SUDDIKSHANA KANNADA NEWS/ DAVANAGERE/ DATE:09-03-2024
ಶಿವಮೊಗ್ಗ: ಲೋಕಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಸಂಬಂಧ ಮಾರ್ಚ್ 10ರಂದು ನವದೆಹಲಿಯಲ್ಲಿ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಟಿಕೆಟ್ ಯಾರಿಗೆ ನೀಡಬೇಕು ಎಂಬ ಕುರಿತಂತೆ ಚರ್ಚೆಯಾಗಲಿದ್ದು, ಇನ್ನೆರಡು ದಿನಗಳಲ್ಲಿ ಟಿಕೆಟ್ ಘೋಷಣೆಯಾಗಲಿದೆ ಎಂದು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡುತ್ತಾ ಅವರು ಈ ವಿಷಯ ತಿಳಿಸಿದ್ದಾರೆ. ಯಾರಿಗೆ ಟಿಕೆಟ್ ನೀಡಬೇಕು ಅಥವಾ ನೀಡಬಾರದು. ಹೊಸ ಮುಖಗಳಿಗೆ ಆದ್ಯತೆ ನೀಡಬೇಕಾ ಎಂಬ ಕುರಿತಂತೆ ಬಿಜೆಪಿ ಕೇಂದ್ರೀಯ ವರಿಷ್ಠರು ನಿರ್ಧರಿಸಲಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ 25 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಜಯಭೇರಿ ಬಾರಿಸಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಚರ್ಚೆಯಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನಾಳೆ ನವದೆಹಲಿಯಲ್ಲಿ ಮಹತ್ವದ ಸಭೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೇ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆ ಬಳಿಕ ಪಟ್ಟಿ ಪ್ರಕಟಗೊಳ್ಳಲಿದೆ. ಬಿಜೆಪಿ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುವ ವಿಚಾರಕ್ಕೆ
ಸಂಬಂಧಿಸಿದಂತೆ ನಾನು ಏನೂ ಹೇಳಲ್ಲ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಡಾ ಅವರು ನಿರ್ಧರಿಸಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.