SUDDIKSHANA KANNADA NEWS/ DAVANAGERE/ DATE:17-11-2024
ಬಾಗಲಕೋಟೆ: ಸಹಕಾರ ಕ್ಷೇತ್ರ ರಾಜ್ಯ ವ್ಯಾಪ್ತಿಗೆ ಸೇರಿದ್ದು. ಆದರೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರದಲ್ಲಿ ಸಹಕಾರ ಇಲಾಖೆ ಆರಂಭಿಸಿದರು. ಇದಕ್ಕೆ ಅಮಿತ್ ಶಾ ಅವರೇ ಸಚಿವರು. ಇದು ಕೇಂದ್ರದ ವ್ಯಾಪ್ತಿಗೆ ಬರುವ ವಿಷಯ ಅಲ್ಲ. ಇದರಿಂದಾಗಿ ನಮಗೆ ನಬಾರ್ಡ್ ನಿಂದ ಬರುವ ರೈತರ ಪಾಲಿನ ನೆರವು ಕಡಿತಗೊಂಡಿದೆ. ಒಮ್ಮೆಲೇ 58% ನಬಾರ್ಡ್ ನೆರವು ಕಡಿತಗೊಂಡಿದೆ. ಇದು ನಮ್ಮ ರೈತರಿಗೆ ಆದ ಬಹಳ ದೊಡ್ಡ ಅನ್ಯಾಯ ಎಂದು ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಆಯೋಜಿಸಿದ್ದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ, 2024 ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ವಿತರಿಸಿ ಮಾತನಾಡಿದರು.
ರೈತರ ಬಗ್ಗೆ ಬಿಜೆಪಿ ಭಾಷಣ ಮಾತ್ರ ಚನ್ನಾಗಿ ಮಾಡುತ್ತದೆ. ಬರೀ ಭಾಷಣದಿಂದ ರೈತರ ಬದುಕನ್ನು ಉದ್ದಾರ ಮಾಡಲು ಸಾಧ್ಯವಿಲ್ಲ. ಆದ್ದರಿಂದ ನಬಾರ್ಡ್ ನಿಂದ ನಮಗೆ ಆದ ಅನ್ಯಾಯವನ್ನು ಪ್ರತಿಯೊಬ್ಬರು ಪ್ರತಿಭಟಿಸಬೇಕು ಎಂದು ಕರೆ ನೀಡಿದರು.
2013 ರಲ್ಲಿ 8165 ಕೋಟಿ ರೈತರ ಸಾಲವನ್ನು ನಾನು ಮೊದಲು ಬಾರಿ ಮುಖ್ಯಮಂತ್ರಿಯಾಗಿ ಮನ್ನಾ ಮಾಡಿದ್ದೆ. ಇದರಿಂದ ಸಹಸ್ರಾರು ರೈತರ ಬದುಕಿಗೆ ನೆರವಾಯಿತು. ಸಮಾನತೆಯ ಸಮಾಜ ನಿರ್ಮಾಣ ಆಗಬೇಕು ಎನ್ನುವ ಆಶಯದಿಂದ ನಾನು ಸಮಾಜದ ಎಲ್ಲಾ ವರ್ಗದವರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ರೂಪಿಸಿ ಜಾರಿ ಮಾಡಿದೆ ಎಂದರು.
ಕಟ್ಟಡಗಳ ನಿರ್ಮಾಣಕ್ಕೆ ನೆರವು
ಸಹಕಾರ ಮಹಾಮಂಡಳದ ಕಟ್ಟಡಗಳ ನಿರ್ಮಾಣಕ್ಕೆ ಸರ್ಕಾರದ ನೆರವು ನೀಡಬೇಕು ಎನ್ನುವ ಬೇಡಿಕೆ ಇದೆ. ಈ ಬೇಡಿಕೆ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.