ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪಾಜಿಯವರು ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಶಾಮನೂರು ಕುಟುಂಬ ಸದಾಕಾಲ ಜನಸೇವೆಗೆ ಬದ್ಧವಾಗಿದೆ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ದಕ್ಷಿಣ ಕ್ಷೇತ್ರದ ಚಾಮರಾಜಪೇಟೆ ಮುಖ್ಯರಸ್ತೆ, ಚಾರ್ಲಿ ಪೈಲ್ವಾನ್ ವೃತ್ತ ಸೇರಿದಂತೆ ಸುತ್ತಮುತ್ತಲಿನ ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಮತಯಾಚನೆ ಮಾಡಿದರು.
ಈ ವೇಳೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷವು ಉತ್ತಮ ಆಡಳಿತ ನೀಡುವಲ್ಲಿ ಯಶಸ್ವಿಯಾಗಿದೆ.ಗ್ಯಾರಂಟಿ ಯೋಜನೆಗಳ ಮೂಲಕ ಜನರ ಮನಸ್ಸು ಗೆಲ್ಲುವಲ್ಲಿ ಕಾಂಗ್ರೆಸ್ ಸರ್ಕಾರ ಸಫಲತೆಯನ್ನು ಸಾಧಿಸಿದೆ ಎಂದು ತಿಳಿಸಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರಿಗೆ ಭಾರೀ ಮತಗಳ ಅಂತರದಿಂದ ಗೆಲುವು ದೊರೆಯುತ್ತದೆ ಎಂಬ ವಿಶ್ವಾಸವಿದೆ ಎಂದರು.
ನಮ್ಮ ಜನಪ್ರತಿನಿಧಿಗಳು, ಸಚಿವರುಗಳು, ಕೆಪಿಸಿಸಿ ಮತ್ತು ಎಐಸಿಸಿ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಎಲ್ಲರೂ ಸಮರ್ಥ್ ಪರವಾಗಿ ಪ್ರತಿ ವಾರ್ಡ್ ಮತ್ತು ಬೂತ್ ಮಟ್ಟದಲ್ಲಿ ಸಕ್ರಿಯವಾಗಿ ಪ್ರಚಾರ ನಡೆಸುತ್ತಿದ್ದಾರೆ. ಅವರ ಈ ಶ್ರಮದ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಹೇಳಿದರು.
ಮತದಾರರು ಕ್ರಮ ಸಂಖ್ಯೆ 3ರ ಹಸ್ತ ಚಿಹ್ನೆಗೆ ಮತ ನೀಡಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು,ಅಭಿಮಾನಿಗಳು ಇದ್ದರು.





Leave a comment