SUDDIKSHANA KANNADA NEWS/ DAVANAGERE/ DATE:24-10-2024
ಬೆಂಗಳೂರು: ರಾಜ್ಯ ಹಾಗೂ ದೇಶ ವಿದೇಶಗಳಲ್ಲಿ ಪ್ರವಾಸಿ ಸ್ಥಳಗಳ ಬಗ್ಗೆ ವೆಬ್‍ಸೈಟ್ ಮೂಲಕ ಮಾಹಿತಿ ದೊರೆಯುವಂತಾಗಬೇಕು. ಪ್ರವಾಸಿಗರಿಗೆ ಉತ್ತಮ ವಾತಾವರಣ ನಿರ್ಮಿಸಬೇಕು. ಹೋಂಸ್ಟೇ. ರೆಸಾರ್ಟ್‍ಗಳು ನೋಂದಣಿ ಮಾಡಿಕೊಳ್ಳಬೇಕು. ಪ್ರವಾಸಿಗರಿಗೆ ಕಿರಿಕಿರಿ ಉಂಟಾಗದಂತೆ ಗಮನಹರಿಸುವುದು ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ ನೀಡಿದರು.
ಮಡಿಕೇರಿ ನಗರ ಹೊರವಲಯದ ಖಾಸಗಿ ರೆಸಾರ್ಟ್‍ನಲ್ಲಿ ನಡೆದ ‘ಕನೆಕ್ಟ್ ಕರ್ನಾಟಕ-2024’ಕುರಿತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೊಡಗು ಜಿಲ್ಲೆಯಲ್ಲಿ ಮುಂದಿನ ಎರಡು ವರ್ಷದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವಲ್ಲಿ ಈಗಿನಿಂದಲೇ ಯೋಜನೆ ರೂಪಿಸಬೇಕಿದೆ. ಪರಿಸರ ಪ್ರವಾಸೋದ್ಯಮಕ್ಕೆ ಒತ್ತು ನೀಡಬೇಕಿದೆ ಎಂದು ಹೇಳಿದರು.
ಕರ್ನಾಟಕ ಪ್ರವಾಸೋದ್ಯಮ ಸಂಸ್ಥೆಯ ಪ್ರತಿನಿಧಿಯೊಬ್ಬರು ಮಾತನಾಡಿ ಕರ್ನಾಟಕ ಪ್ರವಾಸೋದ್ಯಮ ಸಂಸ್ಥೆಯಿಂದ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವಲ್ಲಿ ಹಲವು ಉತ್ತೇಜನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಹೆಸರು ನೋಂದಾಯಿಸಲು ಮುಂದಾಗಬೇಕಿದೆ ಎಂದರು.
ಸಂವಾದ ಸಂದರ್ಭದಲ್ಲಿ ಮಾತನಾಡಿದ ಮೋಂತಿ ಗಣೇಶ್ ಅವರು ಕೊಡಗು ಜಿಲ್ಲೆಯಲ್ಲಿ 2003ರಲ್ಲಿ ಹೋಂಸ್ಟೇಗಳ ಪರಿಕಲ್ಪನೆ ಆರಂಭವಾಯಿತು. ಜಿಲ್ಲೆಯಲ್ಲಿ 2200 ಕ್ಕೂ ಹೆಚ್ಚು ಹೋಂಸ್ಟೇಗಳು ನೋಂದಣಿಯಾಗಿದ್ದು, ಹೋಂಸ್ಟೇಗಳಿಗೆ ಒಂದು ನೀತಿ ಜಾರಿಗೊಳಿಸಬೇಕು ಎಂದು ಸಲಹೆ ಮಾಡಿದರು.
ಅನಧಿಕೃತ ಹೋಂಸ್ಟೇಗಳು ಹೆಸರು ನೋಂದಣಿಗೆ ಮುಂದಾಗಲು ಹೆಚ್ಚಿನ ಉತ್ತೇಜನ ನೀಡಬೇಕು. ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ನೆಹರು ಮಂಟಪ, ಗದ್ದಿಗೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಬೇಕಿದೆ. ಜೊತೆಗೆ ವ್ಯೂ ಪಾಯಿಂಟ್‍ಗಳನ್ನು ಮತ್ತಷ್ಟು ಆಕರ್ಷಣೀಯಗೊಳಿಸಬೇಕು. ರಸ್ತೆ ಬದಿ ಕಸ ಬಿಸಾಡುವುದನ್ನು ತಡೆಯಬೇಕಿದೆ. ಮಾಂದಲ್ ಪಟ್ಟಿಯಲ್ಲಿ ಸಿಮೆಂಟ್ ರಸ್ತೆ ನಿರ್ಮಿಸಬೇಕಿದೆ. ಮಲ್ಲಳ್ಳಿ ಮತ್ತು ಇರ್ಪು ಜಲಪಾತವನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕಿದೆ ಎಂದರು.
ಮಡಿಕೇರಿ ನಗರದಲ್ಲಿನ ಕೋಟೆಯು ಐತಿಹಾಸಿಕ ಸ್ಥಳವಾಗಿದ್ದು, ಮೂರು ವರ್ಷಗಳಿಂದ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಪೂರ್ಣಗೊಂಡಲ್ಲಿ ಹೆಚ್ಚಿನ ಪ್ರವಾಸಿಗರು ಭೇಟಿ ನೀಡುತ್ತಾರೆ. ಆದ್ದರಿಂದ ಈ ಬಗ್ಗೆ ಗಮನಹರಿಸಬೇಕು ಎಂದು ಮೊಂತಿ ಗಣೇಶ್ ಅವರು ಸಲಹೆ ಮಾಡಿದರು.
ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ನಾಗೇಂದ್ರ ಪ್ರಸಾದ್ ಅವರು ಮಾತನಾಡಿ ಕೊಡಗು ಜಿಲ್ಲೆಗೆ ಪ್ರತೀ ವಾರಾಂತ್ಯದಲ್ಲಿ ಒಂದು ಲಕ್ಷ ಜನರು ಭೇಟಿ ನೀಡುತ್ತಾರೆ. ಆದ್ದರಿಂದ ವಿವಿಧೋದ್ದೇಶ ಯೋಜನೆಯಡಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಬೇಕು ಎಂದು ಕೋರಿದರು.
ಪ್ರವಾಸೋದ್ಯಮ ಸಂಘದ ಗೌರವ ಸಲಹೆಗಾರರಾದ ಅನಿಲ್ ಎಚ್.ಟಿ. ಅವರು ಮಾತನಾಡಿ ಕೊಡಗು ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕವಾಗಿ ಮಾಹಿತಿ ದೊರೆಯುವಲ್ಲಿ ವಿವಿಧ ಪ್ರಚಾರ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಅಂತರ್‍ಜಾಲ ಮೂಲಕ ವಿವಿಧ ಭಾಷೆಯಲ್ಲಿ ಮಾಹಿತಿ ದೊರೆಯುವಂತಾಗಬೇಕು ಎಂದು ಅವರು ಸಲಹೆ
ನೀಡಿದರು.
ಕರ್ನಾಟಕ ಪ್ರವಾಸೋದ್ಯಮ ಸಂಸ್ಥೆಯ ಅಧ್ಯಕ್ಷರಾದ ಕೆ.ಶ್ಯಾಮರಾಜ್, ಕರ್ನಾಟಕ ಹೋಟೆಲ್ ಅಸೋಷಿಯೇಷನ್‍ನ ಅಧ್ಯಕ್ಷರಾದ ಜಿ.ಕೆ.ಶೆಟ್ಟಿ, ಕರ್ನಾಟಕ ಪ್ರವಾಸೋದ್ಯಮ ಸಂಸ್ಥೆಯ ಸದಸ್ಯರಾದ ಅಯ್ಯಪ್ಪ ಸೋಮಯ್ಯ, ಬೆಂಗಳೂರು ಹೋಟೆಲ್ ಅಸೋಷಿಯೇಷನ್ ಅಧ್ಯಕ್ಷರಾದ ಪಿ.ಸಿ.ರಾವ್, ಜಿಲ್ಲಾ ಹೋಟೆಲ್ ಅಸೋಷಿಯೇಷನ್ ಅಧ್ಯಕ್ಷರಾದ ದಿನೇಶ್ ಕಾರ್ಯಪ್ಪ, ಜಿಲ್ಲಾ ಹೋಟೆಲ್ ಅಸೋಷಿಯೇಷನ್ ಸಂಸ್ಥೆಯ ಸಲಹೆಗಾರರಾದ ಜಿ.ಚಿದ್ವಿಲಾಸ್, ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾದ ಬಿ.ಜಿ.ಅನಂತಶಯನ, ಜಿಲ್ಲಾ ಹೋಟೆಲ್ ಅಸೋಷಿಯೇಷನ್ ಸಂಸ್ಥೆಯ ಕಾರ್ಯದರ್ಶಿ ನಾಜೀರ್, ಜಿಲ್ಲಾ ಟೂರ್ ಅಂಡ್ ಟ್ರಾವೆಲ್ ಸಂಸ್ಥೆಯ ಅಧ್ಯಕ್ಷರಾದ ವಸಂತ, ಛಾಯಾ ನಂಜಪ್ಪ, ಕರ್ನಾಟಕ ಪ್ಲಾಂಟರ್ ಅಸೋಷಿಯೇಷನ್‍ನ ಸದಸ್ಯರಾದ ಮೋಹನ್ ದಾಸ್, ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಸಮಾಲೋಚಕರಾದ ಜತಿನ್ ಬೋಪಣ್ಣ ಇತರರು ಇದ್ದರು.
ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಅವರು ಸ್ವಾಗತಿಸಿದರು, ಜಿಲ್ಲಾ ಹೋಟೆಲ್ ಅಸೋಷಿಯೇಷನ್‍ನ ಸಲಹೆಗಾರರಾದ ಜಿ.ಚಿದ್ವಿಲಾಸ್ ಅವರು ನಿರೂಪಿಸಿದರು, ಕುಮಾರಿ ಸ್ವಪ್ನಾ ಹಾಗೂ ಚೋಂದಮ್ಮ ನಾಡಗೀತೆ ಹಾಡಿದರು, ಹೋಟೆಲ್ ಅಸೋಷಿಯೇಷನ್‍ನ ಜಿಲ್ಲಾ ಅಧ್ಯಕ್ಷರಾದ ದಿನೇಶ್ ಕಾರ್ಯಪ್ಪ ವಂದಿಸಿದರು.