SUDDIKSHANA KANNADA NEWS/ DAVANAGERE/ DATE:15-11-2024
ದಾವಣಗೆರೆ: ನಾನೇ ಒಳಮೀಸಲಾತಿ ಜಾರಿಗೊಳಿಸುವುದು ಹಾಗೂ ಯಾವುದೇ ಟೀಕೆ ಬಂದರೂ ಜಾತಿಗಣತಿ ವರದಿ ಜಾರಿ ಸಿದ್ಧವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದು, ಆದಷ್ಟು ಬೇಗ ವರದಿ ಜಾರಿಗೊಳಿಸಬೇಕು. ಒಳಮೀಸಲಾತಿ ಜಾರಿಗೆ ನ್ಯಾ. ನಾಗಮೋಹನ್ ದಾಸ್ ಅವರನ್ನು ನೇಮಕ ಮಾಡಿರುವುದು ಅತ್ಯಂತ ಗಟ್ಟಿ ನಿರ್ಧಾರ ಎಂದು ಮಾಜಿ ಸಚಿವ ಹೆಚ್. ಆಂಜನೇಯ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2011ರಲ್ಲಿ ಕೇಂದ್ರ ಸರ್ಕಾರ ನಡೆಸಿದ ಜನಗಣತಿ ಅಂಕಿ ಅಂಶ ಹಾಗೂ ಎಲ್.ಜಿ.ಹಾವನೂರು, ನ್ಯಾ.ಸದಾಶಿವ, ಕಾಂತರಾಜ್ ಆಯೋಗದ ವರದಿಗಳನ್ನು ಅಧ್ಯಯನ ನಡೆಸಿದರೆ ದತ್ತಾಂಶ ಮಾಹಿತಿ ದೊರೆಯಲಿದೆ. ಜತೆಗೆ ಒಳಮೀಸಲಾತಿ ಜಾರಿಗೆ ಇರುವ ಸಣ್ಣಪುಟ್ಟ ಅಡ್ಡಿಗಳನ್ನು ತಕ್ಷಣ ನಿವಾರಿಸಬಹುದು ಎಂದರು. ಅದರಲ್ಲೂ ಬ್ರಿಟಿಷರ ಕಾಲದಲ್ಲಿ ಆಗಿದ್ದ ಹಾಗೂ 100 ವರ್ಷದ ನಂತರ ಸ್ವತಂತ್ರ ಭಾರತದಲ್ಲಿಯೇ ಮೊದಲ ಬಾರಿಗೆ ಸಿದ್ದರಾಮಯ್ಯ ಸರ್ಕಾರ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವ ನಿರ್ಧಾರ ಅಂದು ಸಾಮಾಜ ಕಲ್ಯಾಣ ಸಚಿವನಾಗಿದ್ದ ಸಂದರ್ಭ ನಾನು ಹೆಚ್ಚು ಕಾಳಜಿಯಿಂದ ವರದಿ ತಯಾರಿಸಲಾಗಿತ್ತು. ಇದು ದೇಶದಲ್ಲಿಯೇ ಐತಿಹಾಸಿಕ ನಿರ್ಧಾರವಾಗಿದೆ ಎಂದು ಹೇಳಿದರು.
ಅಸ್ಪೃಶ್ಯತೆ ನೋವು, ಸೌಲಭ್ಯಗಳ ಮರಿಚೀಕೆ, ಕೈಗೆಟುಕದ ಮೀಸಲಾತಿ ಹೀಗೆ ಅನೇಕ ಸಮಸ್ಯೆಗಳ ಸುಳಿಗೆ ಸಿಲುಕಿದ್ದ ಮಾದಿಗ ಮತ್ತು ಸಹೋದರ ಜಾತಿಗಳಿಗೆ ಒಳಮೀಸಲಾತಿ ವರವಾಗಿ ಪರಿಣಮಿಸಲಿದೆ ಎಂದು ಹೇಳಿದರು.
ಮೂರು ದಶಕಗಳ ಹೋರಾಟದ ಫಲ ಹಾಗೂ ಎಲ್ಲ ಪಕ್ಷಗಳ ಸರ್ಕಾರಗಳ ಸಹಕಾರ-ಬದ್ಧತೆ ಕಾರಣಕ್ಕೆ ಪರಿಶಿಷ್ಟ ಜಾತಿ ಗುಂಪಿನಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಸಂದರ್ಭ ಎದುರಾಗಿದೆ. ಅದರಲ್ಲೂ ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಎಂಬ ಸುಪ್ರೀಂ ಕೋರ್ಟ್ ತೀರ್ಪು ಮಾದಿಗ ಸಮುದಾಯದ ಸಮಗ್ರ ಪ್ರಗತಿಗೆ ರಹದಾರಿ ಆಗಿದೆ ಎಂದರು.
ಈಗ ಕೋರ್ಟ್ ತೀರ್ಪು ಬಳಿಕ ರಾಜ್ಯ ಸರ್ಕಾರದ ಅಂಗಳಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸುವ ಅಧಿಕಾರದ ಚೆಂಡು ಬಂದಿದೆ. ಅದರಲ್ಲೂ ಅಹಿಂದ ನಾಯಕ, ಸಾಮಾಜಿಕ ನ್ಯಾಯದ ಹರಿಕಾರವೆಂಬ ಹೆಗ್ಗಳಿಕೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಷಯದಲ್ಲಿ ದಿಟ್ಟ ನಿರ್ಧಾರ ಕೈಗೊಂಡು ಒಳಮೀಸಲಾತಿ ಜಾರಿಗೊಳಿಸಿ, ದಲಿತರ ಕಣ್ಮಣಿ ಆಗುವ ಅವಕಾಶ ನೀಡಿದೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಈ ವಿಷಯದಲ್ಲಿ ಯಾರ ಒತ್ತಡಕ್ಕೂ ಮಣಿಯದೆ ಒಳಮೀಸಲಾತಿ ಜಾರಿಗೊಳಿಸುವ ನಿರ್ಣಯ ಕೈಗೊಂಡಿದ್ದು, ಅದರ ಮೊದಲ ಹೆಜ್ಜೆಯಾಗಿ ದತ್ತಾಂಶ ಸಂಗ್ರಹಕ್ಕೆ ಆಯೋಗ ರಚಿಸಿ, ಅಧ್ಯಕ್ಷರನ್ನಾಗಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರನ್ನು ನೇಮಕ ಮಾಡಿರುವುದು ಪರಿಶಿಷ್ಟ ಸಮುದಾಯದಲ್ಲಿ ಆಶಾಕಿರಣ ಮೂಡಿಸಿದೆ ಎಂದು ಹೇಳಿದರು.
ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಹೋರಾಟದ ಪರಿಣಾಮ ಈ ಹಿಂದೆ ರಚನೆಗೊಂಡಿದ್ದ ನಾಗಮೋಹನ್ ದಾಸ್ ನೇತೃತ್ವದ ಆಯೋಗ ಎಸ್ಸಿಗೆ 15ರಿಂದ 17, ಎಸ್ಟಿಗೆ 3ರಿಂದ ಶೇ.7 ಒಟ್ಟು 18ರಿಂದ ಶೇ.24ಕ್ಕೆ ಎಸ್ಸಿ-ಎಸ್ಟಿ ಮೀಸಲಾತಿ ಪ್ರಮಾಣ ಏರಿಕೆಗೊಂಡಿತು. ಆದ್ದರಿಂದ ಸಾಮಾಜಿಕ, ಜಾತಿ ವ್ಯವಸ್ಥೆ, ಹಿಂದುಳಿದ ವರ್ಗದ ಜನರ ಕುರಿತು ಹೆಚ್ಚು ಕಾಳಜಿ ಹೊಂದಿರುವ ನಾಗಮೋಹನ್ ದಾಸ್ ನೇಮಕ ಅತ್ಯಂತ ಉತ್ತಮ ನಿರ್ಧಾರವಾಗಿದೆ ಎಂದರು.
ರಾಜ್ಯದ ಎಲ್ಲೆಡೆಯೂ ಮಾದಿಗ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದು, ಕೆಲವು ಜಿಲ್ಲೆಗಳಲ್ಲಿ ಮಾದಿಗ ಹಾಗೂ ಛಲವಾದಿ ಸಮುದಾಯದವರು ಆದಿಕರ್ನಾಟಕ ಎಂದು ಗುರುತಿಸಿಕೊಂಡಿದ್ದು, ಗೊಂದಲ ಉಂಟು ಮಾಡಿದೆ. ಆದ್ದರಿಂದ ನಾಗಮೋಹನ್ ದಾಸ್ ಅವರು ಈ ವಿಷಯದಲ್ಲಿ ಆಳವಾದ ಅಧ್ಯಯನ ನಡೆಸಿ, ಮಾದಿಗ ಮತ್ತು ಅದರ ಉಪ ಜಾತಿಗಳನ್ನು ಗುರುತಿಸುವ ಕೆಲಸ ಮಾಡುವ ಮೂಲಕ ನೊಂದ ಜನರಿಗೆ ನ್ಯಾಯ ಒದಗಿಸುವ ವಿಶ್ವಾಸ ಇದೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಶಾಸಕ ಕೆ. ಎಸ್. ಬಸವಂತಪ್ಪ, ಕಾಂಗ್ರೆಸ್ ಮುಖಂಡ ಕಣ್ಣಳ ಆಂಜಿನಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಮತ್ತಿತರರು ಹಾಜರಿದ್ದರು.