SUDDIKSHANA KANNADA NEWS/ DAVANAGERE/ DATE-17-06-2025
ದಾವಣಗೆರೆ: ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಅತ್ಯಗತ್ಯ. ದೇಶಕ್ಕೆ ನೀಡಿರುವ ಕೊಡುಗೆ ಅಪಾರ. ಕೇವಲ ಭರವಸೆ ನೀಡಿ ಅಧಿಕಾರಕ್ಕೆ ಬಂದಾಗ ಈಡೇರಿಸುವ ಏಕೈಕ ಪಕ್ಷವೆಂದರೆ ಅದು ಕಾಂಗ್ರೆಸ್ ಮಾತ್ರ. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವವರೆಗೆ ಶ್ರಮಿಸೋಣ ಎಂದು ತೆಲಂಗಾಣ ಯುವ ಕಾಂಗ್ರೆಸ್ ಉಸ್ತುವಾರಿ ಹಾಗೂ ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರು ಕರೆ ನೀಡಿದರು.
ತೆಲಂಗಾಣದ ಮೆಹಬೂಬ್ ನಗರದಲ್ಲಿ ಏರ್ಪಡಿಸಿದ್ದ ಜಿಲ್ಲಾ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಡವರು, ದೀನದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದವರಿಗೆ ಕಾಂಗ್ರೆಸ್ ಪಕ್ಷ ನೀಡಿರುವ ಕಾರ್ಯಕ್ರಮಗಳೇ ಸಾಕ್ಷಿ. ಈ ನಿಟ್ಟಿನಲ್ಲಿ ಈಗಿನಿಂದಲೇ ಪಕ್ಷ ಮತ್ತಷ್ಟು ಬಲಿಷ್ಠಗೊಳಿಸಲು ಪ್ರಾಮಾಣಿಕವಾಗಿ ಕೆಲಸ ಮಾಡೋಣ ಎಂದು ಸಲಹೆ ನೀಡಿದರು.
ಕೇಂದ್ರದಲ್ಲಿ ಎನ್ ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 11 ವರ್ಷಗಳಾಗಿವೆ. ದಿನನಿತ್ಯ ಬಳಕೆ ವಸ್ತುಗಳು, ಜಿಎಸ್ ಟಿ ಬರೆ, ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಿಗೆ ಮಲತಾಯಿ ಧೋರಣೆ, ರಾಜ್ಯಗಳ ಪಾಲಿನ ಜಿಎಸ್ ಟಿ ಸೇರಿದಂತೆ ಇತರೆ ಅನುದಾನ ನೀಡದೇ ತಾರತಮ್ಯ ನೀತಿ ಅನುಸರಿಸುತ್ತಿದೆ. ಸಮಾಜದಲ್ಲಿ ಕೋಮುಭಾವನೆ ಕೆರಳಿಸಿ ಮತ ಪಡೆಯುವ ಬಿಜೆಪಿಯು ಯಾವೆಲ್ಲಾ ಸಾಧನೆ ಮಾಡಿದೆ ಎಂದು ಪ್ರಶ್ನಿಸಿದರು.
ಚುನಾವಣೆ ಬಂದಾಗ ಪ್ರಧಾನಿ ನರೇಂದ್ರ ಮೋದಿ ಅವರು ಆಶ್ವಾಸನೆಗಳ ಮಹಾಪೂರವನ್ನೇ ಹರಿಸುತ್ತಾರೆ. ಬಿಜೆಪಿಯ ಯಾವ ಸಂಸದರು ಹೇಳಿಕೊಳ್ಳುವಂಥ ಕೆಲಸ ಮಾಡಿದ್ದಾರೆ. ಕೇವಲ ಮೋದಿ ಅವರ ಹೆಸರಿನಲ್ಲಿ ಮತ ಕೇಳುತ್ತಾರೆ. ಸಾಧನೆ ಹೇಳಿ ಮತ ಕೇಳುತ್ತಿಲ್ಲ. ಆದ್ರೆ, ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಕಾರ್ಯಕ್ರಮಗಳ ಬಗ್ಗೆ ತಿಳಿಸಿ ಅರಿವು ಮೂಡಿಸಬೇಕಿದೆ ಎಂದು ಪ್ರತಿಪಾದಿಸಿದರು.
ಕರ್ನಾಟಕ, ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಘೋಷಿಸಿದಂತೆ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದೆ. ರಾಜ್ಯದ ಆರ್ಥಿಕತೆಗೆ ಹೊಡೆತ ಬಿದ್ದರೂ ಸರಿದೂಗಿಸಿಕೊಂಡು ಅಭಿವೃದ್ಧಿ
ಕಾರ್ಯಗಳನ್ನು ಮಾಡಲಾಗುತ್ತಿದೆ. ದೆಹಲಿ, ಮಹಾರಾಷ್ಟ್ರದಲ್ಲಿ ಚುನಾವಣೆಗೆ ಮುನ್ನ ಬಿಜೆಪಿ ಘೋಷಿಸಿದ್ದ ಯೋಜನೆಗಳು ಜನರಿಗೆ ತಲುಪುತ್ತಿಲ್ಲ. ಮಹಾರಾಷ್ಟ್ರದಲ್ಲಂತೂ ಗ್ಯಾರಂಟಿ ನೀಡಲು ಆಗದು ಎಂದು ಅಧಿಕಾರದಲ್ಲಿದ್ದವರೇ ಹೇಳುತ್ತಿದ್ದಾರೆ. ಈ ವಿಚಾರ ಪ್ರತಿಯೊಬ್ಬರಿಗೂ ತಿಳಿಸುವ ಕೆಲಸವನ್ನು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಮಾಡಬೇಕಿದೆ. ಈ ಮೂಲಕ ರಾಹುಲ್ ಗಾಂಧಿ ಅವರ ನಾಯಕತ್ವ ಬಲಪಡಿಸಬೇಕಿದೆ ಎಂದು ಸೈಯದ್ ಖಾಲಿದ್ ಅಹ್ಮದ್ ಅವರು ಹೇಳಿದರು.
ಪಹಲ್ಗಾಮ್ ನಲ್ಲಿ ಉಗ್ರರು ಎಸಗಿದ ಪೈಶಾಚಿಕ ಕೃತ್ಯಕ್ಕೆ ಇಡೀ ದೇಶವೇ ಬೆಂಬಲಿಸಿದೆ. ಆದ್ರೆ, 26 ಪ್ರವಾಸಿಗರನ್ನು ಹತ್ಯೆಗೈದ ಉಗ್ರರ ದಮನ ಇನ್ನೂ ಆಗಿಲ್ಲ. ಕೇಂದ್ರ ಸರ್ಕಾರವು ಕೇವಲ ಜನರಿಗೆ ಕಣ್ಣೊರೆಸುವ ತಂತ್ರ ಮಾಡುತ್ತದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಕಡಿಮೆಗೊಳಿಸುವತ್ತ ಯಾವುದೇ ಕಾರ್ಯಕ್ರಮಗಳನ್ನ ರೂಪಿಸಿಲ್ಲ. ಪ್ರಧಾನಿ, ಅಮಿತ್ ಶಾ ಕೇವಲ ಚುನಾವಣೆ ಬಂದಾಗ ಮಾತ್ರ ಆ ರಾಜ್ಯಗಳ ಮೇಲೆ ಹೆಚ್ಚಿನ ಗಮನ ಹರಿಸುತ್ತಾರೆ. ಆನಂತರ ಮರೆತೇ ಬಿಡುತ್ತಾರೆ ಎಂದು ವ್ಯಂಗ್ಯವಾಡಿದರು.
ಸಭೆಯಲ್ಲಿ ಭಾರತೀಯ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಶಿವ ಚರಣ್ ರೆಡ್ಡಿ, ಜಿಲ್ಲಾಧ್ಯಕ್ಷ ಮಹಮ್ಮದ್ ಓವೈಸ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ್ ಯಾದವ್, ಶಿವಂತ್ ರೆಡ್ಡಿ, ಮಜಿದ್ ಖಾನ್, ಶ್ಯಾಮ್ ಸುಂದರ್ ರೆಡ್ಡಿ, ಸಂಧ್ಯಾ ಮತ್ತಿತರರು
ಹಾಜರಿದ್ದರು.