SUDDIKSHANA KANNADA NEWS/ DAVANAGERE/ DATE:26-11-2024
ಶಿವಮೊಗ್ಗ: ಸ್ಥಳೀಯ ಸಂಸ್ಥೆಗಳಿಗೆ ನಿಯಮಾನುಸಾರವಾಗಿ ಸಾರ್ವಜನಿಕರಿಂದ ಪಾವತಿಯಾಗಬೇಕಾದ ಕರವಸೂಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರಪಾಲಿಕೆಯ ಮಾದರಿಯಲ್ಲಿ ಎಲ್ಲಾ ಆಸ್ತಿಗಳನ್ನು ಎ ಮತ್ತು ಬಿ ಖಾತಾಗಳನ್ನಾಗಿ ವಿಂಗಡಿಸಿ, ರಾಜ್ಯದಾದ್ಯಂತ ಏಕರೀತಿಯ ಕರವಸೂಲಾತಿಗೆ ಹೊಸ ಕಾಯ್ದೆಯೊಂದನ್ನು ಮುಂದಿನ ಒಂದು ತಿಂಗಳೊಳಗಾಗಿ ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂಖಾನ್ ಅವರು ಹೇಳಿದರು.
ಅವರು ಇಂದು ಶಿವಮೊಗ್ಗ ಮಹಾನಗರಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಸಿಬ್ಬಂಧಿಗಳ ಉಪಸ್ಥಿತಿಯಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಜ್ಯದ ಬಹುತೇಕ ಎಲ್ಲಾ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಇತ್ತೀಚಿನ ಕೆಲವು ದಶಕಗಳಿಂದೀಚೆಗೆ ನಿರ್ಮಾಣಗೊಂಡಿರುವ ಬಡಾವಣೆಗಳಲ್ಲಿ ಅಧಿಕೃತವಾಗಿ ಹಾಗೂ ಇನ್ನೂ ಕೆಲವು ಪರವಾನಿಗೆ ಪಡೆಯದೇ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಎಲ್ಲಾ ಕಟ್ಟಡಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದ್ದು, ಅದಕ್ಕೆ ಪೂರಕವಾಗಿ ಸ್ಥಳೀಯ ಸಂಸ್ಥೆಗಳಿಗೆ ಸಂದಾಯವಾಗಬೇಕಾದ ಭಾರೀ ಪ್ರಮಾಣದ ಕರ ವಸೂಲಾಗದೇ ಬಾಕಿ ಉಳಿಯುತ್ತಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿರುವುದಾಗಿ ಅವರು ನುಡಿದರು.
ಜಿಲ್ಲೆಯ ಮಹಾನಗರಪಾಲಿಕೆಯಲ್ಲಿ ಕೊರತೆಯಿರುವ ಹುದ್ದೆಗಳಲ್ಲಿ ಕೆಲವು ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡಲು ಉದ್ದೇಶಿಸಲಾಗಿದೆ. ಅಲ್ಲದೇ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ನೇರಪಾವತಿಯಡಿ ಕಾರ್ಯನಿರ್ವಹಿಸುತ್ತಿರುವ 38ಪೌರಕಾರ್ಮಿಕರ ನೇರನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸುವಂತೆ ಅವರು ಸಂಬಂಧಿಸಿದ ಮುಖ್ಯಾಧಿಕಾರಿಗಳಿಗೆ ಸೂಚಿಸಿದ ಅವರು, ಕರವಸೂಲಾತಿಗೆ ಸಂಬಂಧಿಸಿದಂತೆ ಸಿಬ್ಬಂಧಿಗಳ ಕೊರತೆ ಇರುವ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸ್ವಯ ಸಹಾಯ ಗುಂಪುಗಳ ಪ್ರತಿನಿಧಿಗಳ ನೆರವನ್ನು ಪಡೆದುಕೊಳ್ಳುವಂತೆ ಅವರು ಸಲಹೆ ನೀಡಿದರು.
ನಗರ ಮತ್ತು ಪಟ್ಟಣ ಪ್ರದೇಶಗಳ ವ್ಯಾಪ್ತಿಯ ಆಯಕಟ್ಟಿನ ಸ್ಥಳಗಳಲ್ಲಿ ಸ್ಥಳೀಯ ಸಂಸ್ಥೆಗೆ ಸಂಬಂಧಿಸಿದ ವಿಶಾಲವಾದ ಸ್ವತ್ತುಗಳಿದ್ದು, ವಾಣಿಜ್ಯ ಸಂಕೀರ್ಣ ನಿರ್ಮಿಸಿ, ನಿರ್ವಹಿಸಲು ಉತ್ಸುಕರಿದ್ದು, ಕ್ರಿಯಾಯೋಜನೆ ತಯಾರಿಸಿ, ಪ್ರಸ್ತಾವನೆ ಸಲ್ಲಿಸಿದಲ್ಲಿ ಸರ್ಕಾರದಿಂದ ಅಗತ್ಯ ಹಣಕಾಸಿನ ನೆರವನ್ನು ಒದಗಿಸಲಾಗುವುದು ಎಂದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ 180ಇಂದಿರಾ ಕ್ಯಾಂಟೀನ್‌ಗಳನ್ನು ಮಂಜೂರು ಮಾಡಿ, ಜನಸಾಮಾನ್ಯರ ಹಸಿವು ಇಂಗಿಸುವ ಕಾರ್ಯ ಮಾಡಿದ್ದರು. ಪ್ರಸ್ತುತ ಸಂದರ್ಭದಲ್ಲಿಯೂ ಪುನಃ 180ಇಂದಿರಾ ಕ್ಯಾಂಟೀನುಗಳನ್ನು ಮಂಜೂರು ಮಾಡಿದ್ದು, ಶೀಘ್ರದಲ್ಲಿ ಕಾರ್ಯಾರಂಭಗೊಳ್ಳಲಿವೆ ಎಂದ ಅವರು, ಕೆಲವು ಕ್ಯಾಂಟೀನುಗಳಲ್ಲಿ ನಿರ್ವಹಣೆ ಸರಿಯಾಗಿ ಆಗದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳಿವೆ. ಇದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಅಲ್ಲದೇ ಮುಖ್ಯಮಂತ್ರಿಗಳ ಕನಸಿನ ಯೋಜನೆಯ ಅನುಷ್ಠಾನದಲ್ಲಿ ವ್ಯತ್ಯಯಗಳು ಕಂಡುಬಂದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು ಎಂದರು.
ಆಹಾರ ವಿತರಣೆಯಲ್ಲಿಯೂ ತಪ್ಪು ದಾಖಲಾತಿಗಳ ನಿರ್ವಹಣೆ ಮಾಡುತ್ತಿರುವ ಬಗ್ಗೆ ದೂರುಗಳಿವೆ. ಇಲ್ಲಿಯೂ ದೂರುಗಳ ಕೇಳಿ ಬಂದಲ್ಲಿ ಕ್ಯಾಂಟೀನ್ ನಿರ್ವಹಣಾ ಗುತ್ತಿಗೆ ಸಂಸ್ಥೆಗಳಿಗೆ ನೀಡಿರುವ ಪರವಾನಿಗೆಯನ್ನು ಹಿಂಪಡೆಯಲಾಗುವುದಲ್ಲದೇ ಸಂಬAಧಿಸಿದ ಇಲಾಖಾ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನವನ್ನು ಉದ್ಧೇಶಿತ ಯೋಜನೆಗಳಿಗೆ ಬಳಸಿಕೊಂಡು ಗುಣಮಟ್ಟದ ಕಾಮಗಾರಿಗಳನ್ನು ನಿಗಧಿತ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಬೇಕು. ತಪ್ಪಿದಲ್ಲಿ ಅನುದಾನ ಸರ್ಕಾರಕ್ಕೆ ಹಿಂದಿರುಗಿ ಹೋಗುವ ಸಾಧ್ಯತೆ ಇದೆ ಎಂದವರು ನುಡಿದರು.
ಘನತ್ಯಾಜ್ಯ ವಸ್ತುಗಳ ನಿರ್ವಹಣೆ ಹಾಗೂ ಘಟಕಗಳ ನಿರ್ಮಾಣಕ್ಕೆ ಬಿಡುಗಡೆಯಾಗಿರುವ ಅನುದಾನವನ್ನು ಸಕಾಲದಲ್ಲಿ ಬಳಸುವಂತೆ ಕಳೆದ ಆರು ತಿಂಗಳ ಹಿಂದೆಯೇ ಸೂಚನೆ ನೀಡಲಾಗಿದೆ. ಆದಾಗ್ಯೂ ಅನುದಾನ ಬಳಸದೇ ಬಾಕಿ ಉಳಿಸಿಕೊಂಡಿರುವುದು ಸರಿಯಲ್ಲ. ಕೂಡಲೇ ಹಣ ಬಳಕೆ ಮಾಡಿ ವರದಿ ನೀಡುವಂತೆ ಸಚಿವರು ಸೂಚಿಸಿದರು.
ನಗರ ಮತ್ತು ಪಟ್ಟಣ ಪ್ರದೇಶದಲ್ಲಿನ ಎಲ್ಲಾ ಶಾಲೆಗಳಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು ಅವರು ಮಾತನಾಡಿ, ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಲ್ಲಿ ನದಿಗೆ ಕಲುಷಿತ ನೀರು ಸೇರುತ್ತಿದೆ. ಅದರ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಅಲ್ಲದೇ ನಗರವಾಸಿಗಳಿಗೆ ಸರಬರಾಜು ಮಾಡಲಾಗುತ್ತಿರುವ ನೀರನ್ನು ಶುದ್ಧೀಕರಿಸಿ ಪೂರೈಸಲು ಕ್ರಮ ವಹಿಸುವಂತೆ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ರಾಜ್ಯ ಪೌರಾಡಳಿತ ನಿರ್ದೇಶನಾಲಯದ ವ್ಯವಸ್ಥಾಪಕ ಪ್ರುಭುಲಿಂಗ ಕವಳೀಕಟ್ಟಿ, ಬೋವಿ ನಿಗಮದ ರಾಜ್ಯಾಧ್ಯಕ್ಷ ರವಿಕುಮಾರ್, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಚಂದ್ರಭೂಪಾಲ್, ಮಹಾನಗರಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್ ಸೇರಿದಂತೆ ಜಿಲ್ಲೆಯ ಎಲ್ಲಾ ಸ್ಥಳೀಯ
ಸಂಸ್ಥೆಗಳ ಮುಖ್ಯಾಧಿಕಾರಿಗಳು, ಅಧ್ಯಕ್ಷರು ಉಪಸ್ಥಿತರಿದ್ದರು.