SUDDIKSHANA KANNADA NEWS/ DAVANAGERE/ DATE:18-03-2024
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾಗಲೇಬೇಕು. ಸಂಸದ ಡಾ. ಜಿ. ಎಂ. ಸಿದ್ದೇಶ್ವರ ಅವರಿಗೆ ಗೌರವ ಕೊಡುವ ಕಾಲದಲ್ಲಿ ಕೊಟ್ಟಿದ್ದೇವೆ. ಈಗ ಅದು ಮುಗಿದು ಹೋದ ವಿಚಾರ. ಫೋನ್ ಮಾಡಿದ್ರೆ ಆಗದು ಎಂದು ಮಾಜಿ ಸಚಿವ ಎಸ್. ಎ. ರವೀಂದ್ರನಾಥ್ ಅವರು ಪಟ್ಟುಹಿಡಿದಿದ್ದಾರೆ.
ಮಹಾನಗರ ಪಾಲಿಕೆಯ ಮಾಜಿ ಮೇಯರ್ ಅಜಯ್ ಕುಮಾರ್ ನಿವಾಸದಲ್ಲಿ ನಡೆದ ಭಿನ್ನಮತೀಯರ ಸಭೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬುದು ನಮ್ಮೆಲ್ಲರ ಒತ್ತಾಸೆ, ಆಶಯ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾಗಲೇಬೇಕು. ಸಂಸದ ಡಾ. ಜಿ. ಎಂ. ಸಿದ್ದೇಶ್ವರ ಅವರ ಕುಟುಂಬದವರನ್ನು ಬಿಟ್ಟು ಬೇರೆಯವರಿಗೆ ನೀಡಬೇಕು. ಯಾರಿಗೆ ಟಿಕೆಟ್ ನೀಡಿದರೂ ಗೆಲುವಿಗೆ ಕೆಲಸ ಮಾಡುತ್ತೇವೆ. ಇಲ್ಲದಿದ್ರೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ ಎಂದರು.
ನಮ್ಮ ಮನವಿಗೆ ಸಿಕ್ಕಿಲ್ಲ ಪುರಸ್ಕಾರ:
ದಾವಣಗೆರೆಯಲ್ಲಿ ಬಿಜೆಪಿ ಹೈಕಮಾಂಡ್ ಘೋಷಿಸಿರುವ ಬಿಜೆಪಿ ಅಭ್ಯರ್ಥಿ ಸೋಲುತ್ತಾರೆ ಎಂಬ ಕಾರಣಕ್ಕೆ ಬೇರೆಯವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೇವೆ. ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರಿಗೆ ನಮ್ಮ ಬೆಂಬಲ ಇಲ್ಲ. ಅಭ್ಯರ್ಥಿ ಬದಲಾವಣೆ ಆಗಲೇಬೇಕು. ರಾಜ್ಯ ನಾಯಕರು, ರಾಷ್ಟ್ರ ನಾಯಕರಿಗೆ ಸಿದ್ದೇಶ್ವರ ಅವರ ಕುಟುಂಬಕ್ಕೆ ಟಿಕೆಟ್ ನೀಡಬಾರದು ಎಂದು ಮನವಿ ಮಾಡಿದ್ದೇವೆ. ನಮ್ಮ ಮನವಿಗೆ ಪುರಸ್ಕಾರ ಸಿಕ್ಕಿಲ್ಲ. ಹಾಗಾಗಿ, ನಮ್ಮ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.
ಮೋದಿ ಕಾರ್ಯಕ್ರಮಕ್ಕೆ ಹೋಗಲ್ಲ:
ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 18ರಂದು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು, ನಾವ್ಯಾರು ಹೋಗುವುದಿಲ್ಲ. ಈ ಸಭೆಯಲ್ಲಿ ಪಾಲ್ಗೊಳ್ಳುವವರು ಹೋಗದಿರಲು ನಿರ್ಧರಿಸಿದ್ದೇವೆ. ಅಭ್ಯರ್ಥಿ ಬದಲಾಗಬೇಕು ಎಂಬ ವಿಚಾರದಲ್ಲಿ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಟಿಕೆಟ್ ಘೋಷಣೆಗೆ ಮುನ್ನ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಗಮನಕ್ಕೆ ತಂದಿದ್ದೇವೆ. ರಾಜಕಾರಣದಲ್ಲಿ ಯಾರು ಯಾವಾಗ ಸೆಡ್ಡು ಹೊಡೆಯುತ್ತಾರೆ ಎಂಬುದು ಗೊತ್ತಾಗುವುದಿಲ್ಲ. ನಮ್ಮ ಬೇಡಿಕೆ ಒಂದೇ. ಅಭ್ಯರ್ಥಿ ಬದಲಾಗಬೇಕು, ಸಿದ್ದೇಶ್ವರ ಕುಟುಂಬಕ್ಕೆ ಟಿಕೆಟ್ ನೀಡಬಾರದು. ನಾನು ಯಾರ ಜೊತೆ ಮಾತನಾಡುವುದಕ್ಕೆ ಹೋಗಲು ತಯಾರಿಲ್ಲ. ಅವರೇ ಬಂದು ಏನು ಹೇಳುತ್ತಾರೆ ನೋಡೋಣ ಎಂದು ಹೇಳಿದರು.
ಬಿಜೆಪಿ ಸೋಲಲು ಸಿದ್ದೇಶ್ವರ ಕಾರಣ..!
ಕಳೆದ ವಿಧಾನಸಭೆ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಸೋಲು ಕಾಣಲು ಸಿದ್ದೇಶ್ವರ ಅವರೇ ಕಾರಣ ಎಂದು ಪರಾಜಿತ ಅಭ್ಯರ್ಥಿಗಳು ಹೇಳಿದ್ದಾರೆ. ನಾವು ಸೋಲಲು ಆ ಮನುಷ್ಯನೇ ಕಾರಣ ಎಂದು ಪರಾಜಿತ ಅಭ್ಯರ್ಥಿಗಳು ಸಭೆಯಲ್ಲಿ ಹೇಳಿಕೊಂಡಿದ್ದಾರೆ. ಈಗ ಅವರು ಫೋನ್ ಮಾಡಿದಾಕ್ಷಣ ಎಲ್ಲವೂ ಸರಿ ಹೋಗುವುದಿಲ್ಲ ಎಂದು ರವೀಂದ್ರನಾಥ್ ಹೇಳಿದರು.