SUDDIKSHANA KANNADA NEWS/ DAVANAGERE/ DATE:19-12-2024
ದಾವಣಗೆರೆ: ಕಾಂಗ್ರೆಸ್ ನಲ್ಲಿ ಯಾರೂ ಗಂಡಸರು ಇಲ್ವ ಎಂದು ಚನ್ನಗಿರಿ ಶಾಸಕ ಶಿವಗಂಗಾ ವಿ. ಬಸವರಾಜ್ ಹೇಳುವ ಮೂಲಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಗಿರಿಯಲ್ಲಿ ಡಿಸಿಸಿ ಬ್ಯಾಂಕ್ ನ ನಿರ್ದೇಶಕ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸೋಲಲು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಕಾರಣ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವಿರುದ್ಧ ಸ್ಪರ್ಧೆ ಮಾಡಿದ್ದ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ. ಚುನಾವಣೆ ಎಂದ ಮೇಲೆ ಸೋಲು ಗೆಲುವು ಸಹಜ. ಸೋಲು ನಾವು ಒಪ್ಪಿಕೊಳ್ಳುತ್ತೇವೆ. ನಮ್ಮವರಿಂದಲೇ ಸೋತರೆ ನಮಗೆ ಹೇಗಾಗಬೇಡ ಎಂದು ಕಿಡಿಕಾರಿದರು.
ಅಪೆಕ್ಸ್ ಬ್ಯಾಂಕ್ ನಲ್ಲಿ ಸ್ವಾಮಿ ಎಂಬಾತ ಇದ್ದ. ಆತನನ್ನು ಮುಂದುವರಿಸಿದ್ದಾರೆ. ಹಾಗಿದ್ದರೆ ಕಾಂಗ್ರೆಸ್ ನಲ್ಲಿ ಗಂಡಸರು ಇಲ್ವಾ? ಅಪೆಕ್ಸ್ ಬ್ಯಾಂಕ್ ಹೋಗುವಂಥ ಗಂಡಸರು ಹೋಗುವಂಥ ಗಂಡಸರು ಕಾಂಗ್ರೆಸ್ ನಲ್ಲಿ ಇಲ್ಲವಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ನಾನು ದಾವಣಗೆರೆ ಜಿಲ್ಲೆಯಲ್ಲಿ ಸಚಿವರು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ರಾಜಕೀಯ ಮಾಡುತ್ತಿರುವ ಕುರಿತಂತೆ ಸಿಎಂ, ಡಿಸಿಎಂ ಗಮನಕ್ಕೆ ತಂದಿದ್ದೇನೆ. ಸಿಎಂ ಸಿದ್ದರಾಮಯ್ಯರು ಪತ್ರಕ್ಕೆ ಬೆಲೆ ನೀಡುತ್ತಾರೆ ಎಂಬ ವಿಶ್ವಾಸ ಇದೆ. ನಮ್ಮದು ಬಿಸಿರಕ್ತ. ಏನು ನಡೆಯುತ್ತೋ ಅದನ್ನೇ ಹೇಳುತ್ತೇವೆ. ಬಕೆಟ್ ಹಿಡಿಯುವ ರಾಜಕಾರಣ ಮಾಡಲ್ಲ. ಜಿಲ್ಲಾ ಉಸ್ತುವಾರಿ ಸಚಿವರ ನಡೆ ಬಗ್ಗೆ ಪತ್ರ ಬರೆಯಲೇಬೇಕಿತ್ತು. ಬರೆದಿದ್ದೇನೆ ಎಂದು ತಿಳಿಸಿದರು.