ದಾವಣಗೆರೆ: ಮಳೆ ಕೊರತೆ, ಬರಗಾಲ ಹಾಗೂ ಆರ್ಥಿಕ ಸಂಕಷ್ಟದಿಂದ ತೊಂದರೆ ಅನುಭವಿಸುತ್ತಿರುವ ರೈತರ ಸಾಲ ವಸೂಲಾತಿಯಲ್ಲಿ ಸಹಕಾರ ಸಂಸ್ಥೆಗಳು ಮಾನವೀಯ ದೃಷ್ಟಿಕೋನ ಅನುಸರಿಸಬೇಕು. ಸಾಲ ಮರುಪಾವತಿಗೆ ರೈತರ ಮೇಲೆ ಅನಗತ್ಯ ಒತ್ತಡ ಹೇರದೆ, ಅವರ ಹಿತಾಸಕ್ತಿ ಕಾಪಾಡಲು ಮುಂದಾಗಬೇಕು ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಸಲಹೆ ನೀಡಿದರು.
ನಗರದ ಎಂ.ಸಿ.ಸಿ. ‘ಬಿ’ ಬ್ಲಾಕ್ನಲ್ಲಿರುವ ಶ್ರೀ ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮೀಜಿ ಟ್ರಸ್ಟ್ನ ಶಿವಾಚಾರ್ಯ ನಿಕೇತನ, ಹಿರೇಮಠದಲ್ಲಿ ಆಯೋಜಿಸಿದ್ದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ–2026 ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರೈತರು ದೇಶದ ಆರ್ಥಿಕತೆಯ ಬೆನ್ನೆಲುಬು. ಕೃಷಿ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲಿ ರೈತರ ನೆರವಿಗೆ ನಿಲ್ಲುವುದು ಸರ್ಕಾರ ಹಾಗೂ ಸಹಕಾರ ಸಂಸ್ಥೆಗಳ ಪ್ರಮುಖ ಜವಾಬ್ದಾರಿ. ಪ್ರಸಕ್ತ ಪರಿಸ್ಥಿತಿಯಲ್ಲಿ ಸಾಲ ವಸೂಲಾತಿಗೆ ಕಠಿಣ ಕ್ರಮ ಅನುಸರಿಸುವ ಬದಲು ರೈತರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಸಹಾನುಭೂತಿಯಿಂದ ಸ್ಪಂದಿಸಬೇಕು. ಈ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.
ನಬಾರ್ಡ್ ಅನುದಾನ ಕಡಿತಕ್ಕೆ ಅಸಮಾಧಾನ
‘ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಮೂಲಕ ರಾಜ್ಯಕ್ಕೆ ದೊರೆಯುತ್ತಿದ್ದ ಆರ್ಥಿಕ ನೆರವು ಶೇ 58ರಷ್ಟು ಕಡಿತಗೊಂಡಿರುವುದರಿಂದ ಸಹಕಾರ ಬ್ಯಾಂಕ್ಗಳ ಸಾಲ ವಿತರಣೆಗೆ ತೊಂದರೆಯಾಗುತ್ತಿದೆ. ಈ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಸಮಸ್ಯೆಯ ಗಂಭೀರತೆ ವಿವರಿಸಲಾಗಿದೆ. ರೈತರಿಗೆ ಸಕಾಲದಲ್ಲಿ ಸಾಲ ಸೌಲಭ್ಯ ಒದಗಿಸಲು ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಗಿದೆ ಎಂದರು.
ದೇಶದ ಆರ್ಥಿಕ ಪ್ರಗತಿ ಹಾಗೂ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ಮಹತ್ವದ ಕೊಡುಗೆ ನೀಡುತ್ತಿದ್ದರೂ, ರಾಜ್ಯಕ್ಕೆ ನ್ಯಾಯಯುತ ಅನುದಾನ ದೊರೆಯುತ್ತಿಲ್ಲ. ರಾಜ್ಯದ ಹಕ್ಕಿನ ಅನುದಾನ ಪಡೆಯಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಸದರೊಂದಿಗೆ ಚರ್ಚಿಸಿ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗಿದೆ. ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆಗೆ ನಿರಂತರ ಪ್ರಯತ್ನ ನಡೆಸಲಾಗುತ್ತಿದೆ ಎಂದು ಹೇಳಿದರು.
ಗ್ರಾಮೀಣ ಆರ್ಥಿಕತೆಗೆ ಸಹಕಾರ ಸಂಸ್ಥೆಗಳೇ ಆಧಾರ
ದಾವಣಗೆರೆ ಜಿಲ್ಲೆಯಲ್ಲಿ ಸುಮಾರು 1,541 ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಗ್ರಾಮೀಣ ಆರ್ಥಿಕತೆಯನ್ನು ಸದೃಢಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ವಿಶೇಷವಾಗಿ ಹೈನುಗಾರಿಕೆ ಹಾಗೂ ಸಹಕಾರ ಕ್ಷೇತ್ರದಲ್ಲಿ ಮಹಿಳೆಯರು ಮುಂಚೂಣಿಯಲ್ಲಿರುವುದು ಆಶಾದಾಯಕ ಬೆಳವಣಿಗೆ. ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸಹಕಾರ ಸಂಸ್ಥೆಗಳು ಮತ್ತಷ್ಟು ಉತ್ತೇಜನ ನೀಡಬೇಕು ಎಂದು ಹೇಳಿದರು.
ಸಹಕಾರ ಸಂಸ್ಥೆಗಳು ಕೇವಲ ಸಾಲ ವಿತರಣೆ ಮತ್ತು ವಸೂಲಾತಿಗೆ ಸೀಮಿತವಾಗದೆ, ಸಣ್ಣ ಮತ್ತು ಅತಿಸಣ್ಣ ರೈತರು, ಮಹಿಳೆಯರು ಹಾಗೂ ಯುವಜನರ ಆರ್ಥಿಕ ಸಬಲೀಕರಣಕ್ಕೆ ಆದ್ಯತೆ ನೀಡಬೇಕು. ಎಂಜಿನಿಯರಿಂಗ್, ವೈದ್ಯಕೀಯ, ನರ್ಸಿಂಗ್ ಹಾಗೂ ಫಾರ್ಮಸಿ ಸೇರಿದಂತೆ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ಸೌಲಭ್ಯ ವಿಸ್ತರಿಸಬೇಕು ಎಂದು ಸಲಹೆ ನೀಡಿದರು.
ನೀರಾವರಿ ಯೋಜನೆಗಳಿಗೆ ಅನುದಾನ ಒದಗಿಸಲು ಪ್ರಯತ್ನ
‘ರೈತರ ಕೃಷಿ ಚಟುವಟಿಕೆಗಳಿಗೆ ಸಮರ್ಪಕ ನೀರಾವರಿ ಸೌಲಭ್ಯ ಕಲ್ಪಿಸುವುದು ಅತ್ಯಗತ್ಯ. ಬೈರಲಿಪಾದಿ ಏತ ನೀರಾವರಿ ಯೋಜನೆಗೆ ಅಗತ್ಯವಿರುವ ಸುಮಾರು ₹200 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ. ಯೋಜನೆಯ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ ಎಂದು ತಿಳಿಸಿದರು.
ಸಹಕಾರ ಕ್ಷೇತ್ರದ ಆಧುನೀಕರಣಕ್ಕೆ ಆದ್ಯತೆ
ಸಹಕಾರ ಸಂಸ್ಥೆಗಳು ಬದಲಾಗುತ್ತಿರುವ ಕಾಲಘಟ್ಟಕ್ಕೆ ಅನುಗುಣವಾಗಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ಆಡಳಿತದಲ್ಲಿ ಪಾರದರ್ಶಕತೆ, ನೌಕರರಿಗೆ ಸೂಕ್ತ ತರಬೇತಿ ಹಾಗೂ ಸೇವಾ ವಿತರಣೆಯಲ್ಲಿ ದಕ್ಷತೆ ಹೆಚ್ಚಿಸುವ ಮೂಲಕ ಜನರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಅಭಿಪ್ರಾಯಪಟ್ಟರು.
ಸಹಕಾರ ಕ್ಷೇತ್ರದ ಆಡಳಿತದಲ್ಲಿ ವಿಕೇಂದ್ರೀಕರಣ ಮತ್ತು ರಾಜ್ಯಗಳ ಅಧಿಕಾರಕ್ಕೆ ಆದ್ಯತೆ ನೀಡಬೇಕು. ಸಹಕಾರ ಸಂಸ್ಥೆಗಳ ಸ್ವಾಯತ್ತತೆ ಕಾಪಾಡುವ ಜತೆಗೆ ಅವುಗಳ ಕಾರ್ಯನಿರ್ವಹಣೆಗೆ ಪೂರಕವಾದ ನೀತಿಗಳನ್ನು ರೂಪಿಸಬೇಕುಎಂದು ಹೇಳಿದರು.
‘ಭಾರತದಲ್ಲಿ ಶ್ವೇತ ಕ್ರಾಂತಿಗೆ ಕಾರಣರಾದ ಡಾ. ವರ್ಗೀಸ್ ಕುರಿಯನ್ ಅವರ ಸಾಧನೆ ಸಹಕಾರ ಕ್ಷೇತ್ರಕ್ಕೆ ಮಾದರಿಯಾಗಿದೆ. ಮಹಾತ್ಮ ಗಾಂಧೀಜಿಯವರ ಸರ್ವೋದಯ ಪರಿಕಲ್ಪನೆಯಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಹಕಾರ ವ್ಯವಸ್ಥೆಯ ಪ್ರಯೋಜನ ತಲುಪಬೇಕು’ ಎಂದರು.
ಸಹಕಾರಿಗಳ ಧ್ವನಿಯಾಗಿ ಸಂಸತ್ತಿನಲ್ಲಿ ಕೆಲಸ ಮಾಡುವೆ
‘ಕೇಂದ್ರ ಸರ್ಕಾರದ ಅನುದಾನ ಹಂಚಿಕೆ, ನಿಯಮಗಳು ಅಥವಾ ಆಡಳಿತಾತ್ಮಕ ನಿರ್ಬಂಧಗಳಿಂದ ಸಹಕಾರ ಸಂಘಗಳ ಕಾರ್ಯನಿರ್ವಹಣೆಗೆ ತೊಂದರೆಯಾಗುತ್ತಿದ್ದರೆ, ಅವುಗಳನ್ನು ನಮ್ಮ ಗಮನಕ್ಕೆ ತರಬೇಕು. ಸಹಕಾರಿಗಳ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿ, ಪರಿಹಾರ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಭರವಸೆ ನೀಡಿದರು.
ಸಹಕಾರ ಸಪ್ತಾಹವನ್ನು ಕೇವಲ ಸಾಂಪ್ರದಾಯಿಕ ಆಚರಣೆಗೆ ಸೀಮಿತಗೊಳಿಸದೆ, ಸಹಕಾರ ತತ್ವಗಳ ಮಹತ್ವವನ್ನು ಜನಸಾಮಾನ್ಯರಿಗೆ ತಲುಪಿಸುವ ಜನಜಾಗೃತಿ ಉತ್ಸವವನ್ನಾಗಿ ರೂಪಿಸಬೇಕು. ರೈತರ ಕಲ್ಯಾಣ, ಮಹಿಳಾ ಸಬಲೀಕರಣ ಹಾಗೂ ಗ್ರಾಮೀಣಾಭಿವೃದ್ಧಿಗೆ ಸಹಕಾರ ಸಂಸ್ಥೆಗಳು ಮತ್ತಷ್ಟು ಶ್ರಮಿಸಬೇಕು ಎಂದು ಕರೆ ನೀಡಿದರು.
ಸಹಕಾರಿ ಕ್ಷೇತ್ರವು ಸಂವಿಧಾನಾತ್ಮಕವಾಗಿ ರಾಜ್ಯಗಳ ಅಧಿಕಾರ ವ್ಯಾಪ್ತಿಗೆ ಒಳಪಡುವ ವಿಷಯವಾಗಿರುವುದರಿಂದ, ಈ ಮಸೂದೆಯ ಕುರಿತು ಕಾಂಗ್ರೆಸ್ ಪಕ್ಷವು ಆಕ್ಷೇಪಣೆ ವ್ಯಕ್ತಪಡಿಸಿದೆ.
‘ಸಹಕಾರ ಸಂಸ್ಥೆಗಳು ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೇಂದ್ರಗಳಾಗಬೇಕು. ಸಾಲ ವಸೂಲಾತಿಯಲ್ಲಿ ಮಾನವೀಯತೆ ಮೆರೆಯುವುದರ ಜೊತೆಗೆ ರೈತರು, ಮಹಿಳೆಯರು ಹಾಗೂ ಯುವಜನರ ಆರ್ಥಿಕ ಸ್ವಾವಲಂಬನೆಗೆ ಆದ್ಯತೆ ನೀಡಬೇಕು. ಸಹಕಾರ ಕ್ಷೇತ್ರದ ಸಮಸ್ಯೆಗಳಿಗೆ ಸಂಸತ್ತಿನಲ್ಲಿ ಧ್ವನಿಯಾಗುತ್ತೇನೆ.’
— ಡಾ. ಪ್ರಭಾ ಮಲ್ಲಿಕಾರ್ಜುನ್, ಸಂಸದೆ, ದಾವಣಗೆರೆ
ಮಸೂದೆಯ ಅನುಷ್ಠಾನದ ಮೂಲಕ ಸಹಕಾರಿ ಸಂಸ್ಥೆಗಳ ಶಿಕ್ಷಣ, ತರಬೇತಿ ಪಠ್ಯಕ್ರಮ ಹಾಗೂ ನಿಯಮಾವಳಿಗಳ ರೂಪಿಸುವಿಕೆಯಲ್ಲಿ ಕೇಂದ್ರ ಸರ್ಕಾರದ ಪ್ರಭಾವ ಹೆಚ್ಚಾಗುವ ಸಾಧ್ಯತೆಯಿದೆ. ಇದರಿಂದ ಸಹಕಾರಿ ಕ್ಷೇತ್ರದ ಆಡಳಿತದಲ್ಲಿ ರಾಜ್ಯ ಸರ್ಕಾರಗಳ ಸ್ವಾಯತ್ತತೆ ಹಾಗೂ ಅಧಿಕಾರಗಳಿಗೆ ಧಕ್ಕೆಯಾಗಬಹುದು ಎಂಬುದು ಕಾಂಗ್ರೆಸ್ ಪಕ್ಷದ ಪ್ರಮುಖ ಕಳವಳವಾಗಿದೆ.
ಸಹಕಾರಿ ವ್ಯವಸ್ಥೆಯ ಮೂಲ ಆಶಯಗಳಾದ ಪ್ರಜಾಸತ್ತಾತ್ಮಕ ಆಡಳಿತ, ರಾಜ್ಯಗಳ ಸ್ವಾಯತ್ತತೆ ಹಾಗೂ ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಕಾಪಾಡಿಕೊಂಡು ಸಹಕಾರಿ ಕ್ಷೇತ್ರವನ್ನು ಬಲಪಡಿಸಬೇಕು ಎಂಬುದು ಕಾಂಗ್ರೆಸ್ ಪಕ್ಷದ ನಿಲುವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಎಸ್. ಬಸವಂತಪ್ಪ,ಸಿರಿಗೆರೆ ರಾಜಣ್ಣ ಅಧ್ಯಕ್ಷತೆ ವಹಿಸಿದ್ದರು. ಷಣ್ಮುಖಪ್ಪನವರು, ಮಂಜುನಾಥ್ ಕುರ್ಕಿ, ಬಸವರಾಜಪ್ಪ, ಸಿ. ಚಂದ್ರಶೇಖರ್ ಸೇರಿದಂತೆ ಸಹಕಾರ ಕ್ಷೇತ್ರದ ಮುಖಂಡರು, ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.





Leave a comment