ದಾವಣಗೆರೆ: ನಗರದ ಚಿಗಟೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದ ಸ್ಥಳಕ್ಕೆ ಮಾಯಕೊಂಡ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯ ಎರಡನೇ ಮಹಡಿಯ ಇಎನ್‌ಟಿ ಆಪರೇಷನ್ ಥಿಯೇಟರ್‌ನಲ್ಲಿ ಆಕ್ಸಿಜನ್ ಹಾಗೂ ನೈಟ್ರಸ್ ಆಕ್ಸೈಡ್ ಸಿಲಿಂಡರ್‌ಗಳು ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಆಸ್ಪತ್ರೆಯ ವೈದ್ಯರು, ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಘಟನೆಯ ಸಂಪೂರ್ಣ ಮಾಹಿತಿ ಪಡೆದು ಪರಿಸ್ಥಿತಿಯ ಅವಲೋಕನ ಮಾಡಿದರು.
ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಿರುವುದು ಸಮಾಧಾನದ ಸಂಗತಿ ಎಂದು ಹೇಳಿದ ಅವರು, ಕರ್ತವ್ಯದಲ್ಲಿದ್ದ ವೈದ್ಯರು ಮತ್ತು ಸಿಬ್ಬಂದಿ ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸಿದ್ದರಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅಗ್ನಿ ಅವಘಡದಿಂದ ಹಾನಿಗೊಳಗಾದ ಆಪರೇಷನ್ ಥಿಯೇಟರ್ ಹಾಗೂ ವೈದ್ಯಕೀಯ ಉಪಕರಣಗಳನ್ನು ಪರಿಶೀಲಿಸಿದ ಶಾಸಕ ಬಸವಂತಪ್ಪ, ಘಟನೆಗೆ ನಿಖರ ಕಾರಣ ಪತ್ತೆಹಚ್ಚಿ ಸಮಗ್ರ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜೊತೆಗೆ ಆಸ್ಪತ್ರೆಯಲ್ಲಿ ಅಗ್ನಿ ಸುರಕ್ಷತಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಅದಷ್ಟು ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾಗೇಂದ್ರಪ್ಪ, ಆರ್ ಎಂ ನಾಗವೇಣಿ, ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಎಪಿಎಂಸಿ ಮಾಜಿ ಅಧ್ಯಕ್ಷ ಅಣಜಿ ಎಸ್.ಕೆ.ಚಂದ್ರಣ್ಣ ಉಪಸ್ಥಿತರಿದ್ದರು.





Leave a comment