SUDDIKSHANA KANNADA NEWS/ DAVANAGERE/ DATE:07-02-2024
ದಾವಣಗೆರೆ: ಮುಂಬರುವ ಲೋಕಸಭಾ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದೇನೆ. ಪಕ್ಷ ಟಿಕೆಟ್ ನೀಡಿದರೆ ಸ್ಪರ್ಧೆ ಮಾಡಲು ಸಿದ್ಧನಿದ್ದೇನೆ ಎಂದು ಎ. ಕೆ. ಫೌಂಡೇಶನ್ ಅಧ್ಯಕ್ಷರೂ ಆದ ಬಿಜೆಪಿ ಮುಖಂಡ ಕೆ. ಬಿ. ಕೊಟ್ರೇಶ್ ಅವರು ಹೇಳಿದ್ದಾರೆ.
ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ, ಸಮಾಜಮುಖಿ ಕಾರ್ಯಗಳ ಮೂಲಕ ಜನರಿಗೆ ಹತ್ತಿರವಾಗಿದ್ದೇನೆ. ಜಿಲ್ಲೆಯಾದ್ಯಂತ ಪ್ರವಾಸ ಮಾಡಿದ್ದೇನೆ. ಒಂದು ವೇಳೆ ಲೋಕಸಭಾ ಸದಸ್ಯ ಡಾ. ಜಿ. ಎಂ. ಸಿದ್ದೇಶ್ವರ ಅವರಿಗೆ ಟಿಕೆಟ್ ನೀಡಿದರೂ ಗೆಲುವಿಗೆ ಶ್ರಮಿಸುತ್ತೇನೆ. ಬೇರೆ ಯಾರಿಗೆ ಟಿಕೆಟ್ ನೀಡಿದರೂ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತೇನೆ. ನನಗೂ ಟಿಕೆಟ್ ನೀಡುವಂತೆ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಹಾಕಿಕೊಂಡಿದ್ದೇನೆ. ಭದ್ರಾ ಡ್ಯಾಂನಿಂದ ನೀರು ಬಿಡುಗಡೆ ವಿಚಾರದಲ್ಲಿ ತಾರತಮ್ಯ ಮಾಡಿದಾಗ ಹೋರಾಟದಲ್ಲಿ ಪಾಲ್ಗೊಂಡಿದ್ದೇನೆ. ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದೇನೆ. ಪ್ರತಿಭಟನೆ, ಕಾರ್ಯಕ್ರಮಗಳಲ್ಲಿಯೂ ಭಾಗಿಯಾಗುತ್ತಿದ್ದೇನೆ. ಆರ್ ಎಸ್ ಎಸ್ ಕಾರ್ಯಕ್ರಮಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ. ಈ ಬಾರಿ ಟಿಕೆಟ್ ಅನ್ನು ನನಗೆ ನೀಡಿದರೆ ಸ್ಪರ್ಧಿಸಲು ಸಿದ್ಧವಿರುವುದಾಗಿ ಹೇಳಿದ್ದಾರೆ.
ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಬೇಕು. ಹಾಗಾಗಿ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಿದ್ದೇನೆ. ದೇಶ ಎಲ್ಲಾ ರೀತಿಯಲ್ಲಿಯೂ ಅಭಿವೃದ್ಧಿಯಾಗುತ್ತಿದೆ. ವಿಶ್ವದಲ್ಲಿ ಭಾರತ ಶಕ್ತಿಶಾಲಿ ರಾಷ್ಟ್ರವಾಗಲು ಮೋದಿ ಅವರ ಆಡಳಿತ ಮತ್ತು ದಿಟ್ಟ ನಿರ್ಧಾರವೇ ಕಾರಣ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ಮೂಲಕ ದೇಶದ ಕೋಟ್ಯಂತರ ಜನರ ಆಸೆ ಈಡೇರಿಸಿದ್ದಾರೆ. ಈ ಬಾರಿ ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಎನ್ ಡಿ ಎ ಮೈತ್ರಿಕೂಟಕ್ಕೆ ದೇಶದ ಜನರು ಭರ್ಜರಿ ಜಯ ಪಾಲಿಸುತ್ತಾರೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಯು ಮೊದಲಿನಿಂದಲೂ ಬಿಜೆಪಿ ಭದ್ರಕೋಟೆ. ಜಿಲ್ಲೆಯಾದಾಗಿನಿಂದಲೂ ಬಿಜೆಪಿ ಸೋಲು ಕಂಡಿಲ್ಲ. ಬಿಜೆಪಿ ಮತ್ತೊಮ್ಮೆ ಗೆಲ್ಲುವುದರಲ್ಲಿ ಸಂಶಯವಿಲ್ಲ. ಪಕ್ಷದ ಕಾರ್ಯಕರ್ತರು, ಮುಖಂಡರು, ಮಾಜಿ ಶಾಸಕರು, ಹಾಲಿ ಶಾಸಕರು ಸೇರಿದಂತೆ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಪಕ್ಷಕ್ಕಾಗಿ ದುಡಿಯೋಣ. ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿಯಾಗಿಸೋಣ ಎಂದು ಕೊಟ್ರೇಶ್ ಕರೆ ನೀಡಿದ್ದಾರೆ.