Home ದಾವಣಗೆರೆ ‘ರೈತರ ಸಂಕಷ್ಟ ನಿವಾರಣೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಲಿ’: ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ
ದಾವಣಗೆರೆನವದೆಹಲಿಬೆಂಗಳೂರು

‘ರೈತರ ಸಂಕಷ್ಟ ನಿವಾರಣೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಲಿ’: ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

Share
ದಾವಣಗೆರೆ
Share

ದಾವಣಗೆರೆ: ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ, ರೈತರ ಹಿತಾಸಕ್ತಿ ಹಾಗೂ ಮೂಲಸೌಕರ್ಯಗಳ ಬಲವರ್ಧನೆಗೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಸಮರ್ಪಕವಾಗಿ ಬಿಡುಗಡೆ ಮಾಡಬೇಕು. ಅಭಿವೃದ್ಧಿ ಯೋಜನೆಗಳ ಅನುಷ್ಠಾನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಮನ್ವಯ ಅತ್ಯಗತ್ಯ ಎಂದು ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಹೇಳಿದರು.

ಹರಪನಹಳ್ಳಿ ತಾಲ್ಲೂಕಿನ ಬೆಣ್ಣೆಹಳ್ಳಿ ಗ್ರಾಮದಲ್ಲಿ ಸೋಮವಾರ ನಂದಿಬೇವೂರಿನಿಂದ ಬಸವನಕೋಟೆಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ–236ರ ಕಿ.ಮೀ. 16.34ರಿಂದ 19.50ರವರೆಗಿನ ಬೆಣ್ಣೆಹಳ್ಳಿ ಗ್ರಾಮದ ಪರಿಮಿತಿಯಲ್ಲಿ ಆಯ್ದ ಭಾಗಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನ, ಕೇಂದ್ರ ಸರ್ಕಾರದ ಅನುದಾನ, ರೈತರ ಸಮಸ್ಯೆಗಳು ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಕುರಿತು ವಿವರಿಸಿದರು.

ಜಿಲ್ಲಾ ಖನಿಜ ನಿಧಿಯಡಿ ₹55 ಕೋಟಿಗೆ ಅನುಮೋದನೆ

ಜಿಲ್ಲಾ ಖನಿಜ ಪ್ರತಿಷ್ಠಾನ (ಡಿಎಂಎಫ್‌) ನಿಧಿಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸುಮಾರು ₹72 ಕೋಟಿ ಅನುದಾನದ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪೈಕಿ ₹55 ಕೋಟಿ ಮೊತ್ತದ ಕಾಮಗಾರಿಗಳಿಗೆ ಅನುಮೋದನೆ ದೊರೆತಿದೆ. ಈಗಾಗಲೇ ಹಲವು ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಈ ಅನುದಾನವನ್ನು ರಸ್ತೆ, ಮೂಲಸೌಕರ್ಯ ಹಾಗೂ ಸಾರ್ವಜನಿಕ ಅಗತ್ಯಗಳ ಕಾಮಗಾರಿಗಳಿಗೆ ಬಳಸಲಾಗುತ್ತಿದೆ ಎಂದು ತಿಳಿಸಿದರು.

ಹರಪನಹಳ್ಳಿ ಕ್ಷೇತ್ರದ ಅಭಿವೃದ್ಧಿಗೆ ಶಾಸಕರಾದ ಲತಾ ಮಲ್ಲಿಕಾರ್ಜುನ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಕ್ಷೇತ್ರದ ಅಗತ್ಯಗಳನ್ನು ಗುರುತಿಸಿ, ಸಂಬಂಧಪಟ್ಟ ಇಲಾಖೆಗಳು ಹಾಗೂ ಸಚಿವರ ಗಮನಕ್ಕೆ ತರುವ ಮೂಲಕ ಅನುದಾನ ಮಂಜೂರಾತಿಗೆ ಪ್ರಯತ್ನಿಸುತ್ತಿದ್ದಾರೆ. ಅದರ ಫಲವಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಅನುಷ್ಠಾನದ ಹಂತ ತಲುಪಿವೆ ಎಂದು ಶ್ಲಾಘಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಜನರ ಸಮಸ್ಯೆಗಳನ್ನು ಗುರುತಿಸಿ, ಅವುಗಳಿಗೆ ತ್ವರಿತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಅನುದಾನ ಮಂಜೂರಾದರೂ ಬಿಡುಗಡೆಯಾಗದಿರುವುದು, ಕಾಮಗಾರಿಗಳು ವಿಳಂಬವಾಗುವುದು ಹಾಗೂ ಯೋಜನೆಗಳ ಪ್ರಯೋಜನ ಅರ್ಹರಿಗೆ ತಲುಪದಿರುವಂತಹ ಸಮಸ್ಯೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಪ್ರತಿಯೊಂದು ಯೋಜನೆಯ ಪ್ರಗತಿಯನ್ನು ಪರಿಶೀಲಿಸಿ, ಪಾರದರ್ಶಕತೆ, ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಿದಾಗ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ಗ್ರಾಮದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ತಮ್ಮ ಚಟುವಟಿಕೆಗಳಿಗೆ ಪ್ರತ್ಯೇಕ ಕಟ್ಟಡ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದ್ದಾರೆ. ಸುಮಾರು 50 ಮಹಿಳೆಯರಿಗೆ ಅನುಕೂಲವಾಗುವ ಈ ಬೇಡಿಕೆಯನ್ನು ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.

ಕೇಂದ್ರದ ಅನುದಾನ ಬಿಡುಗಡೆಗೆ ಒತ್ತಾಯ

ರಾಜ್ಯಕ್ಕೆ ಬರಬೇಕಾದ ವಿಪತ್ತು ಪರಿಹಾರ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಅನುದಾನವನ್ನು ಬಿಡುಗಡೆ ಮಾಡುವಲ್ಲಿ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಸಂಸದೆ ಅಸಮಾಧಾನ ವ್ಯಕ್ತಪಡಿಸಿದರು.

ವಿಪತ್ತು ಪರಿಹಾರ ನಿಧಿಯಡಿ ರಾಜ್ಯಕ್ಕೆ ಅಗತ್ಯವಿರುವ ಸುಮಾರು ₹22,400 ಕೋಟಿ ಅನುದಾನ ಬಿಡುಗಡೆಗೆ ಒತ್ತಾಯಿಸಲಾಗಿದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮೀಸಲಾದ ಹಣವನ್ನು ವಿಳಂಬವಿಲ್ಲದೆ ಒದಗಿಸಬೇಕು ಎಂದು ಹೇಳಿದರು.
ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಜನರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಅಗತ್ಯವಿದೆ. ಯೋಜನೆಗಳ ವೆಚ್ಚದಲ್ಲಿ ರಾಜ್ಯ ಸರ್ಕಾರದ ಪಾಲು ಹೆಚ್ಚಾಗುತ್ತಿರುವುದರಿಂದ ಆರ್ಥಿಕ ಹೊರೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅನುದಾನ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.
ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸಮರ್ಪಕ ಪರಿಹಾರ ಒದಗಿಸುವುದು ಸರ್ಕಾರಗಳ ಆದ್ಯತೆಯಾಗಬೇಕು. ಬೆಳೆ ನಷ್ಟ ಪರಿಹಾರ, ಕೃಷಿ ಅಭಿವೃದ್ಧಿ ಹಾಗೂ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ಒದಗಿಸುವ ಮೂಲಕ ರೈತರ ಆರ್ಥಿಕ ಸ್ಥಿತಿಯನ್ನು ಬಲಪಡಿಸಬೇಕು ಎಂದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ರೈತರ ಹಿತದೃಷ್ಟಿಯಿಂದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅಗತ್ಯ ಅನುದಾನ ಒದಗಿಸಬೇಕು. ಅಪ್ಪರ್‌ ಭದ್ರಾ ಯೋಜನೆ, ಬೈರನಪಾದ ಏತ ನೀರಾವರಿ ಯೋಜನೆ ಹಾಗೂ ಕೆರೆ ತುಂಬಿಸುವ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆರ್ಥಿಕ ನೆರವು ಅಗತ್ಯವಿದೆ. ತುಂಗಭದ್ರಾ ನದಿಯಲ್ಲಿ ಹೆಚ್ಚುವರಿ ನೀರು ಲಭ್ಯವಾದಾಗ ಅದನ್ನು ಸಮರ್ಪಕವಾಗಿ ಬಳಸಿಕೊಂಡು ಕೆರೆಗಳನ್ನು ತುಂಬಿಸುವ ಮೂಲಕ ಕೃಷಿ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸಬೇಕು. ರೈತರ ಸಂಕಷ್ಟ ನಿವಾರಣೆ, ನೀರಾವರಿ ಸೌಲಭ್ಯಗಳ ವಿಸ್ತರಣೆ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಒತ್ತಾಯಿಸಿದರು.

ವಾಹನಗಳಿಗೆ ಬಳಸುವ ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣದ ಪ್ರಮಾಣದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಗತ್ಯವಿದೆ. ಕೇಂದ್ರ ಸರ್ಕಾರದ ಇ–20 ಮಾನದಂಡದ ಪ್ರಕಾರ ಪೆಟ್ರೋಲ್‌ನಲ್ಲಿ ಶೇ 20ರಷ್ಟು ಎಥನಾಲ್ ಮಿಶ್ರಣ ಮಾಡಬೇಕು. ಆದರೆ, ಕೆಲವು ಕಡೆ ಶೇ 30ರಿಂದ 35ರಷ್ಟು ಎಥನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ಅನುಮಾನಗಳಿವೆ. ತೈಲ ಸಂಸ್ಕರಣಾ ಸಂಸ್ಥೆಗಳು ಹಾಗೂ ಪೆಟ್ರೋಲ್ ಬಂಕ್‌ಗಳಲ್ಲಿ ನಿಗದಿತ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು. ವಾಹನಗಳ ಕಾರ್ಯಕ್ಷಮತೆ ಹಾಗೂ ಗ್ರಾಹಕರ ಹಿತದೃಷ್ಟಿಯಿಂದ ಎಥನಾಲ್ ಮಿಶ್ರಣದ ಪ್ರಮಾಣದಲ್ಲಿ ಪಾರದರ್ಶಕತೆ ಮತ್ತು ಗುಣಮಟ್ಟದ ನಿಯಂತ್ರಣ ಅತ್ಯಗತ್ಯ ಎಂದರು.

ಹರಪನಹಳ್ಳಿ ಹಾಗೂ ಜಗಳೂರು ಭಾಗಗಳಿಂದ ಉನ್ನತ ಶಿಕ್ಷಣಕ್ಕಾಗಿ ಬೇರೆಡೆ ತೆರಳುವ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳ ಅಗತ್ಯ ಹೆಚ್ಚಾಗಿದೆ. ಎಂಜಿನಿಯರಿಂಗ್, ನರ್ಸಿಂಗ್ ಹಾಗೂ ಪದವಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ವಸತಿ ನಿಲಯಗಳನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಸಚಿವರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸಿ ಎರಡು ಹೆಚ್ಚುವರಿ ವಸತಿ ನಿಲಯಗಳನ್ನು ಮಂಜೂರು ಮಾಡುವ ಭರವಸೆ ದೊರೆತಿದೆ. ಶಿಕ್ಷಣ, ವಸತಿ ಹಾಗೂ ಸಾರಿಗೆ ಸೌಲಭ್ಯಗಳನ್ನು ವಿಸ್ತರಿಸುವ ಮೂಲಕ ಗ್ರಾಮೀಣ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲಾಗುವುದು ಎಂದರು.

ಜನರ ವಿಶ್ವಾಸಕ್ಕೆ ತಕ್ಕಂತೆ ಕೆಲಸ ಮಾಡುವುದು ನಮ್ಮ ಕರ್ತವ್ಯ

ದಾವಣಗೆರೆ ಲೋಕಸಭಾ ಕ್ಷೇತ್ರದ ಮೊದಲ ಮಹಿಳಾ ಸಂಸದೆಯಾಗಿ ಜನರು ನನ್ನನ್ನು ಆಯ್ಕೆ ಮಾಡಿರುವುದು ದೊಡ್ಡ ಜವಾಬ್ದಾರಿಯಾಗಿದೆ. ಎಂಟು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು, ಸಂಸತ್ತಿನಲ್ಲಿ ಅವರ ಧ್ವನಿಯಾಗುವುದು ಹಾಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ಕ್ಷೇತ್ರಕ್ಕೆ ತರುವುದು ನನ್ನ ಪ್ರಮುಖ ಕರ್ತವ್ಯವಾಗಿದೆ ಎಂದು ಹೇಳಿದರು.

ಸಂಸತ್ತಿನ ಅಧಿವೇಶನಗಳು ಹಾಗೂ ವಿವಿಧ ಸ್ಥಾಯಿ ಸಮಿತಿಗಳ ಸಭೆಗಳಲ್ಲಿ ಭಾಗವಹಿಸಿ ಆರೋಗ್ಯ, ಶಿಕ್ಷಣ, ಕೃಷಿ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಜನಸಾಮಾನ್ಯರಿಗೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಲಾಗುತ್ತಿದೆ. ಕೇಂದ್ರದ ಯೋಜನೆಗಳ ಅನುಷ್ಠಾನದಲ್ಲಿ ಎದುರಾಗುವ ಸಮಸ್ಯೆಗಳನ್ನು ಅಧಿಕಾರಿಗಳು ಹಾಗೂ ಸಾರ್ವಜನಿಕರು ತಮ್ಮ ಗಮನಕ್ಕೆ ತಂದರೆ ಸಂಬಂಧಪಟ್ಟ ಸಚಿವಾಲಯಗಳೊಂದಿಗೆ ಚರ್ಚಿಸಿ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದರು.
ಜನರ ವಿಶ್ವಾಸವೇ ನಮ್ಮ ಬಹುದೊಡ್ಡ ಆಸ್ತಿ. ಆ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುವುದು ನಮ್ಮ ಕರ್ತವ್ಯ. ರಾಜಕೀಯ ಅಧಿಕಾರವನ್ನು ಜನಸೇವೆಗೆ ದೊರೆತ ಅವಕಾಶವೆಂದು ಭಾವಿಸಿ ಕೆಲಸ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹರಪನಹಳ್ಳಿ ಶಾಸಕರಾದ ಲತಾ ಮಲ್ಲಿಕಾರ್ಜುನ, ಬ್ಲಾಕ್ ಅಧ್ಯಕ್ಷ ಕುಬೇರಪ್ಪ, ಬೆಣ್ಣೆಹಳ್ಳಿ ಪ್ರಕಾಶ್, ಉದಯಶಂಕರ್, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಬೆಣ್ಣೆಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Share

Recent Comments

No comments to show.
Related Articles