SUDDIKSHANA KANNADA NEWS/ DAVANAGERE/ DATE:18-08-2024
ದಾವಣಗೆರೆ: ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ, ಬಿಜೆಪಿ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಕೇಳಿದ್ದರೂ ರಾಜ್ಯಪಾಲರು ನೀಡಿಲ್ಲ. ಆದ್ರೆ, ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಸಹಿಸದೇ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡಿರುವುದು ರಾಜಕೀಯ ಪ್ರೇರಿತ. ದಾವಣಗೆರೆ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ರಾಜಶೇಖರ್ ನಾಗಪ್ಪ ಅವರು ಈ ಬಗ್ಗೆ ಮಾತನಾಡಲಿ, ಆಮೇಲೆ ಕಾಂಗ್ರೆಸ್ ವಿರುದ್ಧ ಆರೋಪ ಮಾಡಲಿ ಎಂದು ಕಾಂಗ್ರೆಸ್ ಮುಖಂಡರು ಹಾಗೂ ಪಾಲಿಕೆ ಸದಸ್ಯ ಗಡಿಗುಡಾಳ್ ಮಂಜುನಾಥ್ ತಿರುಗೇಟು ನೀಡಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ ಕಳೆದ ಎಂಟು ತಿಂಗಳ ಹಿಂದೆಯೇ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರೂ ರಾಜ್ಯಪಾಲರು ನೀಡಿಲ್ಲ. ಸಿದ್ದರಾಮಯ್ಯ ಅವರ ವಿರುದ್ದ ಕೇವಲ ಒಂದು ವಾರದಲ್ಲಿಯೇ ನಿರ್ಧಾರ ಮಾಡಿದ್ದಾರೆ. ಇದನ್ನು ಗಮನಿಸಿದರೆ ಕೇಂದ್ರ ಸರ್ಕಾರದ ಕೈವಾಡ ಇರುವುದು ಸ್ಪಷ್ಟವಾಗುತ್ತದೆ. ಪ್ರತಿಯೊಂದು ಹಂತದಲ್ಲಿಯೂ ಕಾಂಗ್ರೆಸ್ ಸರ್ಕಾರದ ಪತನಕ್ಕೆ ಷಡ್ಯಂತ್ರ ರೂಪಿಸುತ್ತಿರುವ
ಜೆಡಿಎಸ್ – ಬಿಜೆಪಿ ನಾಯಕರು ಕೈಲಾಗದ ಕಾರಣ ಅಪಪ್ರಚಾರದಲ್ಲಿ ನಿರತರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಶಶಿಕಲಾ ಜೊಲ್ಲೆ, ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿ ದಾಖಲೆಗಳ ಸಮೇತ ರಾಜ್ಯಪಾಲರಿಗೆ ದೂರು ನೀಡಿದರೂ ಅವರ ವಿರುದ್ಧದ ತನಿಖೆಗೆ ಅನುಮತಿ ನೀಡಿಲ್ಲ. ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಕರಣದಲ್ಲಿ ತನಿಖೆ ನಡೆದು ಕುಮಾರಸ್ವಾಮಿ ತಪ್ಪಿತಸ್ಥ ಎಂದು ಉಲ್ಲೇಖವಾಗಿದ್ದರೂ , ತನಿಖೆಯ ದಾಖಲೆಗಳ ಸಮೇತ ರಾಜ್ಯಪಾಲರಿಗೆ ದೂರು ನೀಡಿದ್ದರೂ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿಲ್ಲ. ಹಾಗೆಯೇ ಮುರುಗೇಶ್ ನಿರಾಣಿ ಮತ್ತು ಜನಾರ್ಧನ ರೆಡ್ಡಿ ಅವರ ವಿರುದ್ಧ ತನಿಖೆ ನಡೆದು ತನಿಖೆಯಲ್ಲಿ ತಪ್ಪಿತಸ್ಥರು ಎಂದು ಸಾಬೀತಾಗಿ, ತನಿಖಾ ವರದಿ ಉಲ್ಲೇಖವಾಗಿದ್ದರೂ ಇದೇ ರಾಜ್ಯಪಾಲರು ಕ್ರಮಕ್ಕೆ ಅನುಮತಿ ನೀಡಿಲ್ಲ. ಈ ಬಗ್ಗೆ ಬಿಜೆಪಿ ನಾಯಕರು ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮೇಲೆ ಯಾವ ಆರೋಪ ಕೇಳಿ ಬಂದಿದೆ ಎಲ್ಲರಿಗೂ ಗೊತ್ತು. ಮೈತ್ರಿ ಧರ್ಮ ಪಾಲನೆಗೆ ಮುಂದಾಗಿದ್ದ ಬಿಜೆಪಿಯವರು ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಸಲಿಂಗಕಾಮದಡಿ ಬಂಧಿತರಾಗಿದ್ದ ಸೂರಜ್ ರೇವಣ್ಣ, ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಬಂಧನಕ್ಕೊಳಗಾಗಿದ್ದ ಹೆಚ್. ಡಿ. ರೇವಣ್ಣರ ವಿರುದ್ಧ ಮಾತನಾಡಲಿಲ್ಲ. ಬೀದಿಗಿಳಿದು ಹೋರಾಟ ಮಾಡಿಲ್ಲ. ಪ್ರಜ್ವಲ್ ರೇವಣ್ಣ ಹಾಗೂ ಸೂರಜ್ ರೇವಣ್ಣರ ಪ್ರಕರಣಗಳಲ್ಲಿ ತುಟಿ ಬಿಚ್ಚದ ಬಿಜೆಪಿ ನಾಯಕರು ಈಗ ಸಿದ್ದರಾಮಯ್ಯರ ವಿರುದ್ದ ಆರೋಪ ಮಾಡುತ್ತಿರುವುದನ್ನು ನೋಡಿದರೆ ಸರ್ಕಾರದ ಗ್ಯಾರಂಟಿಗಳ ಜನಪ್ರಿಯತೆ ಸಾಧ್ಯವಾಗುತ್ತಿಲ್ಲ ಎಂಬುದು ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.
ಮಹಿಳೆಯರ ಮಾನ ಹರಾಜು ಆದಾಗ, ಯುವಕರನ್ನೇ ಬಿಡದ ಎಂಎಲ್ ಸಿ ಬಗ್ಗೆ ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷರು ಮಾತನಾಡಲಿಲ್ಲ. ದಾವಣಗೆರೆಯಲ್ಲಿ ಅಭಿವೃದ್ಧಿ ಕಾರ್ಯಗಳು ಶುರುವಾಗಿದ್ದು, ಹತಾಶೆಯಿಂದ ಮಾತನಾಡುತ್ತಿದ್ದಾರೆ. ಬಿಜೆಪಿಯು ಒಡೆದ ಮನೆ ಎಂಬುದನ್ನು ಮಾಜಿ ಸಂಸದ ಡಾ. ಜಿ. ಎಂ. ಸಿದ್ದೇಶ್ವರ ಒಪ್ಪಿಕೊಂಡಿದ್ದಾರೆ. ಶಾಸಕ ಬಿ. ಪಿ. ಹರೀಶ್ ಅವರಂತೂ ರೇಣುಕಾಚಾರ್ಯ ಟೀಂ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಬಿಜೆಪಿಯಲ್ಲಿಯೇ ಎಲ್ಲವೂ ಸರಿ ಇಲ್ಲ. ತಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದರೂ ಬೇರೆಯವರ ತಟ್ಟೆ ನೋಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಗಡಿಗುಡಾಳ್ ಮಂಜುನಾಥ್ ಪ್ರಶ್ನಿಸಿದ್ದಾರೆ.