SUDDIKSHANA KANNADA NEWS/ DAVANAGERE/ DATE:18-10-2023
ದಾವಣಗೆರೆ (Davanagere): ಕೈಗಾರಿಕೆ ಅಥವಾ ಯಾವುದೇ ಕೆಲಸಕ್ಕೆ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ. ಇದು ಶಿಕ್ಷಾರ್ಹ ಅಪರಾಧವಾಗಿದ್ದು, ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯನ್ನು ಪ್ರೋತ್ಸಾಹಿಸುವ ಪೋಷಕರಿಗೂ ಸಹ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ಎಚ್ಚರಿಕೆ ನೀಡಿದ್ದಾರೆ.
Read Also This Story:
Pramod Muthalik: ಮೋದಿ ಗೆಲ್ಲಿಸಿ, ದೇಶ ಉಳಿಸಿ ಅಭಿಯಾನ: ಪ್ರಮೋದ್ ಮುತಾಲಿಕ್ ಈ ಕಾರ್ಯಕ್ರಮದ ಸ್ವರೂಪ ಹೇಗಿರಲಿದೆ ಗೊತ್ತಾ…?
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬಾಲ ಹಾಗೂ ಕಿಶೋರ ಕಾರ್ಮಿಕ ನಿರ್ಮೂಲನೆ ಕುರಿತು ಜಿಲ್ಲಾ ಮಟ್ಟದ ಕಾರ್ಯಕಾರಿಣಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳ ರಕ್ಷಣೆಗಾಗಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚಿಸಲಾಗಿದ್ದು, ಜಿಲ್ಲೆಯಲ್ಲಿ ಕೃಷಿ, ಕೈಗಾರಿಕೆ, ಮಂಡಕ್ಕಿ ಭಟ್ಟಿ, ಇಟ್ಟಿಗೆ ಭಟ್ಟಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಹೆಚ್ಚಾಗಿ ಬಳಸಿಕೊಳ್ಳಲಾಗುತ್ತಿದೆ. ಅಂತಹ ಪ್ರದೇಶಗಳಲ್ಲಿ ಅಧಿಕಾರಿಗಳು ಸಮೀಕ್ಷೆ ನಡೆಸಿ ಅಂತಹ ಮಾಲಿಕರ ಮೇಲೆ ಕಾನೂನು ಕ್ರಮ ಕೈಗೊಂಡು ದಂಡ ವಿಧಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಕೃಷಿ, ಕೈಗಾರಿಕೆ ಹಾಗೂ ಹೋಟೆಲ್ಗಳಲ್ಲಿ ಹೆಚ್ಚಾಗಿ ಬಾಲ ಕಾರ್ಮಿಕರನ್ನು ತೊಡಗಿಸಿಕೊಳ್ಳುತ್ತಿದ್ದು, ಇಲಾಖಾವಾರು ಅಧಿಕಾರಿಗಳು ಸಮೀಕ್ಷೆ ನಡೆಸಿ ಬಾಲ ಕಾರ್ಮಿಕರನ್ನು ಗುರುತಿಸಿ, ಅವರಿಗೆ ಜ್ಞಾನದ ಅರಿವು ಮೂಡಿಸಬೇಕು ಎಂದು ಹೇಳಿದರು.
ಜಿಲ್ಲೆಯ ಪ್ರತಿಯೊಂದು ಮಗು ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಲೇಬೇಕು. ಹೆಚ್ಚಾಗಿ ಎಸ್.ಸಿ., ಎಸ್.ಟಿ ಕಾಲೋನಿಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿನ ಸಾರ್ವಜನಿಕರಿಗೆ ಶಿಕ್ಷಣದ ಮಹತ್ವ ಹಾಗೂ ಕಾನೂನಿನ ಅರಿವು ಮೂಡಿಸಿ ಮಕ್ಕಳನ್ನು ಶಾಲೆಗೆ ಕಳುಹಿಸುವ ನಿಟ್ಟಿನಲ್ಲಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಜಾಗೃತಿ ಕಾರ್ಯವನ್ನು ಕೈಗೊಳ್ಳಬೇಕು ಎಂದರು.
ಮಕ್ಕಳ ರಕ್ಷಣೆ ಮಾಡಿದ ನಂತರ ಮತ್ತೆ ಆ ಮಗು ಅದೇ ಕೆಲಸಕ್ಕೆ ಹೋಗಲಾರದಂತೆ ಕ್ರಮವಹಿಸಿ ಮಕ್ಕಳ ಕುಟುಂಬಕ್ಕೆ ಸಾಮಾಜಿಕ ಭದ್ರತೆಯ ಸರ್ಕಾರದ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಸಹಕರಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿಯನ್ನು ಪಡೆದು, ಪುನಃ ಆ ಮಕ್ಕಳನ್ನು ಶಾಲೆಗೆ ದಾಖಲಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಮಹಾವೀರ ಮಾ. ಕರೆಣ್ಣವರ, ಸಹಾಯಕ ಕಾರ್ಮಿಕ ಆಯುಕ್ತೆ ಎಸ್.ಆರ್ ವೀಣಾ, ಜಿಲ್ಲಾ ಕಾರ್ಮಿಕ ಅಧಿಕಾರಿ ಇಬ್ರಾಹಿಂ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಜಕುಮಾರ್ ರಾಥೋಡ್, ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ಡಿ.ವೈ.ಎಸ್.ಪಿ ಬಂಕಾಳಿ ನಾಗಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಾಯಿತ್ರಿ ಉಪಸ್ಥಿತರಿದ್ದರು.