ತ್ರಿಶೂರ್: ಇನ್‌ಸ್ಟಾಗ್ರಾಮ್ ಮೂಲಕ ಮಹಿಳೆಯರನ್ನು ಪರಿಚಯ ಮಾಡಿಕೊಂಡು, ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಆರೋಪದ ಮೇಲೆ ಕೇರಳದ ಪ್ರಖ್ಯಾತ ಇನ್‌ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಯದು ಗಿರೀಶ್ (38) ಎಂಬಾತನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ತ್ರಿಶೂರ್ ನಿವಾಸಿಯಾದ ಈತ ಹದಿನೈದಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಆರೋಪಿಯು ಇನ್‌ಸ್ಟಾಗ್ರಾಮ್‌ನಲ್ಲಿ ಅನೇಕ ಖಾತೆಗಳನ್ನು ಹೊಂದಿದ್ದು, ಅದರ ಮೂಲಕ ಯುವತಿಯರನ್ನು ಹಾಗೂ ಮಹಿಳೆಯರನ್ನು ಸಂಪರ್ಕಿಸುತ್ತಿದ್ದನು. ಅವರ ವಿಶ್ವಾಸ ಗಳಿಸಿದ ನಂತರ ಮದುವೆಯ ಭರವಸೆ ನೀಡಿ ದೈಹಿಕವಾಗಿ ಬಳಸಿಕೊಳ್ಳುತ್ತಿದ್ದನು.
ಈವರೆಗೆ ಮೂವರು ಮಹಿಳೆಯರು ಅಧಿಕೃತವಾಗಿ ದೂರು ದಾಖಲಿಸಿದ್ದು, ತನಿಖೆಯ ವೇಳೆ ಇತರೆ 12ಕ್ಕೂ ಹೆಚ್ಚು ಮಹಿಳೆಯರು ಈತನ ಬಲೆಗೆ ಬಿದ್ದಿರುವುದು ಬೆಳಕಿಗೆ ಬಂದಿದೆ.
ಸಂತ್ರಸ್ತೆಯರ ಖಾಸಗಿ ವಿಡಿಯೋಗಳನ್ನು ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪವೂ ಈತನ ಮೇಲಿದೆ.
ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 69 (ಮದುವೆಯ ಸುಳ್ಳು ಭರವಸೆ ನೀಡಿ ಲೈಂಗಿಕ ಸಂಪರ್ಕ ಬೆಳೆಸುವುದು) ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.





Leave a comment