ದಾವಣಗೆರೆ: ದಾವಣಗೆರೆ ನಗರದ ಆಜಾದ್ ನಗರ ಇಮಾಮ್ ನಗರ ಹಾಗೂ ದಾವಣಗೆರೆ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಆವರಣದಲ್ಲಿ ನಡೆದ ಎರಡು ಗುಂಪುಗಳ ಗಲಾಟೆ ಹಾಗೂ ಬಡಾವಣೆ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಹಲ್ಲೆ, ಮೊಬೈಲ್ ಕಸಿದುಕೊಂಡ ಪ್ರಕರಣ ಸೇರಿದಂತೆ ಆರೋಪಿಗಳ ವಿರುದ್ದ ನಾಲ್ಕು ಪ್ರಕರಣ ದಾಖಲಿಸಲಾಗಿದೆ.
ಘಟನೆ ಸಂಬಂಧ ಕಾಂಗ್ರೆಸ್ ಮುಖಂಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಆಪ್ತ ಅಯೂಬ್ ಪೈಲ್ವಾನ್ ಪುತ್ರ ಹಸನ್ ಪೈಲ್ವಾನ್ ಹಾಗೂ ಫೈಜಾನ್ ಎಂಬಾತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಘಟನೆ ಹಿನ್ನೆಲೆ:
ಜನವರಿ 31ರಂದು ಮಧ್ಯಾಹ್ನದ ಸಮಯದಲ್ಲಿ ದಾವಣಗೆರೆ ನಗರದಲ್ಲಿನ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಆವರಣದಲ್ಲಿ ಎರಡು ಗುಂಪುಗಳ ನಡುವೆ ಯಾವುದೋ ವಿಷಯಕ್ಕೆ ಜಗಳವಾಗಿತ್ತು. ಆಜಾದ್ ನಗರದ ಇಮಾಮ್ ನಗರದಲ್ಲಿ ನಡೆದ ಘಟನೆ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು, ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ಸೇರಿದಂತೆ ಒಟ್ಟು 4 ಪ್ರಕರಣಗಳು ದಾಖಲಾಗಿವೆ.
ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಅಧೀಕ್ಷಕರವರ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅವರ ಮಾರ್ಗದರ್ಶನದಲ್ಲಿ ನಗರ ಡಿವೈಎಸ್ಪಿ ಶರಣಬಸವೇಶ್ವರ ಬಿ . ನೇತೃತ್ವದಲ್ಲಿ ಬಡಾವಣೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕಿ ಗಾಯತ್ರಿ, ಮಹಿಳಾ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ ಕುಪ್ಪೇಲೂರು ಹಾಗೂ ಸಿಬ್ಬಂದಿಗಳ ತಂಡ ಪ್ರಕರಣದ ಆರೋಪಿತರಾದ ಫೈಜಾನ್ (19), ಹಸನ್ ಪೈಲ್ವಾನ್ ತಂದೆ ಆಯೂಬ್ ಪೈಲ್ವಾನ್ (27) ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ
ಉಳಿದ ಆರೋಪಿತರ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.






Leave a comment