SUDDIKSHANA KANNADA NEWS/ DAVANAGERE/ DATE:01-02-2025
ದಾವಣಗೆರೆ: ಆನಗೋಡು ಗ್ರಾಮದ ಸಮೀಪ ಖಾಸಗಿ ಶಾಲೆಯ ಬಸ್ ಮರಕ್ಕೆ ಡಿಕ್ಕಿ ಹೊಡೆದ ವಿಚಾರ ತಿಳಿಯುತ್ತಿದ್ದಂತೆ ಶಾಸಕ ಕೆ. ಎಸ್. ಬಸವಂತಪ್ಪ ದೌಡಾಯಿಸಿದರು.
ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ದೌಡಾಯಿಸಿ ಶಾಸಕ ಕೆ.ಎಸ್.ಬಸವಂತಪ್ಪ, ಮಕ್ಕಳ ಆರೋಗ್ಯ ವಿಚಾರಿಸಿದರು. ಸಣ್ಣಪುಟ್ಟ ಗಾಯಗೊಂಡು ಮಕ್ಕಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸಹಾಯ ಮಾಡಿದ ಅವರು, ಇನ್ನು ಗಂಭೀರವಾಗಿ ಗಾಯಗೊಂಡ ಇಬ್ಬರು ಮಕ್ಕಳನ್ನು ನಗರದ ಎಸ್.ಎಸ್.ಹೈಟೆಕ್ ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದ್ದಾರೆ.
ಚಿಕಿತ್ಸಾ ವೆಚ್ಚ ಶಾಲಾ ಆಡಳಿತ ಮಂಡಳಿ ಭರಿಸಲಿ:
ಶಾಲಾ ಬಸ್ ಅಪಘಾತದಿಂದ ಮಕ್ಕಳ ಪೋಷಕರು ಆಘಾತಕ್ಕೊಳಗಾಗಿದ್ದು, ಅಪಘಾತದಿಂದ ಗಂಭೀರವಾಗಿ ಗಾಯಗೊಂಡು ಎಸ್.ಎಸ್.ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಚಿಕಿತ್ಸಾ ವೆಚ್ಚವನ್ನು ಶಾಲಾ ಆಡಳಿತ ಮಂಡಳಿ ಭರಿಸಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಸೂಚನೆ ನೀಡಿದ್ದಾರೆ.
ದೂರವಾಣಿ ಮೂಲಕ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಅವರನ್ನು ಸಂಪರ್ಕ ಮಾಡಿ, ಇತ್ತೀಚಿನ ದಿನಗಳಲ್ಲಿ ಖಾಸಗಿ ಶಾಲಾ ಬಸ್ ಗಳ ಚಾಲಕರ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ. ಖಾಸಗಿ ಶಾಲಾ ಆಡಳಿತ ಮಂಡಳಿಗಳ ಮುಖ್ಯಸ್ಥರ, ಚಾಲಕರ ಸಭೆ ಕರೆದು ಮಕ್ಕಳ ಸುರಕ್ಷತೆ ಬಗ್ಗೆ ಹಾಗೂ ಮಕ್ಕಳನ್ನು ಹಳ್ಳಿಗಳಿಂದ ಬಸ್ ಗಳಲ್ಲಿ ಶಾಲೆಗೆ ಕರೆದುಕೊಂಡು ಬಂದು ಸುರಕ್ಷಿತವಾಗಿ ಮನೆಗೆ ತಲುಪಿಸಬೇಕು. ಈ ಬಗ್ಗೆ ಕಟ್ಟುನಿಟ್ಟಿನ ಆದೇಶ ನೀಡಬೇಕೆಂದು ಸೂಚನೆ ನೀಡಿದರು.
ಶೀಘ್ರದಲ್ಲೇ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರ ಸಭೆ ಕರೆದು ಈ ಬಗ್ಗ್ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.