ಅಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು 931 ಕೋಟಿ ರೂ. ಆಸ್ತಿ ಹೊಂದಿದ್ದು, ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ.
51 ಕೋಟಿ ರೂ. ಆಸ್ತಿ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ 3ನೇ ಸ್ಥಾನದಲ್ಲಿದ್ದಾರೆ. ಈ ಬಗ್ಗೆ ಅಸೋಸಿಯೇಶನ್ ಆಫ್ ಡೆಮಾಕ್ರಾಟಿಕ್ ರಿಫಾಮ್ಸ್ (ಎಡಿಆರ್) ನಡೆಸಿದ ಅಧ್ಯಯನದಲ್ಲಿ ಬಹಿರಂಗವಾಗಿದೆ.
332 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೇಮ ಖಂಡು 2ನೇ ಸ್ಥಾನದಲ್ಲಿದ್ದಾರೆ. ಆದರೆ ಸಾಲ ಹೊಂದಿರುವ ಸಿಎಂಗಳ ಪಟ್ಟಿಯಲ್ಲೂ ಇವರು ಮೊದಲ ಸ್ಥಾನದಲ್ಲಿದ್ದು, ಒಟ್ಟು 180 ಕೋಟಿ ರೂ. ಸಾಲ ಹೊಂದಿದ್ದಾರೆ. ಸಿದ್ದರಾಮಯ್ಯ ಅವರು 23 ಕೋಟಿ ರೂ. ಸಾಲ ಹೊಂದಿದ್ದಾರೆ.
ಚುನಾವಣೆಯ ಸಮಯದಲ್ಲಿ ಸಲ್ಲಿಸಲಾದ ಅಫಿದವಿತ್‌ಗಳನ್ನು ಆಧಾರವಾಗಿಟ್ಟುಕೊಂಡು ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿ ತಯಾರು ಮಾಡಲಾಗಿದೆ. ಪಶ್ಚಿಮ ಬಂಗಾಲದ ಸಿಎಂ ಮಮತಾ ಬ್ಯಾನರ್ಜಿ ಕೇವಲ 15 ಲಕ್ಷ ರೂ. ಆಸ್ತಿ ಹೊಂದಿದ್ದಾರೆ. ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ 55 ಲಕ್ಷ ರೂ., ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು 1 ಕೋಟಿ ರೂ. ಆಸ್ತಿ ಹೊಂದಿ ಕೊನೆಯ 3 ಸ್ಥಾನದಲ್ಲಿದ್ದಾರೆ. ಇದಲ್ಲದೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಅತ್ಯಂತ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಿರುದ್ಧ 47 ಕೇಸುಗಳು ದಾಖಲಾಗಿವೆ ಎಂದು ಸಮೀಕ್ಷೆಯಲ್ಲಿ ಗೊತ್ತಾಗಿದೆ.