SUDDIKSHANA KANNADA NEWS/ DAVANAGERE/ DATE:28-02-2024
ದಾವಣಗೆರೆ: ಶಾಂತಿಸಾಗರದ ಮೂಲಕ ಚನ್ನಗಿರಿ, ಚಿತ್ರದುರ್ಗ, ಹೊಳಲ್ಕೆರೆ, ಜಗಳೂರು ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ಬಳಕೆಯಾಗುತ್ತಿದ್ದು ಮುಂದಿನ 20 ದಿನಗಳಿಗೆ ಮಾತ್ರ ನೀರಿನ ಸಂಗ್ರಹವಿದೆ.
ಬೇಸಿಗೆಯಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆಗಾಗಿ ಅನಧಿಕೃತವಾಗಿ ಅಳವಡಿಸಿರುವ ಪಂಪ್ಸೆಟ್ಗಳನ್ನು ತೆರವು ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಬೆಸ್ಕಾಂ, ಗ್ರಾಮೀಣ ಕುಡಿಯುವ ನೀರು ವಿಭಾಗದ ಇಂಜಿನಿಯರ್ ಗಳಿಗೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಪತ್ತು ನಿರ್ವಹಣೆ ಕುರಿತಂತೆ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಂಜಿನಿಯರ್, ಪಶುಸಂಗೋಪನಾ ಇಲಾಖೆ, ಬೆಸ್ಕಾಂ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ಅವರು ಈ ಸೂಚನೆ ಕೊಟ್ಟಿದ್ದಾರೆ.
ಶಾಂತಿಸಾಗರದಿಂದ ಎರಡು ಜಿಲ್ಲೆಗಳ ಪ್ರಮುಖ ಪಟ್ಟಣ, ನಗರಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ಕೆರೆಗೆ ಅನಧಿಕೃತವಾಗಿ ಪಂಪ್ಸೆಟ್ ಅಳವಡಿಸಿಕೊಂಡು ಅಕ್ರಮವಾಗಿ ನೀರೆತ್ತಲಾಗುತ್ತಿದೆ. ಇದರಿಂದ ನೀರಿನ ಸಂಗ್ರಹ ತುಂಬಾ ಇಳಿಕೆಯಾಗಿರುವುದರಿಂದ ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಸಮಸ್ಯೆಯಾಗಲಿದೆ ಎಂದು ವೆಂಕಟೇಶ್ ಅವರು ಹೇಳಿದರು.
ಬೆಸ್ಕಾಂನಿಂದ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಿಕೊಟ್ಟಿದ್ದರಿಂದ ರೈತರು ಅನಧಿಕೃತವಾಗಿ ಕೆರೆಯಲ್ಲಿನ ನೀರನ್ನು ಬಳಕೆ ಮಾಡುತ್ತಿದ್ದಾರೆ. ಅನಧಿಕೃತವಾಗಿ ಅಳವಡಿಸಿರುವ ವಿದ್ಯುತ್ ಪರಿವರ್ತಕಗಳನ್ನು ತೆರವು
ಮಾಡಲು ಮತ್ತು ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಲು ಬೆಸ್ಕಾಂ ಇಂಜಿನಿಯರ್ಗೆ ಸೂಚನೆ ನೀಡಿದರು. ಶಾಂತಿಸಾಗರದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿರುವುದರಿಂದ ಕಾಲುವೆ ಮೂಲಕ ನೀರು ಶೇಖರಣೆಗೆ ಕ್ರಮ
ವಹಿಸಲಾಗುತ್ತದೆ ಎಂದರು.
ವೀಡಿಯೋ ಕಾನ್ಫರೆನ್ಸ್ನಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್, ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯ್ಯದಾ ಅಫ್ರೀನ್ ಭಾನು ಎಸ್.ಬಳ್ಳಾರಿ, ಉಪವಿಭಾಗಾಧಿಕಾರಿ ಅಭಿಷೇಕ್, ದುರ್ಗಶ್ರೀ, ಡಿಡಿಎಲ್ಆರ್ ಭಾವನಾ ಹಾಗೂ ತಹಶೀಲ್ದಾರರು ಉಪಸ್ಥಿತರಿದ್ದರು.