SUDDIKSHANA KANNADA NEWS/ DAVANAGERE/ DATE:05-04-2025
ದಾವಣಗೆರೆ: ಜನಸಮಾನ್ಯರು, ಬಡವರಿಗೆ ದಿನನಿತ್ಯ ವಸ್ತುಗಳ ಬೆಲೆ ಏರಿಕೆ ಭಾಗ್ಯ ಕಲ್ಪಿಸಿರುವ ಕಾಂಗ್ರೆಸ್ ನಿಲುವು ವಿರೋಧಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಬಿಜೆಪಿ ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಾಕಾರರು ಜಯದೇವ ವೃತ್ತ ತಲುಪಿ ಅಲ್ಲಿಂದ ಉಪವಿಭಾಗಾಧಿಕಾರಿಗಳ ಕಚೇರಿಯವರೆಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮೆರವಣಿಗೆ ನಡೆಸಿದರು.
ಕಾಂಗ್ರೆಸ್ ಬಿಟ್ಟಿ ಭಾಗ್ಯಗಳಿಗೆ ಹಣಹೊಂದಿಸಲು ಜನಸಾಮಾನ್ಯರಿಗೆ ಬರೆ ಎಳೆಯುತ್ತಿರುವ ಕಾಂಗ್ರೆಸ್ ಸರ್ಕಾರದ ನಿಲುವುಗಳನ್ನು ಖಂಡಿಸಿದ್ದು, ಏರಿಕೆ ಹೊರೆ ಇಳಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಕಾಂಗ್ರೆಸ್ ಮತ್ತೊಮ್ಮೆ ತುಷ್ಟೀಕರಣದ ತನ್ನ ಹಳೇ ಚಾಳಿಯನ್ನು ಮುಂದುವರೆಸಿದೆ. ಸರಕಾರಿ ಕಾಮಗಾರಿಗಳಲ್ಲಿ ಶೇ. 4ರಷ್ಟು ಮೀಸಲಾತಿ ಮುಸ್ಲಿಂರಿಗೆ ನೀಡುವುದು, ಹೊರದೇಶಕ್ಕೆ ವಿದ್ಯಾಭ್ಯಾಸಕ್ಕೆ ಹೋಗುವ ಮುಸ್ಲಿಂ ವಿದ್ಯಾರ್ಥಿಗಳಿಗೆ ನೀಡುವ ಸಹಾಯಧನವನ್ನು 20 ಲಕ್ಷ ರೂಗಳಿಂದ 30 ಲಕ್ಷ ರೂಗಳಿಗೆ ಹೆಚ್ಚಳ ಮಾಡಿರುವುದು, ಶಾದಿ ಭಾಗ್ಯಕ್ಕೆ ಹಣ ನೀಡುವ ನಿರ್ಧಾರ ತೆಗೆದುಕೊಮಡಿರುವುದು ಮತ್ತು ಮುಸ್ಲಿಂ ಹೆಣ್ಣುಮಕ್ಕಳಿಗೆ ಮಾತ್ರ ಆತ್ಮರಕ್ಷಣೆಗಾಗಿ ವಿಶೇಷ ಅನುದಾನವನ್ನು ನೀಡುವುದು, ಕಾಂಗ್ರೆಸ್ನ ತುಷ್ಟೀಕರಣದ ರಾಜಕಾರಣದ ಮುಂದುವರೆದ ಭಾಗವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರಕಾರದ ನಿರ್ಧಾರವನ್ನು ಬಿಜೆಪಿ ಜಿಲ್ಲಾ ಘಟಕವು ತೀವ್ರವಾಗಿ ವಿರೋಧಿಸುತ್ತದೆ. ಡಾ. ಬಿ. ಆರ್. ಅಂಬೇಡ್ಕರವರು ರಚಿಸಿದ ಸಂವಿಧಾನದಲ್ಲಿ ಧರ್ಮ ಆಧಾರಿತ ಮೀಸಲಾತಿ ಕೊಡಲು ಅವಕಾಶವಿಲ್ಲ. ಇದಕ್ಕೆ ಸಂಬಂಧ ಪಟ್ಟಂತೆ ಸುಪ್ರೀಂಕೋರ್ಟ್ ಸೇರಿ ವಿವಿಧ ಕೋರ್ಟ್ ಗಳೂ ತೀರ್ಪು ಕೊಟ್ಟಿವೆ. ಆದರೂ ಈ ರೀತಿಯ ನಿರ್ಧಾರಗಳನ್ನು ತೆಗೆದುಕೊಂಡಿರುವ ಕಾಂಗ್ರೆಸ್ನ ನಡೆ ಡಾ.ಅಂಬೇಡ್ಕರ್ರವರ ಸಂವಿಧಾನಕ್ಕೆ ಮಾಡಿದ ಅವಮಾನ ಎಂದು ಆರೋಪಿಸಿದರು.
ಕೂಡಲೇ ಕಾಂಗ್ರೆಸ್ ಬೆಲೆ ಏರಿಕೆ ನಿರ್ಧಾರಗಳಿಂದ ಹಿಂದಕ್ಕೆ ಸರಿಯಬೇಕು, ಇಲ್ಲದಿದ್ದರೆ ಜಿಲ್ಲಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂಬ ಎಚ್ಚರಿಕೆಯನ್ನು ಪ್ರತಿಭಟನಾಕಾರರು ನೀಡಿದರು.
ರಾಜ್ಯ ಸರಕಾರವು ಬಜೆಟ್ನಲ್ಲಿ ಎಸ್ ಸಿ- ಎಸ್ಟಿ ಸಮುದಾಯಗಳಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದು ಅತ್ಯಂತ ಖಂಡನೀಯ. ಕಳೆದ 3 ವರ್ಷಗಳಲ್ಲಿ ಸುಮಾರು 39 ಸಾವಿರ ಕೋಟಿ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಲಾಗುತ್ತಿರುವುದರಿಂದ ಪರಿಶಿಷ್ಟ ಜಾತಿ- ಪಂಗಡಗಳ ಸಮುದಾಯದ ಜನರಿಗೆ ತೀವ್ರ ಅನ್ಯಾಯವಾಗಿದೆ. ಮುಂದೆ ಈ ಮೊತ್ತವನ್ನು ಅನ್ಯ ಉದ್ದೇಶಗಳಿಗೆ ಬಳಸಬಾರದು ಮತ್ತು ಈಗಾಗಲೇ ಬಳಸಿದ ಮೊತ್ತವನ್ನು ಮತ್ತೆ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೇ ಬಳಸಬೇಕೆಂದು ಒತ್ತಾಯಿಸುತ್ತೇವೆ ಎಂದು ತಿಳಿಸಿದರು.
ಇನ್ನು ಸಾಮಾನ್ಯ ಜನರ ಬದುಕಿಗೆ ಬರ ಎಳೆಯುತ್ತಿರುವ ಕಾಂಗ್ರೆಸ್ ಸರಕಾರ, ರೈತರು ತಮ್ಮ ಜಮೀನಿಗೆ ಟ್ರಾನ್ಸ್ ಫಾರ್ಮರ್ ಅಳವಡಿಸಿಕೊಳ್ಳುವ ವೆಚ್ಚವನ್ನು 2 ಲಕ್ಷಕ್ಕೆ ಏರಿಸಿದೆ. ಹಾಲಿನ ದರ ಏರಿಕೆ, ವಿದ್ಯುತ್ ದರ ಏರಿಕೆ, ಬಸ್ ಪ್ರಯಾಣ ದರ ಏರಿಕೆ, ಸ್ಟಾಂಪ್ ಶುಲ್ಕ ಏರಿಕೆ, ಮದ್ಯದ ಹಾಗೂ ಡಿಸೇಲ್ ದರ ಏರಿಕೆಯನ್ನು ಮಾಡಿದೆ. ದಿನೇದಿನೇ ಹೊಸ ಹೊಸ ತೆರಿಗೆಗಳನ್ನು ವಿಧಿಸಲಾಗುತ್ತಿದೆ. ಇದೆಲ್ಲದರ ಪರಿಣಾಮವಾಗಿ ಜನರ ಬದುಕು ದುರ್ಬರವಾಗಿದೆ, ಕೂಡಲೇ ಸರಕಾರವು ಬೆಲೆ ಏರಿಕೆಯನ್ನು ಇಳಿಕೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ್ ಎನ್. ನಾಗಪ್ಪ, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಶಿವಯೋಗಿಸ್ವಾಮಿ, ಮಾಜಿ ಶಾಸಕ ಬಸವರಾಜ್ ನಾಯ್ಕ್, ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ನಾಯ್ಕ್, ರಾಜಶೇಖರ್, ಅಶೋಕ್ ಪೂಜಾರಿ, ಹರೀಶ್ ಶಾಮನೂರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.