SUDDIKSHANA KANNADA NEWS/ DAVANAGERE/ DATE:12-02-2024
ದಾವಣಗೆರೆ: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ಪೌರಚಾಲಕರು, ನೀರಗಂಟಿಗಳು, ಲೋಡರ್ಸ್, ಕ್ಲೀನರ್ಸ್, ಹೆಲ್ಪರ್ಸ್, ಯುಜಿಡಿ ಕಾರ್ಮಿಕರು ಸೇರಿದಂತೆ ಎಲ್ಲ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸುವಂತೆ ಆಗ್ರಹಿಸಿ, ಫೆ. 13,14 ರಂದು ಪಾಲಿಕೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಿದ್ದು, ಫೆ.,15ರಂದು ‘ಹೊರಗುತ್ತಿಗೆ ನೌಕರರ ನಡಿಗೆ ಮುಖ್ಯಮಂತ್ರಿಗಳ ಮನೆ ಕಡೆಗೆ’ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಮಹಾನಗರ ಪಾಲಿಕೆಯ ಹೊರಗುತ್ತಿಗೆ ಘನತ್ಯಾಜ್ಯ ವಿಲೇವಾರಿ ವಾಹನ ಚಾಲಕರ ಸಂಘದ ಅಧ್ಯಕ್ಷ ಎಂ.ಆರ್. ದುಗ್ಗೇಶ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೂ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರದ ಸ್ಪಂದನೆ ಇಲ್ಲವಾಗಿದೆ. ನೌಕರರನ್ನು ನೇರಪಾವತಿಯಡಿ ತಂದರೆ ಸರ್ಕಾರಕ್ಕೆ ಜಿಎಸ್ ಟಿ ಉಳಿತಾಯದ ಜೊತೆಗೆ ನೌಕರರಿಗೆ ಸೇವಾ ಭದ್ರತೆ ಹಾಗೂ ಏಜೆನ್ಸಿಗಳ ಕಿರುಕುಳ ತಪ್ಪಲಿದೆ ಎಂದರು.
ಹಿಂದಿನ ಮುಖ್ಯಮಂತ್ರಿಗಳ ಅವಧಿಯಲ್ಲಿ ಕಾರ್ಮಿಕರನ್ನು ನೇರಪಾವತಿಗೆ ತರಲು ತೀರ್ಮಾನವೂ ಆಗಿದೆ. ಆದರೆ ಅಧಿಕಾರಿಗಳ ತಾರತಮ್ಯ ನೀತಿಯಿಂದ ಜಾರಿಯಾಗುತ್ತಿಲ್ಲ. ನಗರಾಭಿವೃದ್ದಿ ಇಲಾಖೆಯೂ ಕಾರ್ಮಿಕ ವಿರೋಧಿ ಧೋರಣೆ ಅನುಸರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಫೆ.13 ಹಾಗೂ 14 ರಂದು ಪಾಲಿಕೆ ಮುಂಭಾಗದಲ್ಲಿ ಬೆಳಿಗ್ಗೆ 9.30 ರಿಂದ ಪ್ರತಿಭಟನೆ ನಡೆಸಲಾಗುವುದು. ಫೆ.15 ರಂದು ‘ಹೊರಗುತ್ತಿಗೆ ನೌಕರರ ನಡಿಗೆ ಮುಖ್ಯಮಂತ್ರಿಗಳ ಮನೆ ಕಡೆಗೆ’ ಹೋರಾಟಕ್ಕಾಗಿ ಬೆಂಗಳೂರಿಗೆ ತೆರಳಲಿದ್ದೇವೆ ಎಂದು ತಿಳಿಸಿದರು.
ರಾಜ್ಯಾದ್ಯಂತ ಎಲ್ಲಾ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರು ಹೋರಾಟ ಹಮ್ಮಿಕೊಂಡಿದ್ದು,ಎಲ್ಲ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೆ ತರಲು ಬಜೆಟ್ ನಲ್ಲಿ ಘೋಷಿಸಬೇಕು, ಪೌರಾಡಳಿತ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತಂದು ಅಗತ್ಯಕ್ಕನುಗುಣವಾಗಿ ಪೌರಚಾಲಕ ಹುದ್ದೆಗಳನ್ನು ಸೃಷ್ಟಸಬೇಕು ಎಂದು ಆಗ್ರಹಿಸಲಾಗುವುದು ಎಂದರು.
ಗೋಷ್ಠಿಯಲ್ಲಿ ಬಿ. ಸಂತೋಷ್, ಹೆಚ್.ಎಂ. ಕೊಟ್ರೇಶ್, ಜಿ.ಹೆಚ್. ಚಂದ್ರಪ್ಪ, ಎಂ. ರಮೇಶ್, ಮೈಲಾರಪ್ಪ, ಎನ್. ದ್ಯಾಮಣ್ಣ ಹಾಗೂ ನವೀನ್ ಕುಮಾರ್ ಉಪಸ್ಥಿತರಿದ್ದರು.