Site icon Kannada News-suddikshana

17 ಪರೀಕ್ಷಾ ಕೇಂದ್ರಗಳಲ್ಲಿ ಮೇ. 4ಕ್ಕೆ ನೀಟ್ ಪರೀಕ್ಷೆ: ಎಕ್ಸಾಂ ಬರೆಯಲಿದ್ದಾರೆ 7,999 ವಿದ್ಯಾರ್ಥಿಗಳು

SUDDIKSHANA KANNADA NEWS/ DAVANAGERE/ DATE-03-05-2025

ದಾವಣಗೆರೆ: ಮೇ.4ರಂದು ಜಿಲ್ಲೆಯ 17 ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದ್ದು, ಯಾವುದೇ ಆಕ್ಷೇಪಣೆಗಳಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಪರೀಕ್ಷಾ ಕರ‍್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೀಟ್ ಪರೀಕ್ಷೆ ಪೂರ್ವ ಸಿದ್ದತೆ ಕುರಿತು ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಜಿ. ಎಂ. ಗಂಗಾಧರ ಸ್ವಾಮಿ ಅವರು, ಜಿಲ್ಲೆಯಲ್ಲಿ ಸುಗಮವಾಗಿ ಪರೀಕ್ಷೆ ನಡೆಸುವ ದೃಷ್ಟಿಯಿಂದ ಅಗತ್ಯ ಸಿದ್ದತೆ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಪರೀಕ್ಷೆ ನಡೆಯುವ ಸಂರ‍್ಭದಲ್ಲಿ ಏನಾದರೂ ತೊಡಕುಗಳುಂಟಾದಲ್ಲಿ, ಇನ್ನಿತರೆ ಲೋಪದೋಷಗಳು ಕಂಡುಬಂದಲ್ಲಿ ಮೇಲಾಧಿಕಾರಿಗಳಿಗೆ ತಿಳಿಸಬೇಕು. ನೋಡಲ್ ಅಧಿಕಾರಿಗಳು ಪರೀಕ್ಷಾ ಮಾರ್ಗಸೂಚಿಗಳನ್ನು ಎಚ್ಚರಿಕೆಯಿಂದ ಕಟ್ಟುನಿಟ್ಟಾಗಿ ಪಾಲಿಸಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಮೂಲಭೂತ ಸೌಕರ‍್ಯಗಳನ್ನು ಒದಗಿಸುವುದರ ಜೊತೆಗೆ ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಸಿಬ್ಬಂದಿ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಜಿಲ್ಲಾ ಸಂಯೋಜಕಿ ಹಾಗೂ ಕೇಂದ್ರಿಯ ವಿದ್ಯಾಲಯ ಪ್ರಾಂಶುಪಾಲರಾದ ರೇಖಾ ಜೋಷಿ ಮಾತನಾಡಿ, ದಾವಣಗೆರೆ ನಗರದಲ್ಲಿ 15 ಪರೀಕ್ಷಾ ಕೇಂದ್ರ ಹಾಗೂ ಹರಿಹರ ನಗರದಲ್ಲಿ 2 ಪರೀಕ್ಷಾ ಕೇಂದ್ರಗಳು ಸೇರಿ ಜಿಲ್ಲೆಯಲ್ಲಿ ಒಟ್ಟು 17 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟಾರೆ 7,999 ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆಯಲಿದ್ದಾರೆ. ಕೊಠಡಿಗಳಲ್ಲಿ ಸಿಸಿಟಿವಿ ಮತ್ತು ವಿದ್ಯಾರ್ಥಿಗಳ ಚಲನವಲನ, ಮತ್ತು ಸಿಸಿಟಿವಿ ಡಿವಿಆರ್ ಮತ್ತು ರೆಕಾರ್ಡಿಂಗ್ ಆಗುತ್ತಿರುವ ಬಗ್ಗೆ ಖುದ್ದು ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಪಿ. ಎನ್. ಲೋಕೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ, ಎಲ್ಲಾ ಪರೀಕ್ಷಾ ಕೇಂದ್ರದ ಪ್ರಾಂಶುಪಾಲರು, ನೋಡಲ್ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Exit mobile version