರೆ 18,000 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮೊದಲ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅಹವಾಲುಗಳ ಪೈಕಿ ಶೇ.94ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಎರಡನೇ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಿದ ಅಹವಾಲುಗಳನ್ನೂ ಸಹ ನಿಗದಿತ ಕಾಲಮಿತಿಯಲ್ಲಿ ಬಗೆಹರಿಸಲಾಗುವುದು ಎಂದು ವಿವರಿಸಿದರು.
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನವು ಈ ವರ್ಷ ಶತಮಾನದ ಮೈಲಿಗಲ್ಲನ್ನು ಪೂರ್ಣಗೊಳಿಸುತ್ತಿದೆ. ಮಹಾತ್ಮಾ ಗಾಂಧೀಜಿಯವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನ ಇದಾಗಿದೆ. ಈ ಅಧಿವೇಶನದ ಕೊಡುಗೆಯನ್ನು ಸ್ಮರಿಸಲು 2 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗುವುದು. ಅಲ್ಲದೇ ಮಹಾತ್ಮಾ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ ಸ್ಥಳಗಳಲ್ಲಿ ಸ್ಮರಣಾರ್ಥ ಫಲಕಗಳನ್ನು ಅಳವಡಿಸಲಾಗುವುದು.
ವಾರ್ತಾ ಇಲಾಖೆಯು ಪ್ರಕಟಿಸುತ್ತಿರುವ ವಾರ್ತಾ ಜನಪದ ಮತ್ತು ಮಾರ್ಚ್ ಆಫ್ ಕರ್ನಾಟಕ ಮಾಸ ಪತ್ರಿಕೆಗಳನ್ನು ಡಿಜಿಟೈಸ್ ಮಾಡುವ ಮೂಲಕ ಇನ್ನೂ ಹೆಚ್ಚಿನ ಜನರಿಗೆ ತಲುಪಿಸಲು ಕ್ರಮ ವಹಿಸಲಾಗುವುದು. ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೌಲಭ್ಯವನ್ನು ಪ್ರಾರಂಭಿಸಲಾಗುವುದು. ಸಾಮಾಜಿಕ ನ್ಯಾಯದ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಪತ್ರಕರ್ತರಿಗೆ “ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ” ಸ್ಥಾಪಿಸಿ, ಪ್ರತಿ ವರ್ಷ ನೀಡಲಾಗುವುದು ಎಂದು ವಿವರಿಸಿದರು.
ರಾಷ್ಟ್ರಕವಿ ಕುವೆಂಪು ಅವರು ಬಣ್ಣಿಸಿದಂತೆ ಕರ್ನಾಟಕವು ಸರ್ವಜನಾಂಗದ ಶಾಂತಿಯ ತೋಟವಾಗಿದೆ. ನೂರಾರು ವರ್ಷಗಳಿಂದ ನಮ್ಮ ಕನ್ನಡ ನೆಲದಲ್ಲಿ ವಿವಿಧ ಧರ್ಮ, ಭಾಷೆ, ಸಂಸ್ಕೃತಿ, ಸಮುದಾಯಗಳ ಜನರು ಸೌಹಾರ್ದತೆಯಿಂದ ಬಾಳುತ್ತಿದ್ದಾರೆ. ಆದ್ದರಿಂದ ಜಾತಿ, ಧರ್ಮ, ಭಾಷೆಯ ಹೆಸರಿನಲ್ಲಿ ಗಲಭೆಯನ್ನುಂಟು ಮಾಡುವವರ ವಿರುದ್ಧ ಸರ್ಕಾರವು ಕಠಿಣ ಕ್ರಮ ಕೈಗೊಳ್ಳಲಿದೆ.
ಸಮಾಜದಲ್ಲಿ ಸುಳ್ಳು ಸುದ್ದಿಗಳನ್ನು ಹರಡಿಸಿ ಸಾರ್ವಜನಿಕರಲ್ಲಿ ಅಭದ್ರತೆ ಮತ್ತು ಭಯವನ್ನು ಉಂಟು ಮಾಡುವವರ ವಿರುದ್ಧ ದಿಟ್ಟ ಕ್ರಮ ಕೈಗೊಳ್ಳಲು ಐ.ಟಿ.ಬಿ.ಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ತಪಾಸಣಾ ತಂಡಗಳನ್ನು (Information Disorder Tackling Unit) ರಚಿಸಲಾಗುವುದು ಮತ್ತು ಒಳಾಡಳಿತ ಇಲಾಖೆಯಲ್ಲಿ ಒಂದು ವಿಶೇಷ ಕೋಶವನ್ನು ರಚಿಸಿ ಅದಕ್ಕೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲು ಅಧಿಕಾರ ನೀಡಲಾಗುವುದು ಎಂದರು.
ಡೀಪ್ ಫೇಕ್ ಮತ್ತಿತರ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಗ್ಧ ಸಾರ್ವಜನಿಕರನ್ನು ವಂಚಿಸುವ ಕೃತ್ಯ ಎಸಗುವವರ ವಿರುದ್ಧ ತನಿಖೆ ನಡೆಸಿ ಪರಿಣಾಮಕಾರಿ ಕ್ರಮ ತೆಗೆದುಕೊಳ್ಳುವ ಉದ್ದೇಶದಿಂದ ರಾಜ್ಯದಲ್ಲಿ ಸೈಬರ್ ಕ್ರೈಂ ವಿಭಾಗವನ್ನು ಬಲಪಡಿಸಲು ಒಟ್ಟು 43 ಸಿ.ಇ.ಎನ್. (Cyber, Economic and Narcotics) ಪೊಲೀಸ್ ಠಾಣೆಗಳನ್ನು ಉನ್ನತೀಕರಿಸಲಾಗುವುದು.
ಪೊಲೀಸ್ ಗೃಹ-2025 ಯೋಜನೆಯಡಿ ಇದುವರೆಗೆ 800 ಕೋಟಿ ರೂ.ಗಳ ವೆಚ್ಚದಲ್ಲಿ 1,128 ವಸತಿಗೃಹಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಲಾಗಿದ್ದು, 2,956 ವಸತಿ ಗೃಹಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಈ ಯೋಜನೆಗೆ 2024-25ನೇ ಸಾಲಿನಲ್ಲಿ 200 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.
ಕಟ್ಟಡ ರಹಿತ ಠಾಣೆ ಮತ್ತು ಪೊಲೀಸ್ ಕಛೇರಿಗಳಿಗೆ 30 ಕೋಟಿ ರೂ.ಗಳ ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುವುದು. ವಿಧಿ ವಿಜ್ಞಾನ ಪ್ರಯೋಗಾಲಯಗಳ (Forensic Science Lab) ಮೊಬೈಲ್ ಫೋರೆನ್ಸಿಕ್, ಆಡಿಯೋ ಮತ್ತು ವಿಡಿಯೋ ವಿಭಾಗಗಳನ್ನು ಬಲಪಡಿಸಲು 10 ಕೋಟಿ ರೂ.ಗಳ ವೆಚ್ಚದಲ್ಲಿ ಅಗತ್ಯ ಉಪಕರಣಗಳನ್ನು ಮತ್ತು ತಂತ್ರಾಂಶಗಳನ್ನು ಒದಗಿಸಲಾಗುವುದು.
ರಾಜ್ಯದ ಎಲ್ಲಾ ಕಾರಾಗೃಹಗಳ ಸುಗಮ ಆಡಳಿತ ಮತ್ತು ಭದ್ರತೆಗಾಗಿ 5 ಕೋಟಿ ರೂ. ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಾಂಶ, ಬ್ಯಾಗೇಜ್ ಸ್ಕ್ಯಾನರ್ ಮುಂತಾದ ಆಧುನಿಕ ಉಪಕರಣಗಳನ್ನು ಖರೀದಿಸಲಾಗುವುದು. ಶಿವಮೊಗ್ಗ ಜಿಲ್ಲೆಯಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಹೈ-ಸೆಕ್ಯೂರಿಟಿ ಕಾರಾಗೃಹವನ್ನು ನಿರ್ಮಿಸಲಾಗುವುದು. ಅಗ್ನಿಶಾಮಕ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸಲು The Karnataka Fire Force Act, 1964 ರನ್ವಯ ರಾಜ್ಯದಲ್ಲಿ ಹೊಸದಾಗಿ ನಿರ್ಮಾಣವಾಗುವ ಬಹುಮಹಡಿ ಕಟ್ಟಡಗಳ ಆಸ್ತಿ ತೆರಿಗೆಯೊಂದಿಗೆ ಶೇ.1 ರ ದರದಲ್ಲಿ Fire Cess ಅನ್ನು ವಿಧಿಸಲಾಗುವುದು.
ಬೆಂಗಳೂರಿನ ಪೊಲೀಸ್ ಸುಲಿವನ್ ಮೈದಾನದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಆಸ್ಟ್ರೋ ಟರ್ಫ್ ಹಾಕಿ ಪ್ರಾಂಗಣವನ್ನು ನಿರ್ಮಿಸಲಾಗುವುದು.
ಯುವ ಸಬಲೀಕರಣ ಮತ್ತು ಕ್ರೀಡೆ
ಕಳೆದ ಸಾಲಿನ ಆಯವ್ಯಯದಲ್ಲಿ ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಹುದ್ದೆಗಳನ್ನು ಮೀಸಲಿಡಲಾಗುವುದೆಂದು ಘೋಷಿಸಲಾಗಿತ್ತು. ಪ್ರಸಕ್ತ ಸಾಲಿನಿಂದ ಇತರೆ ಇಲಾಖೆಗಳ ನೇಮಕಾತಿಯಲ್ಲಿಯೂ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು.
ಬೆಂಗಳೂರಿನ ಉತ್ತರ ತಾಲ್ಲೂಕಿನಲ್ಲಿ ಲಭ್ಯವಿರುವ ಅಂದಾಜು 70 ಎಕರೆ ನಿವೇಶನದಲ್ಲಿ ಅತ್ಯಾಧುನಿಕ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸಮುಚ್ಛಯವನ್ನು ಒಳಗೊಂಡ ಕ್ರೀಡಾ ನಗರವನ್ನು (Sports City) ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ 04 ಸ್ಥಳಗಳಲ್ಲಿ ಬಹುಕ್ರೀಡಾ ಸೌಲಭ್ಯಗಳನ್ನೊಳಗೊಂಡ ಅತ್ಯಾಧುನಿಕ ಕ್ರೀಡಾ ಸಂಕೀರ್ಣಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು.
ರಾಜ್ಯದ ವಿವಿಧ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಹಾಗೂ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು Rifle Shooting Association, Hockey Karnataka, Amateur Boxing Association, Archery Association, Athletic Association, Kayaking and Canoeing Academy, Cycling Academy Vijayapura ಹಾಗೂ Fencing Association ಗಳಿಗೆ ಒಟ್ಟಾರೆ 12 ಕೋಟಿ ರೂ. ಅನುದಾನ ನೀಡಲಾಗುವುದು.
ರಾಜ್ಯದ ಕ್ರೀಡಾಪಟುಗಳಿಗೆ ಅತ್ಯುನ್ನತ ಸ್ಪರ್ಧಾ ಅವಕಾಶ ಒದಗಿಸಲು ಪ್ರತಿ ವರ್ಷ ಒಂದು ರಾಜ್ಯ ಮಟ್ಟದ ಒಲಿಂಪಿಕ್ಸ್ ಮತ್ತು 14 ವರ್ಷ ವಯೋಮಾನದ ಒಳಗಿನವರಿಗೆ ಮಿನಿ ಒಲಿಂಪಿಕ್ಸ್ಆ ಯೋಜಿಸಲಾಗುವುದು.
ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗಳಿಸುವ ಕ್ರೀಡಾಪಟುಗಳಿಗೆ 06 ಕೋಟಿ ರೂ., ಬೆಳ್ಳಿ ಪದಕ ಪಡೆಯುವ ಕ್ರೀಡಾಪಟುಗಳಿಗೆ 04 ಕೋಟಿ ರೂ. ಹಾಗೂ ಕಂಚಿನ ಪದಕ ಪಡೆಯುವ ಕ್ರೀಡಾಪಟುಗಳಿಗೆ 03 ಕೋಟಿ ರೂ. ಪ್ರೋತ್ಸಾಹಧನ ನೀಡಲಾಗುವುದು.
ಏಷಿಯನ್ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕ ವಿಜೇತ ಕ್ರೀಡಾಪಟುಗಳಿಗೆ 35 ಲಕ್ಷ ರೂ., ಬೆಳ್ಳಿ ಪದಕ ವಿಜೇತ ಕ್ರೀಡಾಪಟುಗಳಿಗೆ 25 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತ ಕ್ರೀಡಾಪಟುಗಳಿಗೆ 15 ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುವುದು. ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಸಮಯದಲ್ಲಿ ಗಾಯಗೊಂಡಲ್ಲಿ ಅವರ ಚಿಕಿತ್ಸೆಗೆ ನೆರವಾಗಲು ಆರೋಗ್ಯ ವಿಮೆ ಸೌಲಭ್ಯವನ್ನು ರಾಜ್ಯ ಸರ್ಕಾರದ ವತಿಯಿಂದ ಒದಗಿಸಲಾಗುವುದು.
ರಾಜ್ಯದ 14 ಸ್ಥಳಗಳಲ್ಲಿ ಮುಂದಿನ ಎರಡು ವರ್ಷದೊಳಗೆ 35 ಕೋಟಿ ರೂ. ವೆಚ್ಚದಲ್ಲಿ ಮಹಿಳಾ ಕ್ರೀಡಾ ವಸತಿ ನಿಲಯಗಳನ್ನು ನಿರ್ಮಿಸಲಾಗುವುದು. ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ವಸತಿ ನಿಲಯ ಕಟ್ಟಡವನ್ನು ನಿರ್ಮಿಸಲಾಗುವುದು. ಬಳ್ಳಾರಿಯಲ್ಲಿ ಕ್ರೀಡಾ ವಸತಿ ನಿಲಯದ ಉನ್ನತೀಕರಣ ಹಾಗೂ ಕ್ರೀಡಾ ಸೌಕರ್ಯಗಳ ಅಭಿವೃದ್ಧಿಗಾಗಿ ಜಿಲ್ಲಾ ಖನಿಜ ಪ್ರತಿಷ್ಠಾನದ ನಿಧಿಯಿಂದ 10 ಕೋಟಿ ರೂ. ಒದಗಿಸಲಾಗುವುದು ಎಂದು ಮಾಹಿತಿ ನೀಡಿದರು.