
ಬೆಂಗಳೂರು: ಸಮಾನತೆ, ಕಾಯಕ, ದಾಸೋಹ ಹಾಗೂ ಮಾನವೀಯ ಮೌಲ್ಯಗಳ ಮೂಲಕ ಜಗತ್ತಿಗೆ ಸಮಸಮಾಜದ ಸಂದೇಶ ಸಾರಿದ ವಿಶ್ವಗುರು ಬಸವಣ್ಣನವರು ಮತ್ತು ಮಹಾನ್ ಶಿವಶರಣರ ಕುರಿತು ಲೇಖಕ ರವಿ ಹಂಜ್ ನೀಡಿರುವ ಅವಹೇಳನಕಾರಿ ಹೇಳಿಕೆ ಹಾಗೂ ‘ಬಸವಮಂಟಪ: ವೀರಶೈವ ಲಿಂಗಾಯತ ಸತ್ಯದರ್ಶನ’ ಕೃತಿಯ ರಚನೆಯು ಅತ್ಯಂತ ಅಪಮಾನಕಾರಿಯಾಗಿದ್ದು, ಇದು ತೀವ್ರ ಖಂಡನೀಯ ಎಂದು ಸಚಿವ ಎಂ.ಬಿ. ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಬಸವ ಸಮಿತಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇದು ಕೇವಲ ವ್ಯಕ್ತಿಗಳಿಗಾದ ಅವಮಾನವಲ್ಲ, ಬದಲಾಗಿ ಶರಣರ ಚಿಂತನೆ, ವಚನ ಸಾಹಿತ್ಯ ಹಾಗೂ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಮಾಡಿರುವ ಘೋರ ಅಪಚಾರವಾಗಿದೆ ಎಂದು ಕಿಡಿಕಾರಿದ್ದಾರೆ.
ಕಠಿಣ ಕಾನೂನು ಕ್ರಮಕ್ಕೆ ಒತ್ತಾಯ: ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಮುಖ್ಯಮಂತ್ರಿಗಳ ಗಮನಕ್ಕೆ ತಂದು ಬಸವಣ್ಣನವರ ಘನತೆಗೆ ಧಕ್ಕೆ ತರುತ್ತಿರುವವರ ವಿರುದ್ಧ ಸೂಕ್ತ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ.
ಶರಣ ಸಂಸ್ಕೃತಿ ರಕ್ಷಣೆ ಜವಾಬ್ದಾರಿ: ಬಸವಣ್ಣನವರ ವಿಚಾರಧಾರೆ ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದ್ದು, ಅವರ ಘನತೆ ಹಾಗೂ ಶರಣ ಸಂಸ್ಕೃತಿಯ ಗೌರವವನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.
ಗಣ್ಯರ ಉಪಸ್ಥಿತಿ: ಬಸವ ಸಮಿತಿ ಅಧ್ಯಕ್ಷರಾದ ಅರವಿಂದ ಜತ್ತಿ, ಸಚಿವರಾದ ಡಾ. ಶರಣಪ್ರಕಾಶ ಪಾಟೀಲ್, ಬಸವರಾಜ ರಾಯರೆಡ್ಡಿ, ಹಿರಿಯ ಶಾಸಕ ಬಿ.ಆರ್. ಪಾಟೀಲ್, ಮಾಜಿ ಸಚಿವೆ ರಾಣಿ ಸತೀಶ್, ಮಾಜಿ ಮೇಯರ್ ಗಂಗಾಂಬಿಕಾ ಮಲ್ಲಿಕಾರ್ಜುನ್, ಡಾ. ಜೆ.ಎಸ್. ಪಾಟೀಲ್, ಡಾ. ನೀರಜ್ ಪಾಟೀಲ್ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಎಸ್.ಜಿ. ಸುಶೀಲಮ್ಮ ಸೇರಿದಂತೆ ಹಲವುಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.




