SUDDIKSHANA KANNADA NEWS/ DAVANAGERE/ DATE:25-10-2024
ದಾವಣಗೆರೆ: ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ ವರದಿ ಇದ್ದು ಮುಂದಿನ ಮೂರು ದಿನಗಳಲ್ಲಿ ಜಂಟಿ ಬೆಳೆ ಸಮೀಕ್ಷೆ ನಡೆಸಿ ಹಾನಿಯಾದ ರೈತರಿಗೆ ಬರುವ ಹದಿನೈದು ದಿನಗಳಲ್ಲಿ ಡಿಬಿಟಿ ಮೂಲಕ ಬೆಳೆ ನಷ್ಟ ಪರಿಹಾರ ಒದಗಿಸಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಅವರು ಜಗಳೂರು ತಾಲ್ಲೂಕಿನ ಸಂಗೇನಹಳ್ಳಿ ಕೆರೆ ಕೋಡಿ ವೀಕ್ಷಣೆ, ಹಿರೇಮಲ್ಲನಹೊಳೆಯಲ್ಲಿ ಹಾನಿಯಾದ ಮನೆ ವೀಕ್ಷಣೆ ಮತ್ತು ಬೆಳೆ ವೀಕ್ಷಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್ ತಿಂಗಳಲ್ಲಿಯೇ ಅತೀ ಹೆಚ್ಚು ಮಳೆಯಾಗಿದ್ದು ಪ್ರಾಥಮಿಕ ಅಂದಾಜು ಬೆಳೆ ನಷ್ಟಕ್ಕಿಂತ ಇನ್ನೂ ಹೆಚ್ಚಿನ ಬೆಳೆ ನಷ್ಟವಾಗಿರುವ ವರದಿ ನಿರೀಕ್ಷಿಸಲಾಗಿದ್ದು ಮೂರು ದಿನಗಳಲ್ಲಿ ಜಂಟಿ ಸಮೀಕ್ಷೆಯ ನಂತರ ಬೆಳೆ ನಷ್ಟದ ನಿಖರತೆ ತಿಳಿಯಲಿದೆ. ಇದಕ್ಕಾಗಿಯೇ ಶನಿವಾರ ಮುಖ್ಯಮಂತ್ರಿಗಳೊಂದಿಗೆ ಅಧಿಕ ಮಳೆಯಾದ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಸೂಚನೆ ನೀಡಲಾಗುತ್ತದೆ ಎಂದರು.
ಹಿಂಗಾರು ಹಂಗಾಮಿನಲ್ಲಿ 21 ಜನರ ಪ್ರಾಣಹಾನಿಯಾಗಿದ್ದು ಇದರಲ್ಲಿ 9 ಜನರು ಸಿಡಿಲಿನಿಂದ ಮರಣ ಹೊಂದಿದ್ದರೆ, 6 ಜನರು ಮನೆ ಕುಸಿತದಿಂದ ಸಾವನ್ನಪ್ಪಿದ್ದಾರೆ. 3 ರಿಂದ 4 ಜನರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮುಂಗಾರು ಸೇರಿದಂತೆ
ಇಲ್ಲಿಯವರೆಗೆ 121 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದರು.
ಮುಂಗಾರು ಹಂಗಾಮಿನಲ್ಲಿ 2589 ಮತ್ತು ಹಿಂಗಾರಿನಲ್ಲಿ 121 ಮನೆಗಳು ಬಿದ್ದು ಹೋಗಿವೆ, ಇವರಿಗೆ ಮನೆ ಪರಿಹಾರದ ಜೊತೆಗೆ ಮನೆ ನಿರ್ಮಿಸಿಕೊಡಲಾಗುತ್ತದೆ. ಸರ್ಕಾರಿ ಜಾಗದಲ್ಲಿಅನಧಿಕೃತವಾಗಿ ಕಟ್ಟಿದ ಮನೆ ಬಿದ್ದು ಹೋಗಿದ್ದಲ್ಲಿ ಎಸ್.ಡಿ.ಆರ್.ಎಫ್ ನಡಿ ಒಂದು ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.
ಮುಂಗಾರು ಹಂಗಾಮಿನಲ್ಲಿ 1.18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆನಷ್ಟವಾಗಿದ್ದು ಈಗಾಗಲೇ ಪರಿಹಾರ ನೀಡಲಾಗಿದ್ದು ಕೆಲವೇ ದಿನಗಳಲ್ಲಿ ಮುಂಗಾರು ಬೆಳೆನಷ್ಟ ಪರಿಹಾರ ಪಾವತಿ ಪೂರ್ಣವಾಗಲಿದೆ ಎಂದು ತಿಳಿಸಿದರು.