ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದಿಂದ ಬಿಸಿಎ ಪದವಿಯಲ್ಲಿ ನಾಲ್ಕನೇ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ ರಶ್ಮಿ ಅಶೋಕ್ ಬೆಳಗಾವಿ ಅವರಿಗೆ ಸನ್ಮಾನ ಸಮಾರಂಭ ಹಾಗೂ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವು ಬಿ.ಐ.ಇ.ಟಿ. ಆವರಣದಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಬಿ.ಐ.ಇ.ಟಿ ಕಾಲೇಜಿನ ನಿರ್ದೇಶಕ ಪ್ರೊ. ವೈ. ವೃಷಭೇಂದ್ರಪ್ಪ ಅವರು ರ‍್ಯಾಂಕ್ ಪಡೆದ ವಿದ್ಯಾರ್ಥಿನಿಯನ್ನು ಸನ್ಮಾನಿಸಿ, ಅವರ ಸಾಧನೆಯನ್ನು ಶ್ಲಾಘಿಸಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಳ್ಳುವುದರ ಜೊತೆಗೆ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ರ‍್ಯಾಂಕ್ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಹೆಚ್ಚಿನ ಗಮನ ಹರಿಸಿ, ತಮಗೆ ಇಷ್ಟವಾದ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಸಮಾಜದ ಉತ್ತಮ ನಾಗರಿಕರಾಗಬೇಕು ಎಂದು ಕಿವಿಮಾತು ಹೇಳಿದರು.
ಪಿ.ಎಸ್.ಎಸ್.ಎಸ್.ಹೆಚ್.ಇ ಕಾಲೇಜಿನ ಪ್ರಾಂಶುಪಾಲ ಡಾ. ಎಂ. ಪ್ರಸಾದ್ ಮತ್ತು ಬಿಸಿಎ ವಿಭಾಗದ ಮುಖ್ಯಸ್ಥ ಬಿ. ಮೊಹಮ್ಮದ್ ಸಾದಿಕ್ ಅವರು ಮಾತನಾಡಿ, ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲೂ ಇದೇ ರೀತಿ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.





Leave a comment