Home ದಾವಣಗೆರೆ ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಿ: ಶಿವನಗೌಡ ಟಿ. ಪಾಟೀಲ್ ಒತ್ತಾಯ
ದಾವಣಗೆರೆನವದೆಹಲಿಬೆಂಗಳೂರು

ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಿ: ಶಿವನಗೌಡ ಟಿ. ಪಾಟೀಲ್ ಒತ್ತಾಯ

Share
ಆಶಾ
Share

ದಾವಣಗೆರೆ: ರಾಜ್ಯದ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ರಾಜ್ಯ ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ದಾವಣಗೆರೆ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಶಿವನಗೌಡ ಟಿ. ಪಾಟೀಲ್ ಅವರು ಒತ್ತಾಯಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಹಗಲು-ರಾತ್ರಿ ಧರಣಿ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿರುವ ಅವರು, ಆಶಾ ಕಾರ್ಯಕರ್ತೆಯರ ಸೇವೆಯನ್ನು ಸರ್ಕಾರ ನಿರ್ಲಕ್ಷಿಸಬಾರದು ಎಂದು ಆಗ್ರಹಿಸಿದ್ದಾರೆ.

ಕೊರೊನಾ ಮಹಾಮಾರಿಯ ಸಂಕಷ್ಟದ ಸಂದರ್ಭದಲ್ಲಿ ತಮ್ಮ ಜೀವದ ಹಂಗನ್ನೂ ತೊರೆದು ಮನೆಮನೆಗೆ ತೆರಳಿ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಸೋಂಕಿತರ ಮಾಹಿತಿ ಸಂಗ್ರಹಿಸಿ, ಆರೋಗ್ಯ ಜಾಗೃತಿ ಮೂಡಿಸುವ ಮೂಲಕ ಆಶಾ ಕಾರ್ಯಕರ್ತೆಯರು ಅತ್ಯಂತ ಮಹತ್ವದ ಸೇವೆ ಸಲ್ಲಿಸಿದ್ದಾರೆ. ಗರ್ಭಿಣಿಯರ ಆರೈಕೆ, ತಾಯಿ ಮತ್ತು ಶಿಶು ಆರೋಗ್ಯ, ಲಸಿಕಾ ಕಾರ್ಯಕ್ರಮ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಅವರ ಪಾತ್ರ ಅನನ್ಯವಾಗಿದೆ.

ಇಷ್ಟೆಲ್ಲಾ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಬೀದಿಗಿಳಿದು ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ವಿಷಾದನೀಯ. ಮಹಿಳಾ ಕಾರ್ಮಿಕರ ಶ್ರಮಕ್ಕೆ ತಕ್ಕ ಗೌರವ ಮತ್ತು ಆರ್ಥಿಕ ಭದ್ರತೆ ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ.

ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಕನಿಷ್ಠ ₹15,000 ನಿಗದಿತ ಗೌರವಧನ ನೀಡಬೇಕು. ಬಾಕಿ ಇರುವ ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡಬೇಕು. ನಿವೃತ್ತಿ ಸಂದರ್ಭದಲ್ಲಿ ₹5 ಲಕ್ಷ ಆರ್ಥಿಕ ನೆರವು ನೀಡಬೇಕು. ಗಂಭೀರ ಅನಾರೋಗ್ಯದ ಸಂದರ್ಭದಲ್ಲಿ ಆರ್ಥಿಕ ನೆರವು, ಸ್ಮಾರ್ಟ್‌ಫೋನ್, ಇಂಟರ್ನೆಟ್ ಹಾಗೂ ಮೊಬೈಲ್ ರೀಚಾರ್ಜ್ ಭತ್ಯೆ ಮತ್ತು ಮಾತೃತ್ವ ರಜೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು.

ಸರ್ಕಾರದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆದಿದ್ದರೂ ಬೇಡಿಕೆಗಳ ಕುರಿತು ಸ್ಪಷ್ಟವಾದ ಲಿಖಿತ ಭರವಸೆ ಮತ್ತು ಅಧಿಕೃತ ಆದೇಶ ಹೊರಬಂದಿಲ್ಲ ಎಂಬುದು ಆತಂಕಕಾರಿ ಸಂಗತಿಯಾಗಿದೆ. ಕೇವಲ ಮೌಖಿಕ ಭರವಸೆ ನೀಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಸರ್ಕಾರ ಕೂಡಲೇ ಲಿಖಿತ ಭರವಸೆ ನೀಡಿ, ನಿಗದಿತ ಕಾಲಮಿತಿಯಲ್ಲಿ ಬೇಡಿಕೆಗಳನ್ನು ಈಡೇರಿಸಬೇಕು.

ಆಶಾ ಕಾರ್ಯಕರ್ತೆಯರ ಪ್ರತಿಯೊಂದು ಬೇಡಿಕೆಯನ್ನೂ ಮಾನವೀಯ ದೃಷ್ಟಿಕೋನದಿಂದ ಪರಿಗಣಿಸಿ, ಅವರ ಸೇವೆಗೆ ತಕ್ಕ ಗೌರವ ನೀಡಬೇಕು. ಅವರ ಹೋರಾಟವನ್ನು ಕಡೆಗಣಿಸದೆ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು.

ಆಶಾ ಕಾರ್ಯಕರ್ತೆಯರ ಸೇವೆ ಕೇವಲ ಉದ್ಯೋಗವಲ್ಲ, ಅದು ಸಮಾಜದ ಆರೋಗ್ಯದ ರಕ್ಷಣೆಯ ಮಹತ್ವದ ಜವಾಬ್ದಾರಿ. ಅವರ ಶ್ರಮಕ್ಕೆ ಗೌರವ, ಬದುಕಿಗೆ ಭದ್ರತೆ ಮತ್ತು ದುಡಿಮೆಗೆ ತಕ್ಕ ಪ್ರತಿಫಲ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಆಶಾ ಕಾರ್ಯಕರ್ತೆಯರ ನ್ಯಾಯಯುತ ಹೋರಾಟಕ್ಕೆ ಸ್ಪಂದಿಸಬೇಕೆಂದು ಶಿವನಗೌಡ ಟಿ. ಪಾಟೀಲ್ ಅವರು ತಿಳಿಸಿದ್ದಾರೆ.

Share
Related Articles