SUDDIKSHANA KANNADA NEWS/ DAVANAGERE/ DATE-17-06-2025
ಬೆಂಗಳೂರು: ಕಳೆದ ಏಪ್ರಿಲ್ ತಿಂಗಳಲ್ಲಿ ಪಹಲ್ಗಾಮ್‌ನಲ್ಲಿ ಪಾಕ್ ಉಗ್ರಗಾಮಿಗಳು ನಡೆಸಿದ್ದ ಹತ್ಯಾಕಾಂಡದಲ್ಲಿ 26 ಭಾರತೀಯರು ಪ್ರಾಣ ಕಳೆದುಕೊಂಡರು. ಈ ಘಟನೆಯ ಹೊಣೆ ಹೊತ್ತು ಪ್ರಧಾನಿ ರಾಜೀನಾಮೆ ನೀಡಬೇಕೆಂದು ನಮ್ಮ ಪಕ್ಷ ಒತ್ತಾಯಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಘಟನೆಯ ಚರ್ಚೆಗೆ ಕನಿಷ್ಠ ಸಂಸತ್ ನ ವಿಶೇಷ ಅಧಿವೇಶನ ಕರೆಯಬೇಕೆಂಬ ನಮ್ಮ ಪಕ್ಷದ ಬೇಡಿಕೆಯನ್ನೂ ಪ್ರಧಾನಿಯವರು ಒಪ್ಪಿಕೊಂಡಿಲ್ಲ. ದೇಶಕ್ಕೆಲ್ಲ ಸಿಂಧೂರ ಹಂಚಲು ಹೊರಟಿರುವ ಪ್ರಧಾನಿಯವರಿಗೆ ಇಲ್ಲಿಯ ವರೆಗೆ 26 ಅಮಾಯಕರ ಸಾವಿಗೆ ಕಾರಣರಾದ ನಾಲ್ಕು ಮಂದಿ ದುರುಳರು ಯಾರು ಎನ್ನುವುದನ್ನು ಪತ್ತೆ ಹಚ್ಚಲಾಗಿಲ್ಲ ಹೇಳಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇದು ಕೇಂದ್ರ ಸರ್ಕಾರದ ವೈಫಲ್ಯ ಅಲ್ಲವೇ? ಈ ವೈಫಲ್ಯದ ಹೊಣೆಯನ್ನು ಯಾರು ಹೊರಬೇಕು? ಪಂಡಿತ ಜವಾಹರಲಾಲ್ ನೆಹರೂ ಅವರಾ? ರಾಹುಲ್ ಗಾಂಧಿಯವರಾ? ಇಲ್ಲವೇ ಪ್ರಧಾನಿ ನರೇಂದ್ರ ಮೋದಿಯವರೇ? ಎಂದು ಪ್ರಶ್ನಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ದೇಶದ ಈಶಾನ್ಯ ಭಾಗದ ಮಣಿಪುರ ಹಿಂಸೆಯ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದೆ. ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಹೀಗಿದ್ದರೂ ಆ ರಾಜ್ಯದ ಬಿಜೆಪಿ ಮುಖ್ಯಮಂತ್ರಿ ಬಿರೇನ್ ಸಿಂಗ್ 20 ತಿಂಗಳ ಕಾಲ ಕುರ್ಚಿಗೆ ಅಂಟಿಕೂತಿದ್ದರು. ಕೊನೆಗೂ ಸುಪ್ರೀಂ ಕೋರ್ಟ್ ಚಾಟಿ ಬೀಸಿದ ನಂತರ ರಾಜೀನಾಮೆ ನೀಡಿದ್ದರು. ಈಗಲೂ ಅಲ್ಲಿ ಹಿಂಸಾಚಾರ ಮುಂದುವರಿದಿದೆ. ಇದರ ಹೊಣೆಯನ್ನು ಕೇಂದ್ರ ಗೃಹಸಚಿವರು ಹೊರುವುದು
ಬೇಡವೇ? ಎಂದು ಪ್ರಶ್ನಿಸಿದ್ದಾರೆ.
ಗುಜರಾತ್ ನ ಮೋರ್ಬಿ ಸೇತುವೆ ಕುಸಿದು ಬಿದ್ದು 140 ಮಂದಿ ಮೃತಪಟ್ಟಿದ್ದರು. ಈ ವರ್ಷದ ಜನವರಿ ತಿಂಗಳಲ್ಲಿ ಮಹಾಕುಂಭಮೇಳದದಲ್ಲಿ 30 ಯಾತ್ರಿಕರು ಪ್ರಾಣ ಕಳೆದುಕೊಂಡರು. ಆ ರಾಜ್ಯಗಳಲ್ಲಿ ಮುಖ್ಯಮಂತ್ರಿಯಾಗಿರುವವರು ಬಿಜೆಪಿಗೆ ಸೇರಿದವರಲ್ಲವೇ? ಇವರು ರಾಜೀನಾಮೆ ನೀಡುವುದು ಬಿಡಿ, ಆ ಘಟನೆಗಳ ಬಗ್ಗೆ ಇಲ್ಲಿಯ ವರೆಗೆ ಸರಿಯಾದ ತನಿಖೆಯನ್ನೇ ಅಲ್ಲಿನ ಸರ್ಕಾರ ನಡೆಸಿಲ್ಲ. ಹೀಗಿರುವಾಗ ನಮ್ಮ ರಾಜೀನಾಮೆ ಕೇಳಲು ರಾಜ್ಯದ ಬಿಜೆಪಿ ನಾಯಕರಿಗೆ ಯಾವ ನೈತಿಕತೆ ಇದೆ? ಎಂದು ಹೇಳಿದ್ದಾರೆ.
ನಮ್ಮ ಸರ್ಕಾರ ರಾಜ್ಯದ ಏಳು ಕೋಟಿ ಜನರಿಗೆ ಉತ್ತರದಾಯಿಯಾಗಿದೆ. ಈ ಕಾರಣಕ್ಕಾಗಿ ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಭ್ರಷ್ಟರಾಗಿದ್ದಾರೆಂದು ಮೇಲ್ನೋಟಕ್ಕೆ ಅನಿಸಿದವರ ವಿರುದ್ದ ಕ್ರಮಕೈಗೊಳ್ಳಲಾಗಿದೆ. ಉಳಿದಂತೆ ಇದರ ಬಗ್ಗೆ ಆಮೂಲಾಗ್ರವಾದ ಮತ್ತು ನಿಷ್ಪಕ್ಷಪಾತ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಲಾಗಿದೆ. ಆಯೋಗ ನೀಡುವ ವರದಿಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ದ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಎಂದು ತಿಳಿಸಿದ್ದಾರೆ.