ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಹತ್ತು ಜಿಲ್ಲೆಗಳಲ್ಲಿ ಮಹಿಳೆಯರಿಂದ ಪ್ರಾಯೋಗಿಕವಾಗಿ ಇಂದಿರಾ ಕ್ಯಾಂಟೀನ್ ನಿರ್ವಹಣೆ: ಕಾರ್ಮಿಕರಿಗೆ ನೀಡಿದ ಕೊಡುಗೆಗಳೇನು…?

On: March 7, 2025 2:24 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:07-03-2025

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆಯನ್ನು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸ್ವ-ಸಹಾಯ ಸಂಘಗಳ ಮಹಿಳೆಯರ ಮೂಲಕ ನಿರ್ವಹಿಸುವ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ 10 ನಗರ ಪ್ರದೇಶಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ 06ನೇ ತರಗತಿಯಿಂದ 12ನೇ ತರಗತಿವರೆಗಿನ ವಸತಿ ಶಾಲೆಗಳನ್ನು ನಿರ್ಮಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮುಖಾಂತರ ನಿರ್ವಹಿಸಲಾಗುವುದು. ಇದಕ್ಕೆ ಒಟ್ಟಾರೆ 750 ಕೋಟಿ ರೂ. ವೆಚ್ಚ ಮಾಡಲಾಗುವುದು.

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರಿಗೆ ಮತ್ತು ಅವರ ಅವಲಂಬಿತರಿಗೆ ನೀಡುತ್ತಿರುವ ಶೈಕ್ಷಣಿಕ, ವೈದ್ಯಕೀಯ ಮತ್ತು ಇತರೆ ಸೌಲಭ್ಯಗಳನ್ನು ವಿಸ್ತರಿಸಲಾಗುವುದು. ಇದಕ್ಕಾಗಿ ಸರ್ಕಾರದ ವತಿಯಿಂದ ನೀಡುತ್ತಿರುವ ಧನಸಹಾಯವನ್ನು ದ್ವಿಗುಣಗೊಳಿಸಲಾಗಿದೆ.

ನೋಂದಾಯಿತ ಕಟ್ಟಡ ಕಾರ್ಮಿಕರು ಸಹಜ ಮರಣ ಹೊಂದಿದಲ್ಲಿ, Ex-gratia ಮೊತ್ತವನ್ನು 75,000 ರೂ.ನಿಂದ 1.5 ಲಕ್ಷ ರೂ.ಗೆ ಮತ್ತು ಕೆಲಸದ ಸ್ಥಳದಲ್ಲಿ ಮರಣ ಹೊಂದುವ ಕಾರ್ಮಿಕರ ಅವಲಂಬಿತರಿಗೆ ಪರಿಹಾರದ
ಮೊತ್ತವನ್ನು 5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಹೆಚ್ಚಿಸಲಾಗುವುದು.

ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿತ ಮಂಡಳಿಯ ಫಲಾನುಭವಿಗಳು 5 ಲಕ್ಷ ರೂ. ಚಿಕಿತ್ಸೆ ಮಿತಿಯನ್ನು ಪೂರ್ಣಗೊಳಿಸಿದ್ದಲ್ಲಿ ಮಂಡಳಿಯಿಂದ ಹೆಚ್ಚುವರಿಯಾಗಿ ಹೃದ್ರೋಗ ಮತ್ತು ಕ್ಯಾನ್ಸರ್‌ ಖಾಯಿಲೆಗಳಿಗೆ 5 ಲಕ್ಷ ರೂ.ವರೆಗೆ ಮತ್ತು ಇತರೆ ಖಾಯಿಲೆಗಳಿಗೆ 2 ಲಕ್ಷ ರೂ.ವರೆಗೆ ವೈದ್ಯಕೀಯ ವೆಚ್ಚವನ್ನು ಮರುಪಾವತಿ ಮಾಡಲಾಗುವುದು.

ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲು ಪೂರಕವಾಗಿ ರಾಜ್ಯ ವಿಮಾ ಆಸ್ಪತ್ರೆಗಳಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಲು 51 ಕೋಟಿ ರೂ. ಅನುದಾನ ನಿಗದಿಪಡಿಸಲಾಗುವುದು. ಇದರಡಿ ಆಸ್ಪತ್ರೆಗಳ ಶುಚಿತ್ವ,
ಪರಿಕರಗಳ ಖರೀದಿ, ತುರ್ತು ವಿಭಾಗಗಳ ನವೀಕರಣ, ಪ್ರಯೋಗಾಲಯಗಳ ಉನ್ನತೀಕರಣ ಮುಂತಾದ ಕ್ರಮಗಳನ್ನು ಕೈಗೊಳ್ಳಲಾಗುವುದು.

ನಿರುದ್ಯೋಗಿಗಳಾಗಿರುವ ಪದವೀಧರರಿಗೆ ಹಾಗೂ ಡಿಪ್ಲೋಮ ಪಡೆದವರಿಗೆ ನಿರುದ್ಯೋಗ ಭತ್ಯೆಯನ್ನು ನೀಡಲು ನಮ್ಮ ಸರ್ಕಾರವು ʻಯುವನಿಧಿʼ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈಗಾಗಲೇ ಸುಮಾರು 2.58 ಲಕ್ಷ ಯುವಕರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, 286 ಕೋಟಿ ರೂ. ನೇರ ನಗದು ವರ್ಗಾವಣೆ ಮಾಡಲಾಗಿದೆ.

ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ Industry Linkage Cell ಅಡಿ ಭವಿಷ್ಯ ಕೌಶಲ್ಯ ತರಬೇತಿ ನೀಡಲಾಗುವುದು.

ನಮ್ಮ ಸರ್ಕಾರದ ಹಿಂದಿನ ಆಡಳಿತಾವಧಿಯಲ್ಲಿ, ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯನ್ನು (CMKKY) ಪ್ರಾರಂಭಿಸಲಾಗಿತ್ತು. ಪ್ರಸ್ತುತ, ರಾಜ್ಯದ ಯುವಕರ ಉದ್ಯೋಗಾರ್ಹತೆ ಮತ್ತು ಉದ್ಯಮಶೀಲತೆಯನ್ನು ಇನ್ನಷ್ಟು ಉತ್ತೇಜಿಸಲು ಯೋಜನೆಯ ಮಾರ್ಗಸೂಚಿಗಳನ್ನು ಪರಿಷ್ಕರಿಸಿ CMKKY 2.0 ಅನ್ನು ಜಾರಿಗೊಳಿಸಲಾಗುವುದು.

ರಾಜ್ಯದ ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಜರ್ಮನ್‌, ಇಟಾಲಿಯನ್‌, ಸ್ಪ್ಯಾನಿಷ್‌ ಮತ್ತು ಇತರೆ ವಿದೇಶೀ ಭಾಷಾ ಕೌಶಲ್ಯ ತರಬೇತಿ ನೀಡಲಾಗುವುದು. ವಿದೇಶದಲ್ಲಿ ಉದ್ಯೋಗಾವಕಾಶ ಕಲ್ಪಿಸಲು ಅಂತಾರಾಷ್ಟ್ರೀಯ ವಲಸೆ ಕೇಂದ್ರದ ಮೂಲಕ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು.

ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸೂಕ್ತ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಲು ಮಾರ್ಗದರ್ಶನವನ್ನು ಒದಗಿಸಲು ʻನನ್ನ ವೃತ್ತಿ, ನನ್ನ ಆಯ್ಕೆʼ ಕಾರ್ಯಕ್ರಮದಡಿ ಸರ್ಕಾರಿ ಶಾಲಾ/ಕಾಲೇಜುಗಳಲ್ಲಿನ 2.30 ಲಕ್ಷ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡಲಾಗುವುದು.

ವಿಶ್ವ ಕೌಶಲ್ಯ ಸ್ಪರ್ಧೆಯ ಪೂರ್ವಸಿದ್ಧತೆಗಾಗಿ ಆಯೋಜಿಸಲಾಗುವ ರಾಷ್ಟ್ರೀಯ ಮಟ್ಟದ India Skills- 2026 ಸ್ಪರ್ಧೆಯನ್ನು ಬೆಂಗಳೂರಿನಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುತ್ತದೆ.

ಅಳಿವಿನಂಚಿನಲ್ಲಿರುವ ಪಾರಂಪರಿಕ ಮತ್ತು ಪ್ರಾದೇಶಿಕ ಕೌಶಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸಲು 2,000 ಅಭ್ಯರ್ಥಿಗಳಿಗೆ ಅಗತ್ಯವಿರುವ ಟೂಲ್‌ಕಿಟ್‌ಗಳೊಂದಿಗೆ ಅಲ್ಪಾವಧಿ ತರಬೇತಿಯನ್ನು ನೀಡಲಾಗುವುದು. ಲಂಬಾಣಿ
ಜನಾಂಗದ ಕಸೂತಿ ಕಲೆಯ ಬಗ್ಗೆ ತರಬೇತಿಯನ್ನು 1,000 ಅಭ್ಯರ್ಥಿಗಳಿಗೆ ದಾವಣಗೆರೆ ಮತ್ತು ಬೀದರ್‌ ಜಿಲ್ಲೆಗಳಲ್ಲಿನ ಕೌಶಲ್ಯ ತರಬೇತಿ ಕೇಂದ್ರಗಳಲ್ಲಿ ನೀಡಲಾಗುವುದು.

ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಜೀವನೋಪಾಯ ಚಟುವಟಿಕೆ ಕೈಗೊಳ್ಳಲು ತ್ವರಿತ ಸಾಲ ಸೌಲಭ್ಯ ಒದಗಿಸಿ, ಆರ್ಥಿಕ ಅಗತ್ಯತೆಗಳ ಪೂರೈಕೆ ಮತ್ತು ಭದ್ರತೆ ಒದಗಿಸಿ, ಉಳಿತಾಯ
ಮತ್ತು ಉದ್ಯಮಶೀಲತೆ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಮಟ್ಟದಲ್ಲಿ ʻಅಕ್ಕ ಕೋ-ಆಪರೇಟಿವ್ ಸೊಸೈಟಿʼ ಸ್ಥಾಪಿಸಲಾಗುವುದು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment