SUDDIKSHANA KANNADA NEWS/ DAVANAGERE/ DATE-05-05-2025
ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮತ್ತು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಇಂದು ಕಾರ್ಮಿಕ ಇಲಾಖೆ 3 ಸಂಚಾರಿ ಆರೋಗ್ಯ ಕ್ಲಿನಿಕ್ ವಾಹನಗಳಿಗೆ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿದರು.
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ-ಫಲಾನುಭವಿಗಳಿಗೆ ಹಾಗೂ ಅವರ ಅವಲಂಭಿತರಿಗೆ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಒದಗಿಸುವ ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಯನ್ನು ಅನುಷ್ಠಾನಗೊಳಿಸಲು ಮಂಡಳಿಯಿಂದ ಜಿಲ್ಲಾವಾರು ಸಂಚಾರಿ ಆರೋಗ್ಯ ಕ್ಲಿನಿಕ್ ವಾಹನಗಳನ್ನು ನೀಡಿದೆ.
ಅದರಂತೆ ದಾವಣಗೆರೆ ಜಿಲ್ಲೆಗೆ ಒಟ್ಟು 3 ಸಂಚಾರಿ ಆರೋಗ್ಯ ಕ್ಲಿನಿಕ್ ವಾಹನಗಳನ್ನು ಹಂಚಿಕೆ ಮಾಡಲಾಗಿದೆ. ಈ ಸಂಚಾರಿ ಆರೋಗ್ಯ ಕ್ಲಿನಿಕ್ ವಾಹನಗಳು ಜಿಲ್ಲೆಯಾದ್ಯಂತ ಸಂಚರಿಸಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ-ತಪಾಸಣೆ ಮತ್ತು ಚಿಕಿತ್ಸೆ ಒದಗಿಸುವ ಕೆಲಸವನ್ನು ನಿರ್ವಹಿಸಲಿದೆ.
ಕಾರ್ಮಿಕ ಅಧಿಕಾರಿ ಜಿ.ಇಬ್ರಾಹಿಂ ಸಾಬ್, ಕಾರ್ಮಿಕ ನಿರೀಕ್ಷಕರುಗಳಾದ ರಾಜಶೇಖರ್ ಹಿರೇಮಠ, ನಾಗೇಶ್ ಆರ್ ಹಾಗೂ ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ಮತ್ತು ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಹಾಜರಿದ್ದರು.