ದಾವಣಗೆರೆ: ದಾವಣಗೆರೆ ಮಹಾನಗರದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಭಯದ ವಾತಾವರಣದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದ ಪ್ರಮುಖ ರಸ್ತೆಗಳು, ಬಡಾವಣೆಗಳು, ಶಾಲಾ-ಕಾಲೇಜುಗಳ ಸುತ್ತಮುತ್ತ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಬೀದಿ ನಾಯಿಗಳ ಗುಂಪುಗಳು ಸಂಚರಿಸುತ್ತಿದ್ದು, ವಾಹನ ಸವಾರರು, ಮಕ್ಕಳು, ಮಹಿಳೆಯರು ಹಾಗೂ ವೃದ್ಧರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವನಗೌಡ ಟಿ. ಪಾಟೀಲ್ ಆರೋಪಿಸಿದ್ದಾರೆ.
ಬೆಳಗಿನ ಜಾವ ಕೆಲಸಕ್ಕೆ ತೆರಳುವವರು, ವಾಯುವಿಹಾರಕ್ಕೆ ಹೋಗುವ ವೃದ್ಧರು ಹಾಗೂ ಶಾಲೆಗೆ ತೆರಳುವ ಮಕ್ಕಳು ಬೀದಿ ನಾಯಿಗಳ ಭಯದಿಂದ ರಸ್ತೆಯಲ್ಲಿ ಸಂಚರಿಸಲು ಆತಂಕಪಡುವಂತಾಗಿದೆ. ಬೀದಿ ನಾಯಿಗಳ ದಾಳಿಯಿಂದ ಸಾರ್ವಜನಿಕರಿಗೆ ಗಾಯಗಳಾಗುವ ಹಾಗೂ ರೇಬಿಸ್ನಂತಹ ಮಾರಣಾಂತಿಕ ಕಾಯಿಲೆಗಳ ಅಪಾಯ ಎದುರಾಗುವ ಸಾಧ್ಯತೆಯಿದೆ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ದಾವಣಗೆರೆ ಮಹಾನಗರ ಪಾಲಿಕೆಯ ಸಂಬಂಧಪಟ್ಟ ಅಧಿಕಾರಿಗಳು ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ವಿಫಲರಾಗಿರುವುದು ವಿಷಾದನೀಯ ಎಂದಿದ್ದಾರೆ.
ಸಾರ್ವಜನಿಕರ ತೆರಿಗೆ ಹಣದಲ್ಲಿ ನಡೆಯುವ ಮಹಾನಗರ ಪಾಲಿಕೆ ಜನರ ಜೀವ ಮತ್ತು ಸುರಕ್ಷತೆಯನ್ನು ಕಾಪಾಡುವ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.
ಬೀದಿ ನಾಯಿಗಳ ಸಮಸ್ಯೆಯನ್ನು ನಿರ್ಲಕ್ಷಿಸುವುದು ಪರಿಹಾರವಲ್ಲ. ಪ್ರಾಣಿ ದಯೆ ಮತ್ತು ಸಾರ್ವಜನಿಕರ ಸುರಕ್ಷತೆ ಎರಡನ್ನೂ ಸಮತೋಲನದಿಂದ ಕಾಪಾಡುವುದು ಪಾಲಿಕೆಯ ಕರ್ತವ್ಯವಾಗಿದೆ. ಪ್ರಾಣಿಗಳ ಮೇಲಿನ ದಯೆಯ ಹೆಸರಿನಲ್ಲಿ ಮನುಷ್ಯರ ಜೀವಕ್ಕೆ ಅಪಾಯವಾಗಲು ಬಿಡಬಾರದು. ಅದೇ ರೀತಿ ಬೀದಿ ನಾಯಿಗಳನ್ನು ಕ್ರೂರವಾಗಿ ಹಿಂಸಿಸುವುದೂ ಪರಿಹಾರವಲ್ಲ ಎಂದು ಹೇಳಿದ್ದಾರೆ.
ಆದ್ದರಿಂದ ದಾವಣಗೆರೆ ಮಹಾನಗರ ಪಾಲಿಕೆಯ ಆಯುಕ್ತರು ಕೂಡಲೇ ವಿಶೇಷ ಕಾರ್ಯಾಚರಣೆ ಕೈಗೊಂಡು, ಬೀದಿ ನಾಯಿಗಳ ಸಂತಾನ ನಿಯಂತ್ರಣ ಶಸ್ತ್ರಚಿಕಿತ್ಸೆ, ರೇಬಿಸ್ ನಿರೋಧಕ ಲಸಿಕೆ, ನಾಯಿ ಹಾವಳಿ ಹೆಚ್ಚಿರುವ ಪ್ರದೇಶಗಳ ಗುರುತಿಸುವಿಕೆ ಹಾಗೂ ಸಾರ್ವಜನಿಕರ ಸುರಕ್ಷತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪ್ರಚಲಿತ ಪ್ರಾಣಿ ಕಲ್ಯಾಣ ನಿಯಮಗಳು ಮತ್ತು ಸುಪ್ರೀಂ ಕೋರ್ಟ್ ನಿರ್ದೇಶನಗಳಂತೆ ವೈಜ್ಞಾನಿಕ ಹಾಗೂ ಕಾನೂನುಬದ್ಧ ಕ್ರಮಗಳನ್ನು ಜಾರಿಗೊಳಿಸಬೇಕು. ಒಂದು ವೇಳೆ ಬೀದಿ ನಾಯಿಗಳ ಸಮಸ್ಯೆಗೆ ತಕ್ಷಣವೇ ಪರಿಣಾಮಕಾರಿ ಕ್ರಮ ಕೈಗೊಳ್ಳದಿದ್ದರೆ, ಸಾರ್ವಜನಿಕರ ಹಿತದೃಷ್ಟಿಯಿಂದ ಮಹಾನಗರ ಪಾಲಿಕೆಯ ವಿರುದ್ಧ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ನಗರದ ಜನರು ನಿರ್ಭೀತಿಯಿಂದ ರಸ್ತೆಗಳಲ್ಲಿ ಸಂಚರಿಸುವ ವಾತಾವರಣ ನಿರ್ಮಾಣವಾಗಬೇಕು. ಸಾರ್ವಜನಿಕರ ಜೀವಕ್ಕೆ ಬೆಲೆ ಇದೆ ಎಂಬುದನ್ನು ಅಧಿಕಾರಿಗಳು ಮರೆಯಬಾರದು. ಘಟನೆ ನಡೆದ ನಂತರ ಎಚ್ಚೆತ್ತುಕೊಳ್ಳುವುದಕ್ಕಿಂತ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು ಆಡಳಿತದ ನಿಜವಾದ ಜವಾಬ್ದಾರಿಯಾಗಿದೆ ಎಂದು ಶಿವನಗೌಡ ಟಿ. ಪಾಟೀಲ್ ಹೇಳಿದ್ದಾರೆ.





Leave a comment