SUDDIKSHANA KANNADA NEWS/ DAVANAGERE/ DATE:17-09-2024
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಹಂಚ ಹಂತವಾಗಿ ಕ್ರಮ ವಹಿಸಲು ಸಚಿವ ಸಂಪುಟ ನಿರ್ಧರಿಸಿದೆ.
ಕಲಬುರಗಿಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 17439 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಛಿಯಲ್ಲಿ ತಿಳಿಸಿದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 371ಜೆ ಜಾರಿ:
ಇಂದು ಕಲ್ಯಾಣ ಕರ್ನಾಟಕದ ವಿಮೋಚನಾ ದಿನವಾದ್ದರಿಂದ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಯಿತು. 2013 ರಿಮದ 2018 ವರೆಗೆ ನಮ್ಮ ಸರ್ಕಾರದ ಅವಧಿಯಲ್ಲಿ 2014 ರಲ್ಲಿ ಕಲಬುರಗಿಯಲ್ಲಿ ಸಚಿವ ಸಂಪುಟ ನಡೆಸಲಾಗಿತ್ತು. ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ಇಂದು ನಡೆಸಲಾಗಿದೆ. 2012 ರಲ್ಲಿ ಮನಮೋಹನ್ ಸಿಂಗ್ ಪ್ರಧಾನ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಂವಿಧಾನ ತಿದ್ದುಪಡಿ ಮಾಡಲಾಯಿತು. ರಾಜ್ಯದ ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್ ಅವರ ಹೋರಾಟದಿಂದ 371 ಜೆ ಜಾರಿಗೆ ತರಲಾಯಿತು. ವಿಶೇಷ ಸವಲತ್ತುಗಳನ್ನು ಕಲ್ಯಾಣ ಕರ್ನಾಟಕದ ಭಾಗಕ್ಕೆ ನೀಡುವ ಉದ್ದೇಶದಿಂದ 2013 ರಲ್ಲಿ ಸಂವಿಧಾನ ತಿದ್ದುಪಡಿಯಾದ ನಂತರ ನಮ್ಮ ಸರ್ಕಾರದ ಅವಧಿಯಲ್ಲಿ ಈ ಕಾನೂನಿನ ಜಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಯಿತು ಎಂದರು.
ಹಿಂದುಳಿದ ತಾಲ್ಲೂಕುಗಳ ಸ್ಥಿತಿಗತಿ ಪರಿಶೀಲನೆಗೆ ಸಮಿತಿ:
2002 ರಲ್ಲಿ ನಂಜುಂಡಪ್ಪ ವರದಿಯಂತೆ ಪ್ರಾದೇಶಿಕ ಅಸಮತೋಲನವನ್ನು ಪರಿಹರಿಸಲು ಸಮಿತಿ ರಚಿಸಲಾಗಿತ್ತು. ಪ್ರಸ್ತುತ ಈ ಭಾಗದ ತಾಲ್ಲೂಕುಗಳ ಸ್ಥಿತಿಗತಿಯ ಪರಿಶೀಲನೆ ನಡೆಸಲು ಡಾ.ಗೋವಿಂದ ರಾವ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಪ್ರಾದೇಶಿಕ ಅಸಮತೋಲನ ಹೋಗಲಾಡಿಸಲು ಈ ಸಮಮಿಯನ್ನು ರಚಿಸಲಾಗಿದ್ದು, ಸಮಿತಿ ವರದಿ ಬಂದ ನಂತರ ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
45 ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ತೀರ್ಮಾನ
ಕಲ್ಯಾಣ ಕರ್ನಾಟಕ ಭಾಗದಲ್ಲಿ 45 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹಾಗೂ 31 ಸಮುದಾಯ ಆರೋಗ್ಯ ಕೇಂದ್ರಗಳನ್ನು ಪ್ರಾರಂಭಿಸಲು , 9 ತಾಲ್ಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಹಾಗೂ 2 ತಾಲ್ಲೂಕು ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಇದಕ್ಕೆ 890 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು ಎಂದರು.