SUDDIKSHANA KANNADA NEWS/ DAVANAGERE/ DATE:14-11-2023
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ಅಚಾತುರ್ಯವಾಗಿದೆ. ಬೆಸ್ಕಾಂ ಅಧಿಕಾರಿಗಳು ದಂಡ ವಿಧಿಸಿದರೆ ಪಾವತಿಸಲು ತಯಾರಿದ್ದೇನೆ. ಆದ್ರೆ, ನಾನು ಯಾರ ರಕ್ತ ಕುಡಿದಿಲ್ಲ, ಯಾರ ಭೂಮಿ ಬಲವಂತವಾಗಿ
ಪಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಗಿರುವುದು ಅಚಾತುರ್ಯ. ನನ್ನ ಗಮನಕ್ಕೆ ಬಂದಿಲ್ಲ. ನನ್ನ ಗಮನಕ್ಕೆ ಬಾರದೇ ಆಗಿರುವುದು. ಆದ್ರೆ, ಇದನ್ನೇ ದೊಡ್ಡದಾಗಿ ಬಿಂಬಿಸುತ್ತಿರುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಟ್ವಟ್ ನಲ್ಲೇನಿದೆ…?
ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ! ಎಂದು ವಿಡಿಯೋ ಸಮೇತ ಕೆಪಿಸಿಸಿ ಟ್ವೀಟ್ ಮಾಡಿದೆ. ಮಾತ್ರವಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ ಮಾಡಿದೆ.
H D Kumaraswamy ಅವರೇ, ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ! ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು “ಬರ” ಎದುರಿಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು? ಎಂದು ಕೆಪಿಸಿಸಿ ಪ್ರಶ್ನೆ ಮಾಡಿತ್ತು.