SUDDIKSHANA KANNADA NEWS/ DAVANAGERE/ DATE:17-10-2024
ಬೆಂಗಳೂರು: ಬಿಜೆಪಿಯವರ ಸುಳ್ಳುಗಳಿಗೆ ತಲೆ ಕೊಟ್ಟು ಮೋಸ ಹೋಗಬೇಡಿ. ಬಿಜೆಪಿ ಸುಳ್ಳುಗಳಿಗೆ ಸರಿಯಾದ ಉತ್ತರ ಕೊಡಿ. ಬಡ್ತಿಯಲ್ಲಿ ಮೀಸಲಾತಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿಯಿತು. ಅದನ್ನು ಮೊದಲಿಗೆ ಜಾರಿಗೆ ತಂದಿದ್ದು ನಮ್ಮ ಸರ್ಕಾರ. ಗುತ್ತಿಗೆಯಲ್ಲಿ ಮೀಸಲಾತಿ ಮೊದಲಿಗೆ ತಂದಿದ್ದು ನಮ್ಮ ಸರ್ಕಾರ. ಇದನ್ನು ನಾಡಿನ ಜನತೆ ಅರ್ಥ ಮಾಡಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಶ್ರೀ ವಾಲ್ಮೀಕಿ ಜಯಂತಿ ಪ್ರಯುಕ್ತ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬರೀ ಬಾಯಿ ಮಾತಲ್ಲಿ ಸಮಾನತೆ ಬರಲ್ಲ. ಆರ್ಥಿಕ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕು ಎಂದು ಬಿಜೆಪಿ ಬಂಡವಾಳವನ್ನು ಬಿಚ್ಚಿಟ್ಟರು.
ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಹೋಗದ ಹೊರತು ಸಮಾನತೆ ಬರುವುದಿಲ್ಲ ಎನ್ನುವ ಎಚ್ಚರಿಕೆಯನ್ನು ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ್ದಾರೆ. ನಮ್ಮ ಸರ್ಕಾರ ಎಲ್ಲಾ ಧರ್ಮ, ಎಲ್ಲಾ ಜಾತಿಯ ಬಡವರಿಗೆ ಆರ್ಥಿಕ ಶಕ್ತಿ ಕೊಡಲು ಗ್ಯಾರಂಟಿಗಳನ್ನು ಜಾರಿಗೆ ತಂದರೆ ಇದನ್ನು ವಿರೋಧಿಸಿದವರು ಬಿಜೆಪಿಯವರು. ಆದ್ದರಿಂದ ಗ್ಯಾರಂಟಿಗಳ ಫಲಾನುಭವಿಗಳು ಬಿಜೆಪಿಯವರಿಗೆ ಸರಿಯಾಗಿ ಪಾಠ ಹೇಳಿ ಎಂದು ಕರೆ ನೀಡಿದರು.
ನಾನು ಹೇಳಿದ್ದೀನಿ ಎನ್ನುವ ಕಾರಣಕ್ಕೆ ನೀವು ಇದನ್ನೆಲ್ಲಾ ನಂಬಬೇಡಿ. ಸತ್ಯ, ಸುಳ್ಳನ್ನು ಪರಾಮರ್ಷಿಸಿ, ವಿವೇಚಿಸಿ. ಸತ್ಯವನ್ನು ಧೈರ್ಯವಾಗಿ-ಬಹಿರಂಗವಾಗಿ ಮಾತಾಡುವ ಧೈರ್ಯವನ್ನು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳು ಬೆಳೆಸಿಕೊಳ್ಳಬೇಕು. ಇದೇ ಮಹರ್ಷಿ ವಾಲ್ಮೀಕಿ ಅವರಿಗೆ ನಾವು-ನೀವು ಸಲ್ಲಿಸುವ ಗೌರವ ಎಂದರು.
ರಾಜನಹಳ್ಳಿ ವಾಲ್ಮೀಕಿ ಸಮುದಾಯದ ಮಠದ ಜಗದ್ಗುರು ಪ್ರಸನ್ನಾನಂದಪುರಿ ಶ್ರೀಗಳ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಹೆಚ್.ಕೆ.ಪಾಟೀಲ್, ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವನಗೌಡ ದದ್ದಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, KKRDB ಅಧ್ಯಕ್ಷರಾದ ಅಜಯ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರುಗಳು ಸೇರಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.