SUDDIKSHANA KANNADA NEWS/ DAVANAGERE/ DATE:24-01-2025
ಬೆಂಗಳೂರು: ನಾನು ಇವತ್ತಿಗೂ ಕನ್ನಡದಲ್ಲೇ ಸಹಿ ಹಾಕ್ತೀನಿ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರವೀಂದ್ರ ಕಲಾ ಕ್ಷೇತ್ರದಲ್ಲಿ ಕನ್ನಡ ಸೇನಾನಿ ಸಾ.ರಾ.ಗೋವಿಂದು ಅವರ ಅಭಿನಂದನ ಕಾರ್ಯಕ್ರಮದಲ್ಲಿ ಗೋವಿಂದು ಅವರನ್ನು ಸನ್ಮಾನಿಸಿ, ಅಭಿನಂದಿಸಿ ಮಾತನಾಡಿದರು.
ನಾನು ಕೇಂದ್ರ ಸರ್ಕಾರಕ್ಕೆ ಬರೆಯುವ ಪತ್ರಗಳನ್ನು ಹೊರತುಪಡಿಸಿ ಉಳಿದ ಎಲ್ಲಕ್ಕೂ ಇವತ್ತಿಗೂ ಕನ್ನಡದಲ್ಲೇ ಸಹಿ ಹಾಕ್ತೀನಿ ಎಂದರು.
ಬೇರೆ ಧರ್ಮ ಮತ್ತು ಇತರೆ ಭಾಷೆಗಳ ಬಗ್ಗೆ ಸಹಿಷ್ಣತೆ ಇರಬೇಕು. ನಮ್ಮ ಭಾಷೆ ಬಗ್ಗೆ ಅಭಿಮಾನ ಹೆಚ್ಚಾಗಿರಬೇಕು. ತಾಯಿ ಭಾಷೆ, ತಾಯಿ ನೆಲದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು.
ಸಾ.ರಾ.ಗೋವಿಂದು ಅವರು ರಾಜ್ ಕುಮಾರ್ ಸಂಘದ ಅಧ್ಯಕ್ಷರಾಗಿ ಕನ್ನಡ ಪರವಾದ ಹೋರಾಟಗಳನ್ನು ನಿರಂತರವಾಗಿ ನಡೆಸಿಕೊಂಡು ಬಂದಿದ್ದಾರೆ. ಇವರ ಹೋರಾಟದ ಫಲವಾಗಿ ಕನ್ನಡ ಚಿತ್ರರಂಗದ ಅಡಿಪಾಯ ಗಟ್ಟಿ ಆಯಿತು ಎಂದು ಶ್ಲಾಘಿಸಿದರು.
ಗೋವಿಂದು ಅವರು ರಾಜ್ ಕುಮಾರ್ ಸಂಘದ ಅಧ್ಯಕ್ಷರಾಗಿ ಮಾಡಿದ ಕೆಲಸಗಳು ಸ್ಮರಣೀಯ. ರಾಜ್ ಅವರ ವಿನಯ, ಸಭ್ಯತೆ, ಸರಳತೆ ಇಡೀ ಮನುಷ್ಯ ಕುಲಕ್ಕೇ ಮಾದರಿ. ಡಾ.ರಾಜ್ ಕುಮಾರ್ ಅವರಿಗೆ ರಾಜ್ ಅವರೇ ಸಾಟಿ. ಇವರಿಗೆ ಸಾಟಿ ಆಗುವವರು ಯಾರೂ ಇನ್ನೂ ಬಂದಿಲ್ಲ ಎಂದರು.
ಹಿರಿಯ ಸಾಹಿತಿ ಹಂಪನಾ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಗೋ.ರು.ಚನ್ನಬಸಪ್ಪ, ನಾಡೋಜ ಬರಗೂರು ರಾಮಚಂದ್ರಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ಹಿರಿಯ ಪತ್ರಕರ್ತರಾದ ವೆಂಕಟೇಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.