ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರಕ್ಕೆ ಸ್ಥಳ ಮತ್ತು ಅವರ ಹೆಸರಿನಲ್ಲಿ ಸ್ಮಾರಕದ ಬಗ್ಗೆ ರಾಜಕೀಯ ಗೊಂದಲ ಉಂಟಾಗಿದೆ. ಕೇಂದ್ರ ಸರ್ಕಾರ ಮಾಜಿ ಪ್ರಧಾನಿ ಅವರ ಸ್ಮರಣೆಗೆ ಅವಮಾನ ಮಾಡಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ತಿರುಗೇಟು ನೀಡಿದ್ದು, ಮಾಜಿ ಪ್ರಧಾನಿ ಅವರ ನಿಧನದ ನಂತರವೂ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜಕೀಯ ಮಾಡುವುದನ್ನು ಬಿಡುತ್ತಿಲ್ಲ ಎಂದು ಹೇಳಿದ್ದಾರೆ
ರಾಹುಲ್ ಗಾಂಧಿ ಆರೋಪಕ್ಕೆ ಸ್ವತಃ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಆರೋಪಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಅವರು, ‘ಮಾಜಿ ಪ್ರಧಾನಿಯವರ ದುರಂತ ನಿಧನದ ನಂತರವೂ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಹಾಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜಕೀಯ ಮಾಡುವುದನ್ನು ಬಿಡದಿರುವುದು ಅತ್ಯಂತ ದುರದೃಷ್ಟಕರ’ ಎಂದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕೆ ಕೇಂದ್ರ ಸರ್ಕಾರ ಜಾಗ ಮಂಜೂರು ಮಾಡಿದ್ದು, ಅವರ ಕುಟುಂಬಕ್ಕೂ ಈ ಬಗ್ಗೆ ಮಾಹಿತಿ ನೀಡಿದೆ ಎಂದು ನಡ್ಡಾ ಹೇಳಿದ್ದಾರೆ. ‘ಕಾಂಗ್ರೆಸ್‌ನ ಇಂತಹ ಕ್ಷುಲ್ಲಕ ಚಿಂತನೆಯನ್ನು ಎಷ್ಟೇ ಖಂಡಿಸಿದರೂ ಸಾಲದು. ಮನಮೋಹನ್ ಸಿಂಗ್ ಬದುಕಿದ್ದಾಗ ಯಾವತ್ತೂ ಅವರಿಗೆ ನಿಜವಾದ ಗೌರವ ನೀಡದ ಕಾಂಗ್ರೆಸ್ ಈಗ ಅವರ ಗೌರವದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ’ ಎಂದು ನಡ್ಡಾ ತಿರುಗೇಟು ಕೊಟ್ಟಿದ್ದಾರೆ.
ಮನಮೋಹನ್ ಅವರ ಸ್ಮಾರಕಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾಗ ಮಂಜೂರು ಮಾಡಿದ್ದು, ಈ ಬಗ್ಗೆ ಅವರ ಕುಟುಂಬದವರಿಗೂ ಮಾಹಿತಿ ನೀಡಿದೆ ಎಂದು ಜೆಪಿ ನಡ್ಡಾ ಹೇಳಿದ್ದಾರೆ. ಹೀಗಿದ್ದರೂ ಕಾಂಗ್ರೆಸ್ ಸುಳ್ಳು ಪ್ರಚಾರ ಮಾಡುತ್ತಿದೆ’ ಎಂದು ಆರೋಪಿಸಿದರು. ‘ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಕಾಂಗ್ರೆಸ್ ನಾಯಕರು ಇಂತಹ ಚಿಲ್ಲರೆ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು’ ಎಂದು ನಡ್ಡಾ ಹೇಳಿದರು.