SUDDIKSHANA KANNADA NEWS/ DAVANAGERE/ DATE:14-02-2025
ದಾವಣಗೆರೆ: ಗ್ರಾಮಾಡಳಿತ ಅಧಿಕಾರಿಗಳ ಅನಿರ್ದಿಷ್ಠಾವಧಿ ಮುಷ್ಕರದಿಂದ ವಿದ್ಯಾರ್ಥಿ ವೇತನ ಸೇರಿದಂತೆ ಸರ್ಕಾರದ ಸೌಲಭ್ಯಕ್ಕೆ ಜಾತಿ ಪ್ರಮಾಣ ಪತ್ರ ಪಡೆಯಲು ಶಾಲಾ-ಕಾಲೇಜು ವಿದ್ಯಾರ್ಥಿಗಳು ಪರದಾಡುವಂತಾಗಿದ್ದು, ಸಕಾಲದಲ್ಲಿ ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣ ಪತ್ರ ನೀಡಿ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಶಾಸಕ ಕೆ.ಎಸ್.ಬಸವಂತಪ್ಪ ಮನವಿ ಮಾಡಿದ್ದಾರೆ.
ಗ್ರಾಮಾಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ, ಗುಣಮಟ್ಟದ ಟೇಬಲ್, ಖುರ್ಚಿ, ಅಲ್ಮೇರಾ, ಮೊಬೈಲ್, ಪ್ರಿಂಟರ್, ಸ್ಕ್ಯಾನರ್ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಕಳೆದ ಐದಾರು ದಿನಗಳಿಂದ ಅನಿರ್ದಿಷ್ಠಾವಧಿ ಮುಷ್ಕರ ನಡೆಸುತ್ತಿದ್ದಾರೆ. ಇದರ ಪರಿಣಾಮ ಮಾಯಕೊಂಡ ಕ್ಷೇತ್ರ ಸೇರಿದಂತೆ ಜಿಲ್ಲೆಯ ಗ್ರಾಮೀಣ ಪ್ರದೇಶದ ಶಾಲಾ- ಕಾಲೇಜು ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ, ಸರ್ಕಾರಿ ಸೌಲಭ್ಯ ಪಡೆಯಲು ಜಾತಿ ಪ್ರಮಾಣ ಪತ್ರ ಅವಶ್ಯವಿದ್ದು, ಗ್ರಾಮಾಡಳಿತ ಅಧಿಕಾರಿಗಳ ಮೂಲಕ ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಅಲ್ಲದೇ ಸೌಲಭ್ಯಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜಾತಿ ಪ್ರಮಾಣ ಪತ್ರ ಸಕಾಲದಲ್ಲಿ ಸಿಗದೆ ಪರಿತಪಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಗ್ರಾಮಾಡಳಿತ ಅಧಿಕಾರಿಗಳು ಜಾತಿ ಪ್ರಮಾಣ ಪತ್ರದ ಅರ್ಜಿಗಳನ್ನು ಸಕಾಲದಲ್ಲಿ ವಿಲೇ ಮಾಡಬೇಕೆಂದು ಕೋರಿದ್ದಾರೆ.
ಜಿಲ್ಲಾಧಿಕಾರಿಗಳು ಕೂಡ ಮಧ್ಯೆ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಗೆ ಸ್ಪಂದಿಸಿ ಸಕಾಲದಲ್ಲಿ ಜಾತಿ ಪ್ರಮಾಣ ಪತ್ರಗಳು ಲಭ್ಯವಾಗುವಂತೆ ಕ್ರಮ ತೆಗೆದುಕೊಳ್ಳಬೇಕು. ಒಂದು ವೇಳೆ ಗ್ರಾಮಾಡಳಿತ ಅಧಿಕಾರಿಗಳು ಸ್ಪಂದಿಸದಿದ್ದರೆ ತಹಸೀಲ್ದಾರ್ ಮೂಲಕ ತ್ವರಿತವಾಗಿ ಜಾತಿ ಪ್ರಮಾಣ ಪತ್ರ ದೊರೆಯಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.
ಗ್ರಾಮಾಡಳಿತ ಅಧಿಕಾರಿಗಳು ಕೇಳುತ್ತಿರುವ ಬೇಡಿಕೆಗಳು ಸರಿಯಾಗಿವೆ. ನಾನೂ ಕೂಡ ನಿಮ್ಮ ಬೇಡಿಕೆ ಈಡೇರಿಸಲು ಸರ್ಕಾರದ ಮೇಲೆ ಒತ್ತಡ ತರುತ್ತೇನೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಭರವಸೆ ನೀಡಿದ್ದಾರೆ.






