SUDDIKSHANA KANNADA NEWS/ DAVANAGERE/ DATE:24-02-2025
ಬೆಂಗಳೂರು: ಬೂತ್ ಮಟ್ಟದಿಂದಲೂ ಕಾಂಗ್ರೆಸ್ ಪಕ್ಷ ಬಲಪಡಿಸಿ. ಜನರ ಪ್ರೀತಿ ವಿಶ್ವಾಸ ಸಂಪಾದಿಸಿ. ಬಿಜೆಪಿ ಕುತಂತ್ರ ರಾಜಕಾರಣದ ಬಗ್ಗೆ ತಿಳಿಸಿ. ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಿಳಿಸುವ ಕೆಲಸ ಮಾಡಿ. ಯಾವುದೇ ಕಾರಣಕ್ಕೂ ಮೈಮರೆಯಬೇಡಿ. ಅಧಿಕಾರದಲ್ಲಿದ್ದೇವೆ, ಜನರು ಮತ ಹಾಕುತ್ತಾರೆ ಎಂಬ ಅಸಡ್ಡೆ ಮನೋಭಾವನೆ ಬೇಡ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಮಹಾನಗರ ಪಾಲಿಕೆ, ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಗೆಲ್ಲಲೇಬೇಕು. ಇದಕ್ಕೆ ಯುದ್ಧೋಪಾದಿಯಲ್ಲಿ ಸಿದ್ಧರಾಗಿ.
ಇದು ಬೆಂಗಳೂರಿನ ಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮುಖಂಡರಿಗೆ ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕೊಟ್ಟ ಕೆಲ ಟಿಪ್ಸ್ ಗಳು.
2023ರ ವಿಧಾನಸಭಾ ಚುನಾವಣೆಯ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಿದ ಡಿಕೆ ಶಿವಕುಮಾರ್ ಕೆಲ ಅಭ್ಯರ್ಥಿಗಳು ಕಡಿಮೆ ಅಂತರದಲ್ಲಿ ಸೋತಿದ್ದಾರೆ. ಸ್ವಲ್ಪ ವ್ಯತ್ಯಾಸವಾಗಿ ಸೋಲು ಕಂಡಿರಬಹುದು. ಹಾಗಾಗಿ ವೈಮನಸ್ಸು ಇರುವ ನಾಯಕರು, ಟಿಕೆಟ್ ಸಿಗದೇ ವಂಚಿತರಾದವರ ಮನವೊಲಿಸಿ. ಅವರೊಟ್ಟಿಗೊಡಗೂಡಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಗೆಲುವು ಕಷ್ಟವಾಗದು ಎಂದು ಡಿಕೆಶಿ ಹೇಳಿದ್ದಾರೆ.
ಪಕ್ಷವನ್ನು ಇನ್ನಷ್ಟು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಈ ಸಭೆ ನಡೆಸಲಾಗಿದ್ದು, ಪರಾಜಿತ ಅಭ್ಯರ್ಥಿಗಳಿಗೆ ಮುಂದಿನ ಚುನಾವಣೆಗೆ ಹೇಗೆ ತಯಾರಿ ಮಾಡಿಕೊಳ್ಳಬೇಕು, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹೇಗೆ ಸಿದ್ಧತೆ ಮಾಡಿಕೊಳ್ಳಬೇಕು ಎನ್ನುವ ಕುರಿತು ಸೂಚನೆ ನೀಡಿದ್ದೇನೆ ಎಂದರು.
ರಾಜ್ಯಾದ್ಯಂತ 100 ಕಾಂಗ್ರೆಸ್ ಕಚೇರಿಗಳನ್ನು ಆರಂಭಿಸಲಾಗುತ್ತಿದೆ. ಮಾರ್ಚ್ ಎರಡನೇ ವಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ನೂತನ ಕಚೇರಿಯ ಶಂಕುಸ್ಥಾಪನೆಗೆ ಆಹ್ವಾನಿಸುತ್ತಿದ್ದೇವೆ. ಇದೇ ವೇಳೆ ಅವರು 100 ಕಾಂಗ್ರೆಸ್ ಕಚೇರಿಗಳ ಶಂಕುಸ್ಥಾಪನೆಯನ್ನು ವರ್ಚುವಲ್ ಆಗಿ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರೂ ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು, ಮುಖ್ಯವಾಗಿ ಜಿಲ್ಲಾ ಉಸ್ತುವಾರಿ ಸಚಿವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಗಳನ್ನು ನಡೆಸುತ್ತಿದ್ದೇವೆ. ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಕಾರ್ಯಕರ್ತರ ಸಭೆ ನಡೆಯಲಿದೆ. ಪಕ್ಷದ ಕಚೇರಿ ನಿರ್ಮಾಣಕ್ಕೆ ಜಾಗಗಳನ್ನು ಆದಷ್ಟು ಬೇಗ ಅಂತಿಮಗೊಳಿಸುತ್ತೇವೆ. ಕಾಂಗ್ರೆಸ್ ಕಚೇರಿಗಾಗಿ ರಾಮನಗರದಲ್ಲಿ ನಾನೇ ಖುದ್ದಾಗಿ ಒಂದು ಜಾಗ ಖರೀದಿ ಮಾಡಿ ಉಡುಗೊರೆಯಾಗಿ ನೀಡುತ್ತಿದ್ದೇನೆ ಎಂದು ತಿಳಿಸಿದರು.