ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

25 ವರ್ಷಗಳ ಬಳಿಕ ಬಿಜೆಪಿ ಸೋಲು, ಎಂಪಿ ರೇಣುಕಾರ್ಯ ಟೀಂ ವಿರುದ್ಧ ಬಿಪಿ ಹರೀಶ್ ರೋಷಾವೇಶ…!

On: June 9, 2024 8:26 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:09-06-2024

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರ ಸೋಲಿಗೆ ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ಸೇರಿದಂತೆ ಭಿನ್ನಮತೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ 11 ಮಂದಿ ಕಾರಣ ಎಂದು ಹರಿಹರ ಶಾಸಕ ಬಿ. ಪಿ. ಹರೀಶ್ ಆರೋಪಿಸಿದರು.

ನಗರದ ಹರಿಹರ ಅರ್ಬನ್ ಸಮುದಾಯ ಭವನದಲ್ಲಿ ಮತದಾರರು, ಕಾರ್ಯಕರ್ತರು ಹಾಗೂ ಮುಖಂಡರಿಗೆ ಕೃತಜ್ಞತೆ ಸಲ್ಲಿಸುವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ಸೋಲಿಗೆ ಕಾರಣರಾದವರ ವಿರುದ್ಧ ಸೇಡು ತೀರಿಸಿಕೊಳ್ಳಬೇಕು. ಪಕ್ಷ ವಿರೋಧಿಗಳನ್ನು ಸುಮ್ಮನೆ ಬಿಡಬಾರದು ಎಂದು ಹೇಳಿದರು.

ಮಾಜಿ ಶಾಸಕ ಎಂ. ಪಿ. ರೇಣುಕಾಚಾರ್ಯ ಸೇರಿದಂತೆ ಹಲವರು ಡಾ. ಜಿ. ಎಂ. ಸಿದ್ದೇಶ್ವರ ಅವರು ಹೊರಗಿನವರು. ಅವರಿಗೆ ಟಿಕೆಟ್ ನೀಡಬಾರದು ಎಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಮಾತ್ರವಲ್ಲ, ಭಿನ್ನಮತೀಯ ಸಭೆ ನಡೆಸಿದರು. ಪಕ್ಷ ವಿರೋಧಿ ಚಟುವಟಿಕೆ ನಡೆಸಿದರು. ಆದರೂ ಕ್ರಮ ಜರುಗಿಸಲಿಲ್ಲ. ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಇದಕ್ಕೆಲ್ಲಾ ಕಡಿವಾಣ ಹಾಕಬಹುದಿತ್ತು. ಆದರೂ ಈ ಕೆಲಸ ಮಾಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹರಿಹರ ಮಾಜಿ ಶಾಸಕ ಹೆಚ್. ಎಸ್. ಶಿವಶಂಕರ್ ಮಾತನಾಡಿ, ಬಿಜೆಪಿ ಸೋಲಲು ಕೆಲ ಬಿಜೆಪಿ ನಾಯಕರೇ ಕಾರಣ. ಈ ಸತ್ಯವನ್ನು ಒಪ್ಪಿಕೊಳ್ಳಬೇಕು. ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಚುನಾವಣೆ ಎಂದ ಮೇಲೆ ತಂತ್ರಗಾರಿಕೆ, ಕುತಂತ್ರ ಮಾಡುತ್ತಾರೆ. ಇದು ಸಹಜ ಎಂದರು.

ಮಾಜಿ ಸಂಸದ ಡಾ. ಜಿ. ಎಂ. ಸಿದ್ದೇಶ್ವರ ಮಾತನಾಡಿ, ಚುನಾವಣೆಯಲ್ಲಿ ಸೋತಿರುವುದರಿಂದ ಯಾರನ್ನೂ ನಿಂದಿಸಲು ಹೋಗುವುದಿಲ್ಲ. ಆದ್ರೆ, ಸೋಲು ನಿರೀಕ್ಷಿಸಿರಲಿಲ್ಲ. ಲೋಕಸಭೆ ಚುನಾವಣೆ ವೇಳೆ ನನ್ನ ಆರೋಗ್ಯ ಸರಿ ಇರಲಿಲ್ಲ. ಈ ಕಾರಣಕ್ಕೆ ನನ್ನ ಪತ್ನಿ ಗಾಯಿತ್ರಿ ಸಿದ್ದೇಶ್ವರ ಅವರಿಗೆ ಹೈಕಮಾಂಡ್ ಟಿಕೆಟ್ ನೀಡಿತು. ಈಗ ಆರೋಗ್ಯ ಸುಧಾರಿಸಿದೆ. ನಾನೇ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಖಂಡಿತ ಗೆಲ್ಲುತ್ತಿದ್ದೆ ಎಂದು ಹೇಳಿದರು.

ಚುನಾವಣೆಯಲ್ಲಿ ಸೋತಿದ್ದೇವೆ ಎಂಬ ಕಾರಣಕ್ಕೆ ಮನೆಯಲ್ಲಿ ಕೂರುವುದಿಲ್ಲ, ಅಂಜುವುದೂ ಇಲ್ಲ, ಕುಗ್ಗುವುದೂ ಇಲ್ಲ, ವಾರಕ್ಕೆ ಎರಡು ದಿನ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತೇನೆ. ಜನರೊಂದಿಗೆ ನಿರಂತರ ಸಂಪರ್ಕದಲ್ಲಿ ಇರುತ್ತೇನೆ ಎಂದು ಹೇಳಿದರು.

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಆರು ಬಾರಿ ನಾವು ಗೆದ್ದಿದ್ದೇವೆ. ನನ್ನ ತಂದೆ ಎರಡು ಬಾರಿ ಸಂಸದರಾಗಿದ್ದರು. ನಾನು ನಾಲ್ಕು ಬಾರಿ ಸಂಸದನಾಗಿದ್ದೆ. ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿ ಆಗುತ್ತಿರುವುದು ಖುಷಿ ತಂದಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗಿಂತ ಕೇಂದ್ರದಲ್ಲಿ ಮೋದಿ ಪ್ರಧಾನಿ ಆಗಿದ್ದು ಒಳ್ಳೆಯ ವಿಚಾರ, ಸಮಾಧಾನ ತಂದಿದೆ ಎಂದು ಹೇಳಿದರು.

ಪರಾಜಿತ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಅವರು ಮಾತನಾಡಿ, ಬಿಸಿಲು, ಗಾಳಿ, ಮಳೆ ಎನ್ನದೇ ನನ್ನ ಗೆಲುವಿಗೋಸ್ಕರ ದುಡಿದಿದ್ದಾರೆ. ಕಾರ್ಯಕರ್ತರು, ಮುಖಂಡರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

ವೇದಿಕೆಯಲ್ಲಿ ದೂಡಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್, ಮಾಜಿ ಶಾಸಕರಾದ ಎಸ್. ವಿ. ರಾಮಚಂದ್ರಪ್ಪ, ಹೆಚ್. ಪಿ. ರಾಜೇಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ್ ಎನ್. ನಾಗಪ್ಪ, ದೇವರಮನಿ ಶಿವಕುಮಾರ್, ಜಿ. ಎಸ್. ಅಶ್ವಿನಿ, ಜಿ. ಎಸ್. ಶ್ಯಾಮ್, ಜಗದೀಶ್, ಬಿಜೆಪಿ ಮುಖಂಡರು ಹಾಗೂ ಜೆಡಿಎಸ್ ಮುಖಂಡರು ಹಾಜರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment