SUDDIKSHANA KANNADA NEWS/ DAVANAGERE/ DATE:09-04-2025
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಭ್ರಷ್ಟಾಚಾರವನ್ನು, ಖುದ್ದು ಕಾಂಗ್ರೆಸ್ ಶಾಸಕ, ಮುಖ್ಯಮಂತ್ರಿಗಳ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರು ಮತ್ತೊಮ್ಮೆ ಒಪ್ಪಿಕೊಂಡಿದ್ದಾರೆ.
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೂ ಭ್ರಷ್ಟಾಚಾರ ಹಾಗೂ ಬೆಲೆ ಏರಿಕೆಯನ್ನು ಹೊರತುಪಡಿಸಿ ಇನ್ನೇನನ್ನೂ ಮಾಡಿಲ್ಲ. ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಸುಳ್ಳು ಆರೋಪ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಶೇಕಡಾ 60ರಷ್ಟು ಕಮಿಷನ್ ಮೂಲಕ ಸರ್ಕಾರ ನಡೆಸುತ್ತಿದೆ. ಎಲ್ಲಾ ಇಲಾಖೆಗಳಲ್ಲೂ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸುತ್ತಿದೆ. ಕಲೆಕ್ಷನ್-ಕಮಿಷನ್ನಲ್ಲಿ ನಿರತವಾಗಿರುವ ಕೈ ಸರ್ಕಾರ ರಾಜ್ಯದ ಜನರ ಪಾಲಿಗೆ ಮರಣಶಾಸನವಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಭ್ರಷ್ಟಾಚಾರ, ಲೂಟಿಕೋರತನ ಕಾಂಗ್ರೆಸ್ ಸರ್ಕಾರದ ಅವಿಭಾಜ್ಯ ಅಂಗ ಎಂಬುದನ್ನು ಸ್ವತಃ ನಿಮ್ಮ ಆರ್ಥಿಕ ಸಲಹೆಗಾರರೂ ಆಗಿರುವ ಶಾಸಕ ಬಸವರಾಜ ರಾಯರೆಡ್ಡಿ ಅವರೇ ಸ್ಪಷ್ಟವಾಗಿ ಬಹಿರಂಗಪಡಿಸಿದ್ದಾರೆ. “ದೇಶದಲ್ಲೇ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂ.1 “ ಎಂದು ಹೇಳುವ ಮೂಲಕ ಈ ಸರ್ಕಾರದ ಕರಾಳ ಭ್ರಷ್ಟತೆಯ ಮುಖವಾಡವನ್ನು ಬಯಲು ಮಾಡಿ ರಾಜ್ಯದ ಘನತೆ ಕುಗ್ಗಿದ ಸ್ವರೂಪವನ್ನು ಬಿಚ್ಚಿಟ್ಟಿದ್ದಾರೆ. ಆ ಮೂಲಕ ರಾಷ್ಟ್ರ ಮಟ್ಟದಲ್ಲಿ ರಾಜ್ಯ ನಿಮ್ಮ ಆಡಳಿತದಲ್ಲಿ ಸಂಪೂರ್ಣ ಭ್ರಷ್ಟತೆಯ ಕಪ್ಪುಮಸಿ ಮೆತ್ತಿಕೊಂಡಿರುವುದನ್ನು ಅನಾವರಣ ಮಾಡಿ ಕರ್ನಾಟಕ ವಿಶ್ವ ಮಟ್ಟದಲ್ಲಿ ತಲೆತಗ್ಗಿಸುವ ಪರಿಸ್ಥಿತಿ ಇರುವುದನ್ನು ವಿವರಿಸಿದ್ದಾರೆ ಎಂದು ಹೇಳಿದ್ದಾರೆ.
“ಜನಪ್ರತಿನಿಧಿಗಳು ಹೇಗೆ ಇರುತ್ತಾರೊ ಅದರಂತೆಯೇ ಅಧಿಕಾರಿಗಳೂ ಇರುತ್ತಾರೆ, ಮುಖ್ಯಮಂತ್ರಿ ಏನೇ ಹೇಳಿದರೂ ಭ್ರಷ್ಟಾಚಾರದ ಕುರಿತು ನನ್ನ ವೈಯಕ್ತಿಕ ಅಭಿಪ್ರಾಯ ಇದೇ ಇರುತ್ತದೆ” ಎಂದು ಹೇಳುವ ಮೂಲಕ ‘ಯಥಾ ರಾಜ ತಥಾ
ಮಂತ್ರಿಗಳು, ಅಧಿಕಾರಿಗಳು ‘ಎಂಬ ಮಾತು ನಿಮ್ಮ ಆಡಳಿತದಲ್ಲಿ ಅಕ್ಷರಶಃ ಅನ್ವಯಿಸುತ್ತಿದೆ ಎನ್ನುವುದನ್ನು ಹೇಳುವ ಮೂಲಕ ವಾಸ್ತವ ಸ್ಥಿತಿಯ ಮೇಲೆ ನೇರವಾಗಿ ಬೆಳಕು ಚೆಲ್ಲಿದ್ದಾರೆ ಎಂದಿದ್ದಾರೆ.
ಹಿಂದಿನ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರವನ್ನು 40% ಸರ್ಕಾರ ಎಂಬ ಸುಳ್ಳು ಅಪಪ್ರಚಾರಗಳನ್ನು ನಡೆಸಿ ರಾಜ್ಯದ ಜನತೆಯನ್ನು ದಿಕ್ಕು ತಪ್ಪಿಸಿ ಜಗತ್ತಿನಲ್ಲಿ “ನಾವೇ ಸತ್ಯವಂತರು “ಎಂದು ಡಂಗುರ ಸಾರಿ ಅಧಿಕಾರಕ್ಕೆ ಬಂದ ನಿಮ್ಮ ನೈಜ ಮುಖವಾಡ ಇದೀಗ ಕಳಚಿ ಬಿದ್ದಿದೆ ಎಂದು ಕುಟುಕಿದ್ದಾರೆ.
ಭ್ರಷ್ಟತೆಯ ಕೆನ್ನಾಲಿಗೆ ರಾಜ್ಯದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆ ಏರಿಸುವ ಮೂಲಕ ಜನಸಾಮಾನ್ಯರು ಹಾಗೂ ಕಡು ಬಡವರ ದೈನಂದಿನ ಬದುಕಿನ ಸ್ಥಿತಿಯನ್ನು ಸುಡುತ್ತಿದೆ. ಇದಕ್ಕಾಗಿ ನಿಮ್ಮ ಸರ್ಕಾರದ ವಿರುದ್ಧ ಜನಬೆಂಬಲಿತ ‘ಬಿಜೆಪಿ ಜನಾಕ್ರೋಶದ ಹೋರಾಟದ ಯಾತ್ರೆ’ರಾಜ್ಯಾದ್ಯಂತ ಯಶಸ್ವಿಯಾಗಿ ಮುನ್ನಡೆದಿದೆ. ನಿಮ್ಮ ಆಡಳಿತದಿಂದ ರಾಜ್ಯವನ್ನು ಮುಕ್ತಗೊಳಿಸದೇ ಕರುನಾಡಿಗೆ ಮುಕ್ತಿಯಿಲ್ಲ ಎಂಬ ನಿರ್ಧಾರಕ್ಕೆ ರಾಜ್ಯದ ಜನ ಬಂದಿದ್ದಾರೆ. ಸದ್ಯದಲ್ಲೇ ಜನಾಕ್ರೋಶದ ಬಿಸಿ ನಿಮ್ಮ ಸರ್ಕಾರವನ್ನು ಸುಟ್ಟು ಪಥನಗೊಳಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.